ADVERTISEMENT

ಆಸ್ಪತ್ರೆ ಅವ್ಯವಸ್ಥೆ: ಸಚಿವ ಅಸಮಾಧಾನ

​ಪ್ರಜಾವಾಣಿ ವಾರ್ತೆ
Published 20 ಜೂನ್ 2013, 7:02 IST
Last Updated 20 ಜೂನ್ 2013, 7:02 IST

ಜಾವಗಲ್: ಪಟ್ಟಣದ ಪ್ರಾಥಮಿಕ ಆರೋಗ್ಯ ಕೇಂದ್ರವನ್ನು ಸಮುದಾಯ ಆರೋಗ್ಯ ಕೇಂದ್ರವನ್ನಾಗಿ ಮೇಲ್ದರ್ಜೆಗೆ ಏರಿಸುವುದಾಗಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಯು.ಟಿ. ಖಾದರ್ ಭರವಸೆ ನೀಡಿದರು.

ಜಾವಗಲ್ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಮಂಗಳವಾರ ರಾತ್ರಿ ದಿಢೀರ್ ಭೇಟಿ ನೀಡಿ ಆಸ್ಪತ್ರೆಯ ಸ್ವಚ್ಛತೆ ಮತ್ತು ವ್ಯವಸ್ಥೆ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು.

ಆಸ್ಪತ್ರೆಗಳ ಸ್ವಚ್ಛತೆಗೆ ಹೆಚ್ಚಿನ ಗಮನ ನೀಡುವಂತೆ ಅಧಿಕಾರಿಗಳಿಗೆ ಆದೇಶಿಸಿದರು. ಆರೋಗ್ಯ ಮತ್ತು ಶಿಕ್ಷಣ ಇಲಾಖೆ ಇತರೆ ಇಲಾಖೆಗಳಿಗಿಂತಲೂ ಸಾರ್ವಜನಿಕರಿಗೆ ತುಂಬಾ ಹತ್ತಿರವಾಗಿದ್ದು, ವೈದ್ಯರು ಮತ್ತು ಸಿಬ್ಬಂದಿಗಳು ರೋಗಿಗಳಿಗೆ ಸ್ಪಂದಿಸಿ ಸೂಕ್ತ ಚಿಕಿತ್ಸೆ ನೀಡಬೇಕು ಎಂದು ತಾಕೀತು ಮಾಡಿದರು.

ಡೆಂಗೆ ಬಗ್ಗೆ ಚುನಾಯಿತ ಪ್ರತಿನಿಧಿಗಳು ವಿದ್ಯಾರ್ಥಿಗಳ ಸಹಕಾರದೊಂದಿಗೆ ಜನಸಾಮಾನ್ಯರಲ್ಲಿ ಅರಿವು ಮೂಡಿಸಬೇಕು. ಈ ಆಸ್ಪತ್ರೆಗೆ ಕೊರತೆ ಇರುವ ವೈದ್ಯಾಧಿಕಾರಿಗಳು ಹಾಗು ಸಿಬ್ಬಂದಿಗಳನ್ನು ಶೀಘ್ರದಲ್ಲೇ ನೇಮಕ ಮಾಡಲಾಗುವುದು ಎಂದರು.  
 
ಶಾಸಕ ವೈ.ಎನ್. ರುದ್ರೇಶಗೌಡ ಆಸ್ಪತ್ರೆಯ ಅವ್ಯವಸ್ಥೆಯ ಕುರಿತು ವಿವರವಾಗಿ ಸಚಿವರಿಗೆ ಮಾಹಿತಿ ನೀಡಿದರು. ಸೂಕ್ತವಾಗಿ ಸ್ಪಂದಿಸದ ಆಸ್ಪತ್ರೆಯ ವೈದ್ಯರು ಮತ್ತು ಸಿಬ್ಬಂದಿಗಳನ್ನು ವರ್ಗಾವಣೆ ಮಾಡಬೇಕು. 108 ಆಂಬುಲೆನ್ಸ್ ಸೌಲಭ್ಯ ಕಲ್ಪಿಸುವಂತೆ ಸಾರ್ವಜನಿಕರು ಸಚಿವರನ್ನು ಕೇಳಿಕೊಂಡರು.

ಜಿಲ್ಲಾ ಆರೋಗ್ಯ ಕುಟುಂಬ ಕಲ್ಯಾಣಾಧಿಕಾರಿ ಡಾ. ಶಾಮಲಾದೇವಿ, ತಾಲ್ಲೂಕು ಆರೋಗ್ಯಾಧಿಕಾರಿ ಡಾ.ದಿನೇಶ್, ಡಾ.ಶರಣಪ್ಪ, ತಾಲ್ಲೂಕು ಪಂಚಾಯಿತಿ ಸದಸ್ಯೆ ಲಕ್ಷ್ಮೀ ರವಿಶಂಕರ್, ತಾಲ್ಲೂಕು ಭೂ ಅಭಿವೃದ್ಧಿ ಬ್ಯಾಂಕ್ ಮಾಜಿ ಉಪಾಧ್ಯಕ್ಷ ಸೋಮೇಗೌಡ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೆ.ಸಿ. ನಾಗರಾಜು, ಬೇಲೂರು ಪುರಸಭಾ ಸದಸ್ಯ ಜುಬೇದ್, ಜಮಾಲ್,  ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಕರಿಯಯ್ಯ, ಬಸವರಾಜು ಇತರರು ಹಾಜರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.