ಮುಂಡರಗಿ: ನಗರೋತ್ಥಾನ ಯೊಜನೆಯ ಅಡಿಯಲ್ಲಿ ಕಳೆದ ಎರಡು ವರ್ಷಗಳಿಂದ ಪಟ್ಟಣದ ವಿವಿಧ ಭಾಗಗಳಲ್ಲಿ ಸ್ಥಗಿತಗೊಂಡಿರುವ ಹಲವು ಕಾಮಗಾರಿಗಳನ್ನು ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ ಅವರು ಶುಕ್ರವಾರ ಪರಿಶೀಲಿಸಿದರು. ಕಾಮಗಾರಿ ಅಪೂರ್ಣಗೊಳಿಸಿದ ಅಧಿಕಾರಿಗಳನ್ನು ಹಾಗೂ ಗುತ್ತಿಗೆದಾರರನ್ನು ತರಾಟಿಗೆ ತಗೆದುಕೊಂಡರು.
‘ಮೂಲ ಸೌಲಭ್ಯಾಧಾರಿತ ಕಾಮಗಾರಿಗಳು ಸಂಪೂರ್ಣವಾಗಿ ಸ್ಥಗಿತಗೊಂಡಿರುವುದರಿಂದ ಸಾರ್ವಜನಿಕರಿಗೆ ತೀವ್ರ ತೊಂದರೆಯಾಗುತ್ತಲಿದೆ. ಸಂಬಂದಪಟ್ಟ ಅಧಿಕಾರಿಗಳು ಹಾಗೂ ಗುತ್ತಿಗೆದಾರರು ಕಾಮಗಾರಿಗಳನ್ನು ಪೂರ್ಣಗೊಳಿಸಿ ಸಾರ್ವಜನಿಕರಿಗೆ ಅನುಕೂಲ ಮಾಡಿಕೊಡಬೇಕು’ ಎಂದು ಸೂಚಿಸಿದರು.
‘ಎರಡು ವರ್ಷಗಳ ಹಿಂದೆಯೇ ಪುರಸಭೆ ವ್ಯಾಪ್ತಿಯ ಎಲ್ಲ ವಾರ್ಡ್‌ಗಳಲ್ಲಿ ರಸ್ತೆ, ಚರಂಡಿ, ಕುಡಿಯುವ ನೀರಿನ ಪೈಪ್‌ಲೈನ್ ದುರಸ್ಥಿ ಮೊದಲಾದ ಕಾಮಗಾರಿಗಳಿಗೆ ಗುತ್ತಿಗೆ ನೀಡಲಾಗಿತ್ತು. ಆದರೆ, ಟೆಂಡರ್ ಪಡೆದ ಗುತ್ತಿಗೆದಾರರು ಎರಡು ವರ್ಷ ಗತಿಸಿದರು ಕಾಮಗಾರಿಯನ್ನು ಪೂರ್ಣಗೊಳಿಸಿಲ್ಲ. ಇದರಿಂದ ಸಾರ್ವಜನಿಕರು ಪರದಾಡುವಂತಾಗಿದೆ. ಗುತ್ತಿಗೆದಾರರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕಾಗುತ್ತದೆ’ ಎಂದು ಎಚ್ಚರಿಸಿದರು.
ಪುರಸಭೆಯ ಉಪಾಧ್ಯಕ್ಷ ನಾಗೇಶ ಹುಬ್ಬಳ್ಳಿ ಮಾತನಾಡಿ, ‘ಜನಪ್ರತಿನಿಧಿಗಳು, ಅಧಿಕಾರಿಗಳು ಹಾಗೂ ಗುತ್ತಿಗೆದಾರರ ವಿಳಂಬ ನೀತಿಯಿಂದಾಗಿ ಸಾರ್ವಜನಿಕರು ತೊಂದರೆ ಅನುಭವಿಸುತ್ತಿದ್ದಾರೆ. ಕೆಲವು ಗುತ್ತಿಗೆದಾರರು ಕಳಪೆ ಕಾಮಗಾರಿ ಮಾಡುತ್ತಿದ್ದಾರೆ. ಕಾಲಮಿತಿಯಲ್ಲಿ ಕಾಮಗಾರಿಯನ್ನು ಪೂರ್ಣಗೊಳಿಸುತ್ತಿಲ್ಲ’ ಎಂದು ಆರೋಪಿಸಿದರು.
ಸ್ಥಗಿತಗೊಂಡಿರುವ ಕಾಮಗಾರಿಗಳನ್ನು ಟೆಂಡರ್ ಒಪ್ಪಂದದಂತೆ ಕಾಲ ಮೀತಿಯೊಳಗೆ ಮುಗಿಸಬೇಕು. ಕಾಮಗಾರಿಯ ವೆಚ್ಚ ಹೆಚ್ಚಾದ ಕಾರಣ ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಚರ್ಚಿಸಿ ಹೆಚ್ಚುವರಿ ಹಣ ಮಂಜೂರು ಮಾಡಿಸಿಕೊಳ್ಳಬಹುದು ಎಂದು ಸಲಹೆ ನೀಡಿದರು.
ಯೋಜನಾ ನಿರ್ದೇಶಕ ಕೊಟ್ರೇಶ ಕೊಟ್ರಗೌಡ್ರ, ಕಾರ್ಯಪಾಲಕ ಶರಣಪ್ಪ ಓಣಿ, ಶಾಮಲಾ, ಮುಖ್ಯಾಧಿಕಾರಿ ಶಂಕರ ಹುಲ್ಲಮ್ಮನವರ, ಮುಖಂಡರಾದ ನಾಗರಾಜ ಕೊರ್ಲಹಳ್ಳಿ, ತಿಮ್ಮಣ್ಣ ಡೋಣಿ ಹಾಗೂ ಪುರಸಭೆಯ ಸಿಬ್ಬಂದಿ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.