
ಗದಗ: ಇಂದಿನ ಸ್ಪರ್ಧಾತ್ಮಕ ಶಿಕ್ಷಣ ವ್ಯವಸ್ಥೆಯಲ್ಲಿ ಪಠ್ಯಕ್ರಮದ ಜತೆಗೆ ಸಹಪಠ್ಯ ಚಟುವಟಿಕೆಗಳಿಗೂ ಸಮಾನ ಪ್ರಾಮುಖ್ಯತೆ ನೀಡುವುದು ಅವಶ್ಯಕ ಎಂದು ಪ್ರಾಂಶುಪಾಲ ಎ.ಕೆ.ಮಠ ತಿಳಿಸಿದರು.
ನಗರದ ಕೆಎಲ್ಇ ಸಂಸ್ಥೆಯ ಕಲಾ ಮತ್ತು ವಾಣಿಜ್ಯ ಮಹಾವಿದ್ಯಾಲಯದಲ್ಲಿ ನಡೆದ ವಾರ್ಷಿಕ ಕ್ರೀಡಾಕೂಟದಲ್ಲಿ ಮಾತನಾಡಿದರು.
‘ವಿದ್ಯಾರ್ಥಿಗಳ ಬೌದ್ಧಿಕ ಬೆಳವಣಿಗೆ ಜತೆಗೆ ದೈಹಿಕ, ಮಾನಸಿಕ ಹಾಗೂ ಸಾಮಾಜಿಕ ವ್ಯಕ್ತಿತ್ವ ವಿಕಸನಕ್ಕೂ ಕ್ರೀಡೆಗಳು ಮಹತ್ವದ ಪಾತ್ರವಹಿಸುತ್ತವೆ’ ಎಂದರು.
ಸೋಲನ್ನು ಸಹಜವಾಗಿ ಸ್ವೀಕರಿಸುವ ಮನೋಭಾವ ಹಾಗೂ ಜಯವನ್ನು ವಿನಯದಿಂದ ಆಚರಿಸುವ ಗುಣ ಕ್ರೀಡಾಂಗಣದಿಂದಲೇ ಬೆಳೆದು ಬರುತ್ತದೆ ಎಂದು ತಿಳಿಸಿದರು.
ವಿದ್ಯಾರ್ಥಿಗಳಿಗೆ ಕ್ರೀಡಾ ಪ್ರತಿಜ್ಞೆ ಬೋಧಿಸಿದ ಅವರು, ನಿಯಮಪಾಲನೆ, ಶಿಸ್ತು ಹಾಗೂ ತಂಡಭಾವನೆಗಳ ಮಹತ್ವವನ್ನು ಮನದಟ್ಟು ಮಾಡಿದರು.
ಕ್ರೀಡಾ ಸಂಘದ ಅಧ್ಯಕ್ಷ ಪ್ರೊ. ರಾಜು ಯಲಬುರ್ಗಿ ಅವರು ಕ್ರೀಡಾ ಸಾಮಗ್ರಿಗಳಿಗೆ ಪೂಜೆ ಸಲ್ಲಿಸುವ ಮೂಲಕ ಕ್ರೀಡಾ ಚಟುವಟಿಕೆಗಳಿಗೆ ಚಾಲನೆ ನೀಡಿದರು.
ದೈಹಿಕ ಶಿಕ್ಷಣ ನಿರ್ದೇಶಕ ಪ್ರೊ. ವೀರಣ್ಣ ಬಡಿಗೇರ ಉಪಸ್ಥಿತರಿದ್ದರು.
ಸಭಾ ಕಾರ್ಯಕ್ರಮದ ನಂತರ ಹೊರಾಂಗಣ ಕ್ರೀಡಾ ಸ್ಪರ್ಧೆಗಳಲ್ಲಿ ವಿದ್ಯಾರ್ಥಿಗಳು ಉತ್ಸಾಹದಿಂದ ಭಾಗವಹಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.