ಗದಗ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಉತ್ತರ ಕರ್ನಾಟಕ ಮಹಾಸಭಾ ವತಿಯಿಂದ ಗದಗ ಜಿಲ್ಲಾಧಿಕಾರಿ ಕಚೇರಿ ಎದುರು ನಡೆಯುತ್ತಿರುವ ಅನಿರ್ದಿಷ್ಟಾವಧಿ ಮುಷ್ಕರ ಬುಧವಾರ ಎರಡನೇ ದಿನಕ್ಕೆ ಕಾಲಿಟ್ಟಿತು.
ಅರಣ್ಯ ಭೂಮಿ ಸಾಗುವಳಿ ಮಾಡುವ ರೈತರಿಗೆ ಹಕ್ಕುಪತ್ರ ವಿತರಿಸಬೇಕು, ನಾಗಾವಿ ಗ್ರಾಮದಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್ ವಿಶ್ವವಿದ್ಯಾಲಯ ನಿರ್ಮಾಣಕ್ಕೆ ಭೂಸ್ವಾಧೀನ ಮಾಡಿಕೊಂಡು 9 ವರ್ಷಗಳು ಕಳೆದರೂ ರೈತರಿಗೆ ಪರಿಹಾರ ನೀಡಿಲ್ಲ. ಕೂಡಲೇ ಅವರಿಗೆ ಪರಿಹಾರ ನೀಡಬೇಕು. ಇಲ್ಲವಾದರೆ, ಪರ್ಯಾಯ ವ್ಯವಸ್ಥೆ ಮಾಡಬೇಕು ಎಂದು ಪ್ರತಿಭಟನಕಾರರು ಆಗ್ರಹಿಸಿದರು.
ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ ಪ್ರತಿಭಟನಾ ಸ್ಥಳಕ್ಕೆ ಬುಧವಾರ ಸಂಜೆ ಭೇಟಿ ನೀಡಿ, ನಿಮ್ಮ ಎಲ್ಲ ಬೇಡಿಕೆಗಳನ್ನು ಪರಿಶೀಲಿಸಿ, ಬಗೆಹರಿಸಲು ಪ್ರಯತ್ನಿಸುವುದಾಗಿ ಹೇಳಿದರು. ಅಹೋರಾತ್ರಿ ಧರಣಿ ಹಿಂಪಡೆಯುವಂತೆ ಪ್ರತಿಭಟನಕಾರರಲ್ಲಿ ಕೋರಿದರು.
ಈ ವೇಳೆ ಮಾತನಾಡಿದ ಉತ್ತರ ಕರ್ನಾಟಕ ಮಹಸಭಾದ ರಾಜ್ಯ ಘಟಕದ ಅಧ್ಯಕ್ಷ ರವಿಕಾಂತ ಅಂಗಡಿ, ‘ನಮ್ಮ ನ್ಯಾಯಯುತ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಈ ಹಿಂದೆ ಹಲವು ಬಾರಿ ಜಿಲ್ಲಾಡಳಿತ ಕಚೇರಿ ಎದುರು ಪ್ರತಿಭಟನೆ ನಡೆಸಲಾಗಿದೆ. ಆಗಲೂ ಇದೇ ರೀತಿಯ ಭರವಸೆ, ಆಶ್ವಾಸನೆಗಳನ್ನು ನೀಡಿ ಪ್ರತಿಭಟನೆ ಹಿಂಪಡೆಯುವಂತೆ ಮಾಡಲಾಗಿದೆ. ಆದರೆ, ಈವರೆಗೆ ನಮ್ಮ ಬೇಡಿಕೆಗಳು ಈಡೇರಿಲ್ಲ. ಈ ಬಾರಿ ನಮ್ಮ ಹೋರಾಟಕ್ಕೆ ತಾರ್ಕಿಕ ಅಂತ್ಯ ಸಿಗುವವರೆಗೆ ಪ್ರತಿಭಟನೆ ಹಿಂಪಡೆಯುವುದಿಲ್ಲ’ ಎಂದು ಹೇಳಿದರು.
ಬಳಿಕ ಜಿಲ್ಲಾಧಿಕಾರಿಗೆ ಮನವಿಪತ್ರ ಸಲ್ಲಿಸಿದರು. ಪ್ರತಿಭಟನೆಯಲ್ಲಿ ರೈತ ಮುಖಂಡರು, ರೈತರು ಭಾಗವಹಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.