ಹಾಸನ: ಜಿಲ್ಲೆಯಲ್ಲಿ ಬರ ಪರಿಸ್ಥಿತಿಯನ್ನು ನಿರ್ವಹಿಸಲು ಅಗತ್ಯವಿರುವ ಎಲ್ಲ ಕ್ರಮಗಳನ್ನು ಕೈಗೊಳ್ಳಬೇಕು ಹಾಗೂ ಎಲ್ಲ ಗ್ರಾಮಗಳಿಗೂ ಕುಡಿಯುವ ನೀರಿನ ಪೂರೈಕೆ ಮಾಡುವ ನಿಟ್ಟಿನಲ್ಲಿ ಗಮನ ಹರಿಸಬೇಕು ಎಂದು ಕೆ.ಪಿ.ಟಿ.ಸಿ.ಎಲ್.ನ ವ್ಯವಸ್ಥಾಪಕ ನಿರ್ದೇಶಕ ಹಾಗೂ ಹಾಸನ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಜಿ. ಕುಮಾರ್ ನಾಯಕ್ ಜಿಲ್ಲೆಯ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಜಿಲ್ಲಾ ಪಂಚಾಯಿತಿಯ ಹೊಯ್ಸಳ ಸಭಾಂಗಣದಲ್ಲಿ ಬರಪರಿಸ್ಥಿತಿ ನಿರ್ವಹಣೆ ಕುರಿತು ಗುರುವಾರ ಆಯೋಜಿಸಿದ್ದ ಸಭೆಯಲ್ಲಿ ಮಾತನಾಡಿದ ಅವರು, ‘ಬೇಸಿಗೆ ತಾಪ ಹೆಚ್ಚುತ್ತಿರುವ ಹಿನ್ನಲೆಯಲ್ಲಿ ಬರ ಪೀಡಿತ ತಾಲ್ಲೂಕುಗಳ ಜನರ ಬಗ್ಗ ಹೆಚ್ಚಿನ ಕಾಳಜಿ ವಹಿಸಬೇಕಾಗಿದೆ. ಜನ-, ಜಾನುವಾರುಗಳಿಗೆ ಕುಡಿಯುವ ನೀರು, ದನ-ಕರುಗಳಿಗೆ ಮೇವಿಗೆ ಕೊರತೆಯಾಗದಂತೆ ಮುಂಜಾಗ್ರತೆ ವಹಿಸಬೇಕು. ಕೆಲವು ತಾಲ್ಲೂಕುಗಳಲ್ಲಿ ಕೊಳವೆ ಬಾವಿಗಳಲ್ಲಿ ನೀರು ಬತ್ತಿ ಹೋಗುತ್ತಿದ್ದು, ಹೊಸದಾಗಿ ಕೊಳವೆ ಬಾವಿ ಕೊರೆದರೆ ನೀರು ಬಾರದಿರುವ ಸಾಧ್ಯತೆ ಇದೆ. ಅಂಥ ಕಡೆ ನೀರಿಗೆ ಪರ್ಯಾಯ ವ್ಯವಸ್ಥೆ ಮಾಡಬೇಕು ಎಂದು ಸೂಚಿಸಿದರು.
ಜಿಲ್ಲಾಧಿಕಾರಿ ವಿ. ಅನ್ಬುಕುಮಾರ್ ಮಾತನಾಡಿ ‘ಜಿಲ್ಲೆಯ ಬರಪರಸ್ಥಿತಿ ಹಾಗೂ ಕುಡಿಯುವ ನೀರು ಪೂರೈಕೆ ಬಗ್ಗೆ ನಿರಂತರ ನಿಗಾವಹಿಸಲಾಗಿದೆ. ಸಂಬಂಧಪಟ್ಟ ಅಧಿಕಾರಿಗಳಿಗೆ ನಿರ್ದೇಶನ ನೀಡುವುದರ ಜೊತೆಗೆ ತಾಲ್ಲೂಕುಗಳಿಗೆ ಅನುದಾನವನ್ನು ಸಹ ಬಿಡುಗಡೆ ಮಾಡಲಾಗಿದೆ. ಚುನಾವಣಾ ಕಾರ್ಯದ ನಡುವೆಯೂ ನೀರಿಗೆ ಹಾಹಾಕಾರವಾಗದಂತೆ ನೋಡಿಕೊಳ್ಳಬೇಕು ಎಂದು ಸೂಚನೆ ನೀಡಲಾಗಿದೆ.
ಜಿಲ್ಲಾಧಿಕಾರಿ ಅವರ ಪಿ.ಡಿ. ಖಾತೆಯಲ್ಲಿ ₨ 577.50 ಲಕ್ಷ ಲಭ್ಯವಿದ್ದು, ಪ್ರಗತಿಯಲ್ಲಿರುವ ಕಾಮಗಾರಿಗಳಿಗಾಗಿ ₨ 248 ಲಕ್ಷ ಕಾಯ್ದಿರಿಸಲಾಗಿದೆ. ಅನುಷ್ಠಾನಾಧಿಕಾರಿಗಳಿಂದ ಹಿಂದಿರುಗಿಸಲಾಗಿರುವ ಅನುದಾನ ₨ 74.59 ಲಕ್ಷಗಳಿದ್ದು, 2013-–14 ನೇ ಸಾಲಿನಲ್ಲಿ ಕುಡಿಯುವ ನೀರು, ಜಾನುವಾರುಗಳ ಮೇವಿಗಾಗಿ ತಹಸೀಲ್ದಾರ್ ಅವರಿಗೆ ₨ 254.91 ಲಕ್ಷ ರೂ ಹಂಚಿಕೆ ಮಾಡಲಾಗಿದೆ ಎಂದು ತಿಳಿಸಿದರು.
ಜಿ.ಪಂ. ಮುಖ್ಯ ಕಾರ್ಯನಿರ್ವಹಣಾಧಿಕಾರಿ ಉಪೇಂದ್ರ ಪ್ರತಾಪ್ ಸಿಂಗ್, ‘ಜಿಲ್ಲೆಯ ಎಲ್ಲಾ ತಾಲ್ಲೂಕುಗಳ ಗ್ರಾಮ ಪಂಚಾಯ್ತಿ ಮಟ್ಟದ ಅಧಿಕಾರಿಗಳಿಗೆ ಬರಪರಿಸ್ಥಿತಿ ನಿರ್ವಹಣೆ ಹಾಗೂ ಕುಡಿಯುವ ನೀರಿನ ಪೂರೈಕೆ ಸಮಸ್ಯೆಯನ್ನು ನಿಭಾಯಿಸಲು ಸೂಕ್ತ ಸಲಹೆ ಸೂಚನೆ ನೀಡಲಾಗಿದೆ’ ಎಂದರು. ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.