
ಗದಗ: ಜನವರಿ 26ರಂದು ಗಣರಾಜ್ಯೋತ್ಸವವನ್ನು ವ್ಯವಸ್ಥಿತವಾಗಿ ಆಚರಿಸಲು ವಿವಿಧ ಸಮಿತಿಗಳನ್ನು ರಚಿಸಲಾಗಿದ್ದು, ಆಯಾ ಸಮಿತಿಯವರು ತಮ್ಮ ಜವಾಬ್ದಾರಿಯನ್ನು ಸಮರ್ಪಕವಾಗಿ ನಿರ್ವಹಿಸಬೇಕು ಎಂದು ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ ಅಧಿಕಾರಿಗಳಿಗೆ ಸೂಚಿಸಿದರು.
ಜಿಲ್ಲಾಧಿಕಾರಿ ಕಚೇರಿಯಲ್ಲಿ ಶುಕ್ರವಾರ ನಡೆದ ಗಣರಾಜ್ಯೋತ್ಸವ ಆಚರಣೆಯ ಪೂರ್ವಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಯಾವುದೇ ಲೋಪದೋಷಗಳಾಗದಂತೆ ಕ್ರಮವಹಿಸಬೇಕು. ಗಣರಾಜ್ಯೋತ್ಸವದ ಅಂಗವಾಗಿ ಕಾರ್ಯಕ್ರಮದ ಹಿಂದಿನ ದಿನ ಹಾಗೂ ಕಾರ್ಯಕ್ರಮದ ದಿನ ಎರಡು ದಿನಗಳ ಕಾಲ ಸರ್ಕಾರಿ ಕಚೇರಿ ಹಾಗೂ ನಗರದ ವಿವಿಧ ವೃತ್ತಗಳಲ್ಲಿ ಸ್ವಚ್ಛತೆಯೊಂದಿಗೆ ವಿದ್ಯುತ್ ದೀಪಾಲಂಕಾರಕ್ಕೆ ಕ್ರಮ ಕೈಗೊಳ್ಳಬೇಕು ಎಂದರು.
ಅವಳಿ ನಗರದ ಪ್ರಮುಖ ಸ್ಥಳಗಳಲ್ಲಿ ಬ್ಯಾನರ್ ಅಳವಡಿಕೆಗೆ ಕ್ರಮ ವಹಿಸಬೇಕು. ಗಣರಾಜ್ಯೋತ್ಸವ ದಿನದಂದು ಎಲ್ಲ ಕಚೇರಿ ಮತ್ತು ಶಾಲಾ ಕಾಲೇಜುಗಳ ಸಿಬ್ಬಂದಿ ತಮ್ಮ ಕಾರ್ಯಾಲಯದ ಧ್ವಜಾರೋಹಣವನ್ನು ಬೆಳಿಗ್ಗೆ 7.30ರೊಳಗೆ ನೆರವೇರಿಸಿ 8.30ಕ್ಕೆ ನಗರದ ಕೆ.ಎಚ್.ಪಾಟೀಲ ಜಿಲ್ಲಾ ಕ್ರೀಡಾಂಗಣದಲ್ಲಿ ಹಾಜರಾಗಬೇಕು. ಅಂದು ಬೆಳಿಗ್ಗೆ 9ಕ್ಕೆ ನಗರದ ಕೆ.ಎಚ್.ಪಾಟೀಲ ಜಿಲ್ಲಾ ಕ್ರೀಡಾಂಗಣದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರಿಂದ ಸಾರ್ವಜನಿಕ ಧ್ವಜಾರೋಹಣ ಕಾರ್ಯಕ್ರಮ ನಡೆಯಲಿದೆ. ಕಾರ್ಯಕ್ರಮಕ್ಕೆ ಶಾಲಾ ಕಾಲೇಜುಗಳಿಂದ ವಿದ್ಯಾರ್ಥಿಗಳನ್ನು ವ್ಯವಸ್ಥಿತವಾಗಿ ಕರೆತರುವುದು ಹಾಗೂ ಅವರಿಗೆ ಆಸನದ ವ್ಯವಸ್ಥೆ ಇರುವಂತೆ ನೋಡಿಕೊಳ್ಳಬೇಕು. ಎಲ್ಲ ಅಧಿಕಾರಿಗಳು ಹಾಗೂ ಸಿಬ್ಬಂದಿ ಕಡ್ಡಾಯವಾಗಿ ಸಾರ್ವಜನಿಕ ಧ್ವಜಾರೋಹಣ ಕಾರ್ಯಕ್ರಮ ಸಮಯಕ್ಕೆ ಸರಿಯಾಗಿ ಹಾಜರಿರಬೇಕು ಎಂದರು.
ಕಾರ್ಯಕ್ರಮದ ಸ್ಥಳದ ಸ್ವಚ್ಛತೆ ಕುರಿತು ಗಮನ ಹರಿಸಬೇಕು. ಶುದ್ಧ ಕುಡಿಯುವ ನೀರಿನ ವ್ಯವಸ್ಥೆ ಹಾಗೂ ತುರ್ತು ಚಿಕಿತ್ಸೆಗಾಗಿ ಅಂಬುಲೆನ್ಸ್ ವ್ಯವಸ್ಥೆ ಕಾರ್ಯಕ್ರಮದ ಸ್ಥಳದಲ್ಲಿ ಲಭ್ಯವಿರುವಂತೆ ನೋಡಿಕೊಳ್ಳಬೇಕು. ಅತಿಥಿಗಳಿಗೆ ಆಸನದ ವ್ಯವಸ್ಥೆ, ಅಲ್ಪ ಉಪಾಹಾರದ ವ್ಯವಸ್ಥೆ ಕುರಿತು ಕ್ರಮ ಕೈಗೊಳ್ಳಬೇಕು. ವಿವಿಧ ರಂಗಗಳಲ್ಲಿ ಅತ್ಯುತ್ತಮ ಸಾಧನೆ ಮಾಡಿದ ಸಾಧಕರಿಗೆ ಸನ್ಮಾನಿಸುವ ಕಾರ್ಯಕ್ರಮವನ್ನು ಅಚ್ಚುಕಟ್ಟಾಗಿ ನಡೆಸಬೇಕು. ಕಾರ್ಯಕ್ರಮದಲ್ಲಿ ಶಿಷ್ಟಾಚಾರ ಉಲ್ಲಂಘನೆಯಾಗದಂತೆ ನಿಗಾವಹಿಸಬೇಕು ಎಂದು ತಿಳಿಸಿದರು.
ಸಭೆಯಲ್ಲಿ ಸಾಂಸ್ಕೃತಿಕ ಕಾರ್ಯಕ್ರಮದ ವ್ಯವಸ್ಥೆ, ಎನ್‌ಎಸ್‌ಎಸ್ ಹಾಗೂ ಎನ್‌ಸಿಸಿ ಪರೇಡ್, ಮೂಲಸೌಕರ್ಯಗಳ ವ್ಯವಸ್ಥೆ, ವೇದಿಕೆ ನಿರ್ಮಾಣ, ಸನ್ಮಾನ ಕಾರ್ಯಕ್ರಮ ಸೇರಿದಂತೆ ವಿವಿಧ ವಿಷಯಗಳ ಕುರಿತು ಚರ್ಚಿಸಲಾಯಿತು.
ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಬಸನಗೌಡ ಕೋಟೂರ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಬಸವರಾಜ ಬಳ್ಳಾರಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕಿ ಪದ್ಮಾವತಿ ಜಿ., ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಅಧಿಕಾರಿ ಎಂ.ಎಂ.ತುಂಬರಮಟ್ಟಿ, ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಉಪ ನಿರ್ದೇಶಕ ರಮೇಶ್ ಎಸ್., ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಎಸ್.ಎಸ್.ನೀಲಗುಂದ, ಭೂ ದಾಖಲೆ ಇಲಾಖೆ ಉಪನಿರ್ದೇಶಕ ರುದ್ರಗೌಡ, ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಎಸ್.ಬಿ.ಮಸನಾಯಕ, ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಆರ್.ಎಸ್.ಬುರುಡಿ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.