ADVERTISEMENT

ಮೆಟ್ಟೂರಿಗೆ ನೀರು: ಮುಗಿಲು ಮುಟ್ಟಿದ ಆಕ್ರೋಶ

​ಪ್ರಜಾವಾಣಿ ವಾರ್ತೆ
Published 6 ಅಕ್ಟೋಬರ್ 2012, 9:40 IST
Last Updated 6 ಅಕ್ಟೋಬರ್ 2012, 9:40 IST

ಹಾಸನ: ಕಾವೇರಿ ನದಿ ನೀರನ್ನು ತಮಿಳುನಾಡಿಗೆ ಹರಿಸುವಂತೆ ನೀಡಿರುವ ಆದೇಶವನ್ನು ವಿರೋಧಿಸಿ ಕರ್ನಾಟಕ ಕಾವಲು ಪಡೆ ಜಿಲ್ಲಾಘಟಕದ ಕಾರ್ಯಕರ್ತರು ಶುಕ್ರವಾರ ಹಾಸನದ ಪ್ರಧಾನ ಅಂಚೆ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟಿಸಿದರು.

`ರಾಜ್ಯವನ್ನು ಬರ ಪೀಡಿತ ಎಂದು ಘೋಷಿಸಿದ್ದ ಕೇಂದ್ರ ಸರ್ಕಾರವೇ ಈಗ  ತಮಿಳುನಾಡು ಮುಖ್ಯಮಂತ್ರಿ ಒತ್ತಡಕ್ಕೆ ಮಣಿದು ಅಲ್ಲಿಗೆ ನೀರು ಹರಿಸುವಂತೆ ಆದೇಶಿಸಿದೆ. ಆ ಮೂಲಕ ರಾಜ್ಯದ ರೈತರಿಗೆ ದ್ರೋಹವೆಸಗಿದೆ~ ಎಂದು ಪ್ರತಿಭಟನಾಕಾರರು ಆರೋಪಿಸಿದರು.

ಕೆಲ ದಿನದಿಂದ ಹೇಮಾವತಿ ಅಣೆಕಟ್ಟೆಯಿಂದಲೂ ನೀರನ್ನು ಹರಿಸಲಾಗುತ್ತಿದ್ದು, ಇದನ್ನು ಕೂಡಲೇ ನಿಲ್ಲಿಸದಿದ್ದರೆ ಅಣೆಕಟ್ಟೆಗೆ ಮುತ್ತಿಗೆ ಹಾಕಲಾಗುವುದು ಎಂದು ಪ್ರತಿಭಟನಾಕಾರರು ಎಚ್ಚರಿಸಿದರು.

ಹೇಮಾವತಿ ಪ್ರತಿಮೆ ಬಳಿಯಿಂದ ಮೆರವಣಿಗೆ ಮೂಲಕ ಪ್ರಧಾನ ಅಂಚೆ ಕಚೇರಿಗೆ ಬಂದ ಪ್ರತಿಭಟನಾಕಾರರು ಅಲ್ಲಿ ಕೆಲಕಾಲ ಪ್ರತಿಭಟನೆ ನಡೆಸಿದರು.

ಕಾವಲು ಪಡೆ ಜಿಲ್ಲಾ ಘಟಕದ ಅಧ್ಯಕ್ಷ ನಟೇಶ್, ಕಾರ್ಯದರ್ಶಿ ನವೀನ್‌ಕುಮಾರ್, ಕೇಶವಮೂರ್ತಿ ಮತ್ತಿತರರು ಪ್ರತಿಭಟನೆಯಲ್ಲಿದ್ದರು.

ವಕೀಲರಿಂದ ಕಲಾಪ ಬಹಿಷ್ಕಾರ
ಅರಸೀಕೆರೆ: ಕಾವೇರಿ ನೀರನ್ನು ತಮಿಳುನಾಡಿಗೆ ಬಿಡುಗಡೆ ಮಾಡುತ್ತಿರುವ ರಾಜ್ಯ ಸರ್ಕಾರದ ಕ್ರಮ ಖಂಡಿಸಿ ಪಟ್ಟಣದ ವಕೀಲರು ಶುಕ್ರವಾರ ನ್ಯಾಯಾಲಯ ಕಲಾಪ ಬಹಿಷ್ಕರಿಸಿ ಪ್ರತಿಭಟನಾ ಮೆರವಣಿಗೆ ನಡೆಸಿದರು.
ವಕೀಲರ ಸಂಘದ ಅಧ್ಯಕ್ಷ ಕೆ.ಎ. ರವಿಶಂಕರ್ ನೇತೃತ್ವದಲ್ಲಿ ನ್ಯಾಯಾಲಯದ ಆವರಣದಲ್ಲಿ ಸಭೆ ಸೇರಿದ ವಕೀಲರು ರಾಜ್ಯ ಹಾಗೂ ಕೇಂದ್ರ ಸರ್ಕಾರಗಳ ನೀತಿಯನ್ನು ಖಂಡಿಸಿ, ತಮಿಳುನಾಡಿಗೆ ಕಾವೇರಿ ನೀರನ್ನು ಹರಿಸುತ್ತಿರುವುದನ್ನು ತಕ್ಷಣ ನಿಲ್ಲಿಸಬೇಕು ಎಂದು ಆಗ್ರಹಿಸಿದರು. 

ರಾಜ್ಯದಲ್ಲಿ ಬರಗಾಲವಿದ್ದರೂ ರೈತರ ಸಮಸ್ಯೆಯನ್ನು ಮನಗಾಣದ ಸರ್ಕಾರ ಅಧಿಕಾರಕ್ಕಾಗಿ ತಮಿಳುನಾಡಿಗೆ ನೀರು ಹರಿಸುತ್ತಿದೆ ಎಂದು ದೂರಿದರು. 

ಹಿರಿಯ ವಕೀಲರಾದ ಬಿ.ಎನ್.ರವಿ, ಒ.ಎಂ.ಅಂದಾನಪ್ಪ ಎಸ್.ಎನ್.ಸುಬ್ಬಣ್ಣ, ಎಚ್.ಎಸ್. ಮಲ್ಲೇಶ್,ಕೇಶವಮೂರ್ತಿ, ಸದಾನಂದ, ಸಂದೇಶ್, ಪೂರ್ಣಿಮಾ  ಸಿದ್ದು, ಕೆ.ವಿ. ಹಿರಿಯಣ್ಣ, ರವಿ ಭಾಗವಹಿಸಿದ್ದರು.
 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.