ADVERTISEMENT

ನಷ್ಟದ ಸುಳಿಯಿಂದ ಹೊರತರಲು ಪ್ರಯತ್ನ

ಲಾಕ್‌ಡೌನ್‌ನಿಂದ ಸಾರಿಗೆ ಸಂಸ್ಥೆಗೆ ನಷ್ಟ– ಸಚಿವ ಶ್ರೀರಾಮುಲು

​ಪ್ರಜಾವಾಣಿ ವಾರ್ತೆ
Published 29 ಆಗಸ್ಟ್ 2021, 4:34 IST
Last Updated 29 ಆಗಸ್ಟ್ 2021, 4:34 IST
ಗದಗ ನಗರದಲ್ಲಿ ವಾಯುವ್ಯ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಕಚೇರಿಗೆ ಭೇಟಿ ನೀಡಿದ ವೇಳೆ ಸಾರಿಗೆ ಸಚಿವ ಶ್ರೀರಾಮುಲು ಮಾತನಾಡಿದರು
ಗದಗ ನಗರದಲ್ಲಿ ವಾಯುವ್ಯ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಕಚೇರಿಗೆ ಭೇಟಿ ನೀಡಿದ ವೇಳೆ ಸಾರಿಗೆ ಸಚಿವ ಶ್ರೀರಾಮುಲು ಮಾತನಾಡಿದರು   

ಗದಗ: ‘ಸಾರಿಗೆ ನೌಕರರ ಬಹುತೇಕ ಬೇಡಿಕೆಗಳನ್ನು ಸರ್ಕಾರ ಈಗಾಗಲೇ ಈಡೇರಿಸಿದೆ. ಇನ್ನುಳಿದ ಬೇಡಿಕೆಗಳ ಈಡೇರಿಕೆಗೆ ಸರ್ಕಾರದ ಮಟ್ಟದಲ್ಲಿ ಪ್ರಾಮಾಣಿಕ ಪ್ರಯತ್ನ ಮಾಡುವೆ. ಸಾರಿಗೆ ನೌಕರರನ್ನು ಸರ್ಕಾರಿ ನೌಕರರೆಂದು ಪರಿಗಣಿಸುವ ಬಗ್ಗೆ ಚರ್ಚೆ ನಡೆಯುತ್ತಿದೆ’ ಎಂದು ಸಾರಿಗೆ ಸಚಿವ ಬಿ.ಶ್ರೀರಾಮುಲು ಹೇಳಿದರು.

ಶನಿವಾರ ಗದುಗಿಗೆ ಭೇಟಿ ನೀಡಿದ್ದ ಅವರು ವಾಯವ್ಯ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಹಾಗೂ ಸಾರಿಗೆ ಕಚೇರಿಗಳಿಗೆ ಭೇಟಿ ನೀಡಿ, ಪರಿಶೀಲನೆ ನಡೆಸಿದ ವೇಳೆ ಮಾತನಾಡಿದರು.

‘ಕೋವಿಡ್‌–19 ಲೌಕ್‌ಡೌನ್‌ ಸಂದರ್ಭದಲ್ಲಿ ರಾಜ್ಯ ಸಾರಿಗೆ ಸಂಸ್ಥೆಗೆ ಬಹಳಷ್ಟು ನಷ್ಟವಾಗಿದೆ. ನಷ್ಟದಲ್ಲಿರುವ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯನ್ನು ಲಾಭದಾಯಕ ಹಳಿಗೆ ತರುವ ಪ್ರಯತ್ನ ನಿರಂತರವಾಗಿ ನಡೆದಿದೆ. ಆದರೂ, ಸಾರಿಗೆ ನೌಕರರಿಗೆ ತೊಂದರೆ ಆಗದಂತೆ ನೂತನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಂಬಳ ಬಿಡುಗಡೆ ಮಾಡಿದ್ದಾರೆ’ ಎಂದು ತಿಳಿಸಿದರು.

ADVERTISEMENT

‘ಸಾರಿಗೆ ಇಲಾಖೆಯಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಹೊಸ ಯೋಜನೆ ಜಾರಿಗೆ ತರಲು ಪ್ರಯತ್ನ ಮಾಡಲಾಗುತ್ತಿದೆ. ರಾಜ್ಯದ ಸಾರಿಗೆ ಕ್ಷೇತ್ರದಲ್ಲಿ ಹೊಸ ತಂತ್ರಜ್ಞಾನ ಅಳವಡಿಸುವ ಉದ್ದೇಶ ಹೊಂದಲಾಗಿದೆ. ಮೊದಲ ಹಂತದಲ್ಲಿ ಡೀಸೆಲ್ ಬದಲಾಗಿ ಎಲೆಕ್ಟ್ರಿಕ್ ಬಸ್‌ಗಳನ್ನು ಓಡಿಸುವ ಮೂಲಕ ಸಂಸ್ಥೆಯನ್ನು ನಷ್ಟದ ಸುಳಿಯಿಂದ ಹೊರತರುವ ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು’ ಎಂದು ತಿಳಿಸಿದರು.

‘ಶಾಲಾ ಕಾಲೇಜುಗಳು ಆರಂಭವಾಗಿರುವ ಹಿನ್ನಲೆಯಲ್ಲಿ ವಿದ್ಯಾರ್ಥಿಗಳ ಪ್ರಯಾಣಕ್ಕೆ ತೊಂದರೆಯಾಗದ ರೀತಿಯಲ್ಲಿ ಬಸ್ ಸೌಲಭ್ಯ ಕಲ್ಪಿಸಲಾಗಿದೆ. ಗ್ರಾಮೀಣ ಭಾಗದ ಶಾಲಾ ಮಕ್ಕಳಿಗೂ ಸಾರಿಗೆ ಬಸ್ ಸೌಲಭ್ಯ ಒದಗಿಸುವಂತೆ ಆದೇಶ ನೀಡಲಾಗಿದೆ’ ಎಂದು ಹೇಳಿದರು.

ವಿಧಾನ ಪರಿಷತ್ ಸದಸ್ಯ ಎಸ್.ವಿ.ಸಂಕನೂರ, ದ್ರಾಕ್ಷಾರಸ ಮಂಡಳಿ ಅಧ್ಯಕ್ಷ ಕಾಂತಿಲಾಲ ಬನ್ಸಾಲಿ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸಂಗಮೇಶ ದುಂದೂರ, ಬಿಜೆಪಿ ಮುಖಂಡರಾದ ರಾಜು ಕುರಡಗಿ, ಎಸ್.ಎಚ್.ಶಿವನಗೌಡರ, ರಾಘವೇಂದ್ರ ಯಳವತ್ತಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.