
ಗದಗ: ಮಕ್ಕಳಲ್ಲಿ ಅಡಗಿರುವ ಪ್ರತಿಭೆ ಗುರುತಿಸಿ ಪ್ರೋತ್ಸಾಹಿಸಲು ಪ್ರತಿಭಾ ಕಾರಂಜಿ ಉತ್ತಮ ವೇದಿಕೆಯಾಗಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ.ಸುಧಾಕರ್ ತಿಳಿಸಿದರು.
ನಗರದ ಭೂಮರಡ್ಡಿ ಸರ್ಕಲ್ ಹತ್ತಿರದ ಜಗದ್ಗುರು ತೋಂಟದಾರ್ಯ ಪ್ರೌಢಶಾಲೆಯಲ್ಲಿ ಶನಿವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಶಾಲಾ ಶಿಕ್ಷಣ ಇಲಾಖೆ ಸಹಯೋಗದಲ್ಲಿ ನಡೆದ ಜಿಲ್ಲಾಮಟ್ಟದ ಪ್ರತಿಭಾ ಕಾರಂಜಿ ಹಾಗೂ ಕಲೋತ್ಸವ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಮಕ್ಕಳಲ್ಲಿರುವ ಪ್ರತಿಭೆಯನ್ನು ಗುರುತಿಸಲು ಸಾಧ್ಯವಾಗಿರುವುದಿಲ್ಲ. ಆದರೆ, ಪ್ರತಿಭಾ ಕಾರಂಜಿ ಕಾರ್ಯಕ್ರಮದಿಂದ ಮಕ್ಕಳ ಪ್ರತಿಭೆಗಳ ಅನಾವರಣ ಸಾಧ್ಯವಾಗುತ್ತದೆ. ಮಕ್ಕಳ ವಿಚಾರಕ್ಕೆ ಬಂದಾಗ ನಾವು ಬಾಲ್ಯದಲ್ಲಿ ನಡೆದು ಬಂದ ದಾರಿಯನ್ನು ಸ್ಮರಿಸಿಕೊಳ್ಳುತ್ತೇವೆ. ವ್ಯಕ್ತಿಯ ಜೀವನದಲ್ಲಿ ಬಾಲ್ಯಾವಸ್ಥೆ ಅತ್ಯುತ್ತಮ ಕ್ಷಣವಾಗಿರುತ್ತದೆ ಎಂದರು.
ಶಿಕ್ಷಕರ ವೃತ್ತಿ ಪವಿತ್ರವಾಗಿದೆ. ಮಕ್ಕಳು ಶಾಲೆಗೆ ಬಂದಾಗ ಅವರ ಪ್ರತಿಭೆಗಳನ್ನು ಗುರುತಿಸುವವರೇ ನಿಜವಾದ ಶಿಕ್ಷಕರು. ಬಾಲ್ಯದಲ್ಲಿ ನೃತ್ಯ, ಸಂಗೀತ, ಚಿತ್ರಕಲೆ ಮುಂತಾದ ಕಲೆಗಳನ್ನು ಕಲಿತುಕೊಂಡು ಜೀವನದಲ್ಲಿ ಉಜ್ವಲ ಭವಿಷ್ಯ ನಿರ್ಮಾಣ ಮಾಡಬಹುದು ಎಂದರು.
ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಮಾತನಾಡಿ, ಉನ್ನತ ಶಿಕ್ಷಣ ಸಚಿವರು ಈ ಕಾರ್ಯಕ್ರಮಕ್ಕೆ ಬಂದಿರುವುದು ಖುಷಿಯ ವಿಷಯವಾಗಿದೆ. ಶಾಲೆಯಲ್ಲಿನ ಶಿಕ್ಷಕರು ಮಕ್ಕಳಲ್ಲಿನ ಕಲೆಗಳನ್ನು ಪ್ರೋತ್ಸಾಹಿಸಬೇಕು ಎಂದರು.
ಗದಗ ಬೆಟಗೇರಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಅಕ್ಬರಸಾಬ ಬಬರ್ಜಿ, ಜಿಲ್ಲಾಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಟಾನ ಪ್ರಾಧಿಕಾರದ ಅಧ್ಯಕ್ಷ ಬಿ.ಬಿ.ಅಸೂಟಿ, ತಾಲ್ಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಅಶೋಕ ಮಂದಾಲಿ, ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್, ಡಯಟ್ ( ಅಭಿವೃದ್ಧಿ) ಉಪ ನಿರ್ದೇಶಕ ಜಿ.ಎಂ.ಮುಂದಿನಮನಿ, ಪಿ.ಎಂ.ಪೋಷಣ ಶಕ್ತಿ ನಿರ್ಮಾಣ ಶಿಕ್ಷಣಾಧಿಕಾರಿ ಸರಸ್ವತಿ ಡಿ.ಕನವಳ್ಳಿ, ಪ್ರತಿಭಾ ಕಾರಂಜಿ ನೋಡಲ್ ಅಧಿಕಾರಿ ಎಚ್.ಬಿ.ರಡ್ಡೇರ, ಗದಗ ಗ್ರಾಮೀಣ ವಲಯದ ಕ್ಷೇತ್ರ ಶಿಕ್ಷಣಾಧಿಕಾರಿ ವಿ.ವಿ. ನಡುವಿನಮನಿ, ಗದಗ ಶಹರ ವಲಯದ ಕ್ಷೇತ್ರ ಶಿಕ್ಷಣಾಧಿಕಾರಿ ಆರ್.ವಿ.ಶೆಟ್ಟೆಪ್ಪನವರ ಇದ್ದರು.
ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಆರ್.ಎಸ್.ಬುರುಡಿ ಸ್ವಾಗತಿಸಿದರು. ಎಂ.ಎ.ಯರಗುಡಿ ಕಾರ್ಯಕ್ರಮ ನಿರೂಪಿಸಿದರು.
ಶಿಕ್ಷಕರು ಮಕ್ಕಳಲ್ಲಿ ಅಡಕವಾಗಿರುವ ಕಲೆಗಳನ್ನು ಪ್ರೋತ್ಸಾಹಿಸಬೇಕು. ಪ್ರತಿಭಾ ಕಾರಂಜಿ ಕಾರ್ಯಕ್ರಮದ ಸದುಪಯೋಗವನ್ನು ಮಕ್ಕಳು ಪಡೆದಿಕೊಳ್ಳಬೇಕು. ಮಕ್ಕಳು ವಿದ್ಯಾವಂತರಾಗಿ ಉನ್ನತ ಹುದ್ದೆ ಅಲಂಕರಿಸಿ ಸದೃಢ ದೇಶ ನಿರ್ಮಿಸಬೇಕುಡಾ.ಎಂ.ಸಿ.ಸುಧಾಕರ್ ಸಚಿವ