ADVERTISEMENT

‘ಸಂಶೋಧನೆ ಹೊಸ ಅವಕಾಶಗಳಿಗೆ ದಾರಿಯಾಗಲಿ’

‘ಉನ್ನತ ಶಿಕ್ಷಣ: ಅವಕಾಶಗಳು ಮತ್ತು ಸವಾಲುಗಳು’ ವಿಷಯ ಕುರಿತಾದ ಒಂದು ದಿನದ ಕಾರ್ಯಾಗಾರ

​ಪ್ರಜಾವಾಣಿ ವಾರ್ತೆ
Published 9 ಸೆಪ್ಟೆಂಬರ್ 2025, 3:11 IST
Last Updated 9 ಸೆಪ್ಟೆಂಬರ್ 2025, 3:11 IST
ಗದಗ ನಗರದ ಮಹಾತ್ಮಗಾಂಧಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್ ವಿಶ್ವವಿದ್ಯಾಲಯದಲ್ಲಿ ಸೋಮವಾರ ನಡೆದ ಕಾರ್ಯಾಗಾರವನ್ನು ವಿಶ್ರಾಂತ ಕುಲಪತಿ ಪ್ರೊ. ಬಿ.ತಿಮ್ಮೇಗೌಡ ಉದ್ಘಾಟಿಸಿದರು 
ಗದಗ ನಗರದ ಮಹಾತ್ಮಗಾಂಧಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್ ವಿಶ್ವವಿದ್ಯಾಲಯದಲ್ಲಿ ಸೋಮವಾರ ನಡೆದ ಕಾರ್ಯಾಗಾರವನ್ನು ವಿಶ್ರಾಂತ ಕುಲಪತಿ ಪ್ರೊ. ಬಿ.ತಿಮ್ಮೇಗೌಡ ಉದ್ಘಾಟಿಸಿದರು    

ಗದಗ: ‘ಉನ್ನತ ಶಿಕ್ಷಣವನ್ನು ಅಂತರರಾಷ್ಟ್ರೀಯ ಮಟ್ಟದೊಂದಿಗೆ ಸಂಯೋಜಿಸುವ ಪ್ರಕ್ರಿಯೆ ಅಗತ್ಯವಾಗಿ ಆಗಬೇಕಿದೆ’ ಎಂದು ವಿಶ್ರಾಂತ ಕುಲಪತಿ ಪ್ರೊ. ಬಿ. ತಿಮ್ಮೇಗೌಡ ಹೇಳಿದರು.

ಇಲ್ಲಿನ ಮಹಾತ್ಮಗಾಂಧಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್ ವಿಶ್ವವಿದ್ಯಾಲಯದ ಕೌಶಲ್ಯ ವಿಕಾಸ ಭವನದಲ್ಲಿ ಸೋಮವಾರ ನಡೆದ ‘ಉನ್ನತ ಶಿಕ್ಷಣ: ಅವಕಾಶಗಳು ಮತ್ತು ಸವಾಲುಗಳು’ ವಿಷಯ ಕುರಿತಾದ ಒಂದು ದಿನದ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದರು.

‘ಪ್ರಾಧ್ಯಾಪಕರು ನವೀಕೃತ ಪಠ್ಯಕ್ರಮದ ಕುರಿತು ಹೆಚ್ಚಿನ ಆಸಕ್ತಿ ತೋರಬೇಕು. ವಿದ್ಯಾರ್ಥಿಗಳಿಗೆ ಹೊಸ ಅವಕಾಶಗಳನ್ನು ಕಲ್ಪಿಸುವಂತೆ ಬೋಧನೆ ಮತ್ತು ಸಂಶೋಧನೆ ಸಮನ್ವಯಗೊಳ್ಳಬೇಕು’ ಎಂದು ಹೇಳಿದರು.

ADVERTISEMENT

ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದ ಕುಲಪತಿ ಪ್ರೊ. ಎ.ಎಂ.ಖಾನ್ ಮಾತನಾಡಿ, ‘ಉನ್ನತ ಶಿಕ್ಷಣದಲ್ಲಿ ತಂತ್ರಜ್ಞಾನ ಪ್ರಮುಖ ಪಾತ್ರ ವಹಿಸುತ್ತಿದೆ. ವಿದ್ಯಾರ್ಥಿಗಳ ಭವಿಷ್ಯ ರೂಪಿಸುವಲ್ಲಿ ಅಧ್ಯಾಪಕರು ಪ್ರಮುಖ ಹೊಣೆಗಾರಿಕೆ ನಿಭಾಯಿಸಬೇಕು. ಬೋಧನೆಗೆ ಹೊಸ ತಂತ್ರಜ್ಞಾನಗಳನ್ನು ಅಳವಡಿಸಿಕೊಂಡಾಗ ವಿದ್ಯಾರ್ಥಿಗಳಿಗೆ ಉತ್ತಮ ಅವಕಾಶಗಳು ಕೈಗೆಟುಕುತ್ತವೆ’ ಎಂದು ಹೇಳಿದರು.

ಅಧ್ಯಕ್ಷತೆ ವಹಿಸಿದ್ದ ವಿಶ್ವವಿದ್ಯಾಲಯದ ಪ್ರಭಾರ ಕುಲಪತಿ ಪ್ರೊ. ಸುರೇಶ ವಿ. ನಾಡಗೌಡರ ಮಾತನಾಡಿ, ‘ಉನ್ನತ ಶಿಕ್ಷಣ ಕ್ಷೇತ್ರದಲ್ಲಿ ಹೊಸ ಅವಕಾಶಗಳನ್ನು ವಿದ್ಯಾರ್ಥಿಗಳು ಬಳಸಿಕೊಳ್ಳುವುದರೊಂದಿಗೆ, ಸಂಶೋಧನೆ ಹಾಗೂ ನವೋದ್ಯಮದ ಮೂಲಕ ಸಮಾಜಮುಖಿ ಕಾರ್ಯಕ್ಕೆ ದಾರಿತೋರಬೇಕು’ ಎಂದರು.

ಪದವಿ ಕಾಲೇಜು ಶಿಕ್ಷಣ ಇಲಾಖೆಯ ಧಾರವಾಡ ವಿಭಾಗದ ಜಂಟಿ ನಿರ್ದೇಶಕಿ ಕರಿಮುನ್ನಾಸಾ ಸಯ್ಯೇದ್ ಅವರು ಉನ್ನತ ಶಿಕ್ಷಣ ಕ್ಷೇತ್ರದ ಪ್ರಸ್ತುತ ಸವಾಲುಗಳು ಮತ್ತು ನಿರೀಕ್ಷೆಗಳ ಕುರಿತು ಮಾತನಾಡಿದರು.

ವಿಶ್ವವಿದ್ಯಾಲಯದ ಆಡಳಿತಾತ್ಮಕ ಅಧಿಕಾರಿ ಶಶಿಭೂಷಣ್ ದೇವೂರ, ವಿಶೇಷ ಅಧಿಕಾರಿ (ಶೈಕ್ಷಣಿಕ) ಮೃತ್ಯುಂಜಯ ಮೆಣಸಿನಕಾಯಿ, ಎಂ.ಬಿ.ಚನ್ನಪ್ಪಗೌಡರ, ಐಕ್ಯುಎಸಿ ಸಂಯೋಜಕ ಸಂತೋಷ್ ಕುಮಾರ್ ಪಿ.ಕೆ. ಸೇರಿದಂತೆ ವಿಶ್ವವಿದ್ಯಾಲಯದ ಅಧ್ಯಾಪಕರು, ಸಿಬ್ಬಂದಿ, ವಿದ್ಯಾರ್ಥಿಗಳು ಹಾಗೂ ವಿವಿಧ ಪದವಿ ಕಾಲೇಜಿನ ಅಧ್ಯಾಪಕರು ಭಾಗವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.