
ಗದಗ: ‘ಧಾರವಾಡದಲ್ಲಿ ನಡೆಯುತ್ತಿರುವ ಯುವಜನರ ಹೋರಾಟದಲ್ಲಿದ್ದ ನಾಯಕರನ್ನು ಬಂಧಿಸಿರುವ ಪೊಲೀಸರ ಕ್ರಮ ಖಂಡನೀಯ’ ಎಂದು ಎಐಡಿಎಸ್ಒ ಗದಗ ಜಿಲ್ಲಾ ಸಂಚಾಲಕಿ ಎಂ. ಶಾಂತಿ ಹೇಳಿದ್ದಾರೆ.
‘ಕೇಂದ್ರ ಹಾಗೂ ರಾಜ್ಯ ಸರ್ಕಾರದ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡುವಂತೆ ಆಗ್ರಹಿಸಿ ಬುಧವಾರ ಧಾರವಾಡದಲ್ಲಿ ಉದ್ಯೋಗಾಕಾಂಕ್ಷಿಗಳ ಹೋರಾಟ ಸಮಿತಿಯಿಂದ ಪ್ರತಿಭಟನೆ ನಡೆಸುತ್ತಿದ್ದರು. ಯುವಜನರ ನ್ಯಾಯಯುತ ಹೋರಾಟಕ್ಕೆ ಬೆಂಬಲಿಸಲು ಬಂದ ಜನಪರ ಸಂಘಟನೆ ನಾಯಕರನ್ನು ಬಂಧಿಸಿದ್ದಾರೆ’ ಎಂದು ಕಿಡಿಕಾರಿದ್ದಾರೆ.
‘ಸರ್ಕಾರದ ಈ ನಡೆಯನ್ನು ಎಐಡಿಎಸ್ಓ ತೀವ್ರವಾಗಿ ಖಂಡಿಸುತ್ತದೆ. ಪೊಲೀಸರು ಕೇಳಿದ ಮಾಹಿತಿಯನ್ನು ಹಲವು ಬಾರಿ ನೀಡಿದ್ದಾಗಿಯೂ ಉದ್ಯೋಗಾಕಾಂಕ್ಷಿಗಳ ಹೋರಾಟಕ್ಕೆ ಅನುಮತಿ ನಿರಾಕರಿಸಲಾಗಿದೆ’ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
‘ರಾಜ್ಯದ ವಿದ್ಯಾರ್ಥಿಗಳು, ಯುವಜನರು ಒಂದಾಗಿ ಸರ್ಕಾರದ ವಿರುದ್ಧ ಧ್ವನಿ ಎತ್ತಬೇಕು. ಹೋರಾಡುವ ಪ್ರಜಾತಾಂತ್ರಿಕ ಹಕ್ಕಿನ ರಕ್ಷಣೆಗಾಗಿ ಹೋರಾಡಬೇಕು ಎಂದು ಎಐಡಿಎಸ್ಒ ಕರೆ ನೀಡುತ್ತದೆ’ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.