ADVERTISEMENT

ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ವಿಧಿಸಿ

​ಪ್ರಜಾವಾಣಿ ವಾರ್ತೆ
Published 22 ಡಿಸೆಂಬರ್ 2017, 9:16 IST
Last Updated 22 ಡಿಸೆಂಬರ್ 2017, 9:16 IST
ಹಾಸನ ಜಿಲ್ಲಾಧಿಕಾರಿ ಕಚೇರಿ ಎದುರು ಎನ್‌ಎಸ್‌ಯುಐ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು
ಹಾಸನ ಜಿಲ್ಲಾಧಿಕಾರಿ ಕಚೇರಿ ಎದುರು ಎನ್‌ಎಸ್‌ಯುಐ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು   

ಹಾಸನ: ವಿಜಯಪುರದ ದಲಿತ ವಿದ್ಯಾರ್ಥಿನಿಯೊಬ್ಬಳ ಮೇಲೆ ಅತ್ಯಾಚಾರ ಎಸಗಿ ಹತ್ಯೆಗೈದ ಆರೋಪಿಗಳನ್ನು ಬಂಧಿಸಬೇಕು ಎಂದು ಆಗ್ರಹಿಸಿ ಜಿಲ್ಲಾಧಿಕಾರಿ ಕಚೇರಿ ಎದುರು ವಿವಿಧ ಸಂಘಟನೆಗಳು ಪ್ರತ್ಯೇಕ ಪ್ರತಿಭಟನೆ ನಡೆಸಿದವು.

ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್(ಎಬಿವಿಪಿ), ಸೋಷಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ(ಎಸ್ ಡಿಪಿಐ), ಭಾರತ ವಿದ್ಯಾರ್ಥಿ ಫೆಡರೇಷನ್(ಎಸ್ಎಫ್ಐ) ಹಾಗೂ ಎನ್‌ಎಸ್‌ಯುಐ ಕಾರ್ಯಕರ್ತರು ನಗರದ ಹೇಮಾವತಿ ಪ್ರತಿಮೆಯಿಂದ ಜಿಲ್ಲಾಧಿಕಾರಿ ಕಚೇರಿವರೆಗೂ ಮೆರವಣಿಗೆಯಲ್ಲಿ ಬಂದು ಹೆಚ್ಚುವರಿ ಜಿಲ್ಲಾಧಿಕಾರಿ ಬಿ.ಆರ್.ಪೂರ್ಣಿಮಾ ಅವರಿಗೆ ಮನವಿ ಸಲ್ಲಿಸಿದರು.

‘ರಾಜ್ಯದಲ್ಲಿ ಹಿಂದುಳಿದ ವರ್ಗಗಳ ಮಹಿಳೆಯರಿಗೆ ರಕ್ಷಣೆ ಇಲ್ಲದಾಗಿದೆ. ಕಾನೂನು ಎಷ್ಟೇ ಬಿಗಿಯಾಗಿದ್ದರೂ ಕಾಮುಕರ ಅಟ್ಟಹಾಸಕ್ಕೆ ಮಹಿಳೆಯರು ಬಲಿಯಾಗುತ್ತಿದ್ದಾರೆ. ಇಂತಹ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಬೇಕಿದ್ದ ಸರ್ಕಾರ ಹಾಗೂ ಪೊಲೀಸ್ ಇಲಾಖೆ ವಿಳಂಬ ನೀತಿ ಅನುಸರಿಸುವ ಮೂಲಕ ಆರೋಪಿಗಳ ರಕ್ಷಣೆ ಮಾಡುತ್ತಿದೆ’ ಎಂದು ಪ್ರತಿಭಟನಾಕಾರರು ಆರೋಪಿಸಿದರು.

ADVERTISEMENT

‘ದೇಶದಲ್ಲಿ ಪ್ರತಿ 15 ನಿಮಿಷಕ್ಕೆ ಒಂದರಂತೆ ವಿದ್ಯಾರ್ಥಿ ಹಾಗೂ ಮಹಿಳೆಯರ ಮೇಲೆ ಅತ್ಯಾಚಾರ ಹಾಗೂ ಲೈಂಗಿಕ ಕಿರುಕುಳ ಪ್ರಕರಣಗಳು ದಾಖಲಾಗುತ್ತಿವೆ. ದಲಿತ ವಿದ್ಯಾರ್ಥಿನಿ ಶಾಲೆಯಿಂದ ಮನೆಗೆ ತೆರಳುತ್ತಿರುವಾಗ 5 ಮಂದಿ ಕಾಮುಕರು ಅತ್ಯಾಚಾರ ಎಸಗಿದ್ದಾರೆ. ಭಯದ ವಾತಾವರಣದಲ್ಲೇ ವಿದ್ಯಾರ್ಥಿಗಳು ಶಾಲೆಗೆ ಬರ
ಬೇಕಾಗಿದೆ’ ಎಂದು ಆಕ್ರೋಶ ವ್ಯಕ್ತಪಡಿಸಿದರು.

‘ನಿರ್ಭಯಾ ಘಟನೆ ಬಳಿಕ ಶಾಲಾ, ಕಾಲೇಜು ಆವರಣದಲ್ಲಿ ಸಿಸಿಟಿವಿ ಕ್ಯಾಮರಾ ಅಳವಡಿಸಿ, ಲೈಂಗಿಕ ಕಿರುಕುಳ ವಿರೋಧಿ ಸಮಿತಿ ರಚಿಸುವಂತೆ ಕೋರ್ಟ್‌ ಸೂಚಿಸಿತು. ಆದರೆ, ರಾಜ್ಯ ಸರ್ಕಾರ ನ್ಯಾಯಾಲಯದ ಯಾವ ಆದೇಶವನ್ನು ಅನುಷ್ಠಾನಕ್ಕೆ ತಂದಿಲ್ಲ’ ಎಂದು ಕಿಡಿ ಕಾರಿದರು.

ಸಾಮೂಹಿಕ ಅತ್ಯಾಚಾರ ಎಸಗಿ ಕೊಲೆ ಮಾಡಿರುವ ಕಾಮುಕರು ರಾಜಕೀಯ ಪ್ರಭಾವ ಬಳಸಿಕೊಂಡು ಶಿಕ್ಷೆಯಿಂದ ತಪ್ಪಿಸಿಕೊಳ್ಳುತ್ತಿದ್ದಾರೆ. ವಿಧಾನಸಭೆ ಚುನಾವಣೆ ಸಮೀಪಿಸುತ್ತಿರುವುದರಿಂದ ಕೊಲೆ ಪ್ರಕರಣವನ್ನು ರಾಜಕೀಯವಾಗಿ ಬಳಸಿಕೊಳ್ಳಲು ಎರಡು ರಾಷ್ಟ್ರೀಯ ಪಕ್ಷಗಳು ಮುಂದಾಗಿವೆ. ರಾಜ್ಯದಲ್ಲಿ ಈ ರೀತಿಯ ಘಟನೆಗಳು ಮರುಕಳಿಸದಂತೆ ಎಚ್ಚರ ವಹಿಸಬೇಕು ಎಂದು ಒತ್ತಾಯಿಸಿದರು.

ಪ್ರತಿಭಟನೆಯಲ್ಲಿ ಎಸ್‌ಎಫ್‌ಐ ಜಿಲ್ಲಾ ಕಾರ್ಯದರ್ಶಿ ಆಶಾ, ಪ್ರಕ್ಷಿತಾ, ರಮೇಶ್, ಎಂ.ಜಿ. ಪಥ್ವಿ, ವಸಂತ್, ಎಬಿವಿಪಿ ವಿಭಾಗ ಸಂಚಾಲಕ ಎಚ್.ಕೆ.ಅಮಿತ್, ರವೀಶ್, ಚೇತನ್,
ವಿಕಾಸ್, ಪದ್ಮರಾಜ, ಕಾಂತರಾಜು, ಹೇಮಂತ್, ದಯಾನಂದ್‌, ಎಸ್‌ಡಿಪಿಐ ಜಿಲ್ಲಾಧ್ಯಕ್ಷ ಫೈರೋಜ್ ಪಾಷ, ಉಪಾಧ್ಯಕ್ಷ ಅಮೀರ್ ಜಾನ್, ಸತೀಶ್, ಸೈಯದ್ ಫರೀದ್, ಅಫ್ಜಲ್, ಶಿವಮ್ಮ, ನಾರಾಯಣದಾಸ್, ಎನ್‌ಎಸ್‌ಯುಐ ಜಿಲ್ಲಾಧ್ಯಕ್ಷ ರಂಜಿತ್, ಉಜ್ವಲ್, ಸಾಗರ್‌, ಮೋಹನ್, ವಿಜಯೇಂದ್ರ, ಸಂತೋಷ್, ಬಾಬು, ಆಕಾಶ್‌ ಇದ್ದರು

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.