ADVERTISEMENT

ಆರೋಗ್ಯದ ಬಗ್ಗೆ ಕಾಳಜಿ ವಹಿಸಲು ಸಲಹೆ

ದೊಡ್ಡಳ್ಳಿ ಗ್ರಾಮದಲ್ಲಿ ಉಚಿತ ತಪಾಸಣಾ ಶಿಬಿರ

​ಪ್ರಜಾವಾಣಿ ವಾರ್ತೆ
Published 26 ಅಕ್ಟೋಬರ್ 2017, 8:51 IST
Last Updated 26 ಅಕ್ಟೋಬರ್ 2017, 8:51 IST

ಹೊಳೆನರಸೀಪುರ: ಗ್ರಾಮೀಣ ಪ್ರದೇಶದ ಜನರು ಆರೋಗ್ಯದ ಬಗ್ಗೆ ಹೆಚ್ಚು ಕಾಳಜಿ ವಹಿಸುವುದಿಲ್ಲ ಎಂದು ಅಖಿಲ ಭಾರತ ಕಾಂಗ್ರೆಸ್‌ ಸಾಮಾಜಿಕ ಸೇವಾ ಸಮಿತಿಯ ಜಿಲ್ಲಾಧ್ಯಕ್ಷ ಜೆ. ಜವರೇಗೌಡ ನುಡಿದರು.

ತಾಲ್ಲೂಕಿನ ದೊಡ್ಡಳ್ಳಿ ಗ್ರಾಮದಲ್ಲಿ ಇತ್ತೀಚೆಗೆ ಆಯೋಜಿಸಿದ್ದ ಉಚಿತ ಆರೋಗ್ಯ ತಪಾಸಣಾ ಶಿಬಿರದಲ್ಲಿ ಮಾತನಾಡಿದ ಅವರು, ಅನಾರೋಗ್ಯಕ್ಕೆ ತುತ್ತಾದರೂ ಚಿಕಿತ್ಸೆ ಪಡೆದುಕೊಳ್ಳುವುದಿಲ್ಲ. ಹಣದ ಸಮಸ್ಯೆ, ಕೆಲಸದ ಒತ್ತಡ ಇದಕ್ಕೆ ಕಾರಣ ಇರಬಹುದು. ಆದರೆ ಜನಪ್ರತಿನಿಧಿಗಳು ಗ್ರಾಮೀಣ ಪ್ರದೇಶದಲ್ಲಿ ಉಚಿತ ಆರೋಗ್ಯ ಶಿಬಿರ ಏರ್ಪಡಿಸಿ ಸಹಕಾರ ನೀಡಬೇಕು ಎಂದು ಮನವಿ ಮಾಡಿದರು.

ತಾಲ್ಲೂಕು ವೈದ್ಯಾಧಿಕಾರಿ ಡಾ. ರಾಜೇಶ್‌ ಮಾತನಾಡಿ, ರಕ್ತದೊತ್ತಡ, ಮಧುಮೇಹಿಗಳ ಸಂಖ್ಯೆ ಹೆಚ್ಚಾಗುತ್ತಿದೆ. ಗ್ರಾಮೀಣ ಜನರು ಇದರ ಬಗ್ಗೆ ಹೆಚ್ಚಿನ ಜಾಗೃತಿ ವಹಿಸುತ್ತಿಲ್ಲ. ರೋಗ ಉಲ್ಬಣಗೊಂಡ ನಂತರ ಚಿಕಿತ್ಸೆ ತೆಗೆದು ಕೊಳ್ಳುವುದಕ್ಕಿಂತ ರೋಗ ಬರದಂತೆ ತಡೆಯುವುದು ಒಳ್ಳೆಯದು. ಗ್ರಾಮೀಣ ಭಾಗದಲ್ಲಿ ಪರಿಸರವನ್ನು ಸ್ವಚ್ಚವಾಗಿ ಇರಿಸಿಕೊಂಡು ಆರೋಗ್ಯ ಕಾಪಾಡಿಕೊಳ್ಳಿ ಎಂದರು.

ADVERTISEMENT

ಡಾ. ನಟರಾಜ್‌ ಮಾತನಾಡಿ, ಕೆಮ್ಮು, ದಮ್ಮು, ಉಸಿರಾಟದ ಸಮಸ್ಯೆ ಉಂಟಾದಲ್ಲಿ ತಕ್ಷಣ ಚಿಕಿತ್ಸೆ ಪಡೆದುಕೊಳ್ಳಿ ಎಂದರು.
ನಾರಾಯಣ ಹೃದಯಾಲಯದ ವೈದ್ಯ ಡಾ. ಶಿವಪ್ರಸಾದ್‌ ಅವರು ಹೃದಯ ಸಮಸ್ಯೆಗಳ ಬಗ್ಗೆ ವಿವರಿಸಿದರು. ಗ್ರಾಮ ಪಂಚಾಯ್ತಿ ಅಧ್ಯಕ್ಷೆ ಮಾಲಿನಿ ಇದ್ದರು. ಹಾಸನ ಮೆಡಿಕಲ್‌ ಕಾಲೇಜಿನ ವೈದ್ಯೆ ಡಾ. ಅರ್ಪಿತಾ ಹಾಗೂ ತಂಡದವರು ತಪಾಸಣಾ ಶಿಬಿರ ನಡೆಸಿಕೊಟ್ಟರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.