ADVERTISEMENT

ರೈತರ ಪ್ರತಿಭಟನೆ

ಕೊಬ್ಬರಿ ಖರೀದಿ ಕೇಂದ್ರದಲ್ಲಿ ಹಣ ವಸೂಲಿ

​ಪ್ರಜಾವಾಣಿ ವಾರ್ತೆ
Published 26 ಜೂನ್ 2013, 5:52 IST
Last Updated 26 ಜೂನ್ 2013, 5:52 IST

ಅರಸೀಕೆರೆ: ಇಲ್ಲಿನ ಕೃಷಿ ಉತ್ಪನ್ನ ಮಾರುಕಟ್ಟೆ ಪ್ರಾಂಗಣದಲ್ಲಿ ತೆರೆಯಲಾಗಿರುವ `ನ್ಯಾಫೆಡ್' ಕೊಬ್ಬರಿ ಖರೀದಿ ಕೇಂದ್ರದಲ್ಲಿನ ವ್ಯವಸ್ಥಾಪಕ, ಅಧಿಕಾರಿ ಹಾಗೂ ಕೊಬ್ಬರಿ ಚೀಲ ಮಾಡುವ ಹಮಾಲಿಗಳು ಮಾರಲು ಬಂದ ರೈತರಿಂದ 100ರಿಂದ 200 ರೂಪಾಯಿವರೆಗೆ ವಸೂಲಿ ಮಾಡುತ್ತಿದ್ದಾರೆ ಎಂದು ಆರೋಪಿಸಿ ಭಾರತೀಯ ಕಿಸಾನ್ ಅರಸೀಕೆರೆ ಘಟಕದ ನೇತೃತ್ವದಲ್ಲಿ ರೈತರು ಮಂಗಳವಾರ ಕಚೇರಿ ಮುಂದೆ ಪ್ರತಿಭಟನೆ ನಡೆಸಿದರು.

ಪಟ್ಟಣದ ಮಾರುಕಟ್ಟೆ ಪ್ರಾಂಗಣದಲ್ಲಿ ಭಾರತೀಯ ಕಿಸಾನ್ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಶಾಂತಪ್ಪಗೌಡ, ರಾಜ್ಯ ಕಾರ್ಯದರ್ಶಿ ಗಂಗಾಧರ್ ಕಾಸರಘಟ್ಟ ನೇತೃತ್ವದಲ್ಲಿ ಜಮಾಯಿಸಿದ ರೈತರು, ಮಾರುಕಟ್ಟೆಯಲ್ಲಿ ರೈತರ ಶೋಷಣೆ ಮಾಡಲಾಗುತ್ತಿದೆ ಎಂದು ಆರೋಪಿಸಿದರಲ್ಲದೇ, `ನ್ಯಾಫೆಡ್' ಖರೀದಿ ಕೇಂದ್ರದ ಅಧಿಕಾರಿಗಳು ಹಾಗೂ ಹಮಾಲರ ವಿರುದ್ಧ ಧಿಕ್ಕಾರ ಕೂಗಿದರು.

ಶಾಸಕರು ಮತ್ತು ಜನಪ್ರತಿನಿಧಿಗಳು ಮಧ್ಯೆ ಪ್ರವೇಶಿಸಿ ಸೂಕ್ತ ಕ್ರಮ ಕೈಗೊಂಡು ರೈತರಿಗೆ ಆಗುತ್ತಿರುವ ಅನ್ಯಾಯ ತಡೆಯಬೇಕು. ಅಲ್ಲದೇ, ಕೊಬ್ಬರಿ ವಿಂಗಡನೆ ಮಾಡುವ ಹಮಾಲಿಗಳನ್ನು ವಜಾ ಮಾಡಿ ಪರ್ಯಾಯ ವ್ಯವಸ್ಥೆ ಮಾಡಬೇಕು ಎಂದು ಆಗ್ರಹಿಸಿದರು.   
ನಂತರ ಮಾರುಕಟ್ಟೆ ಸಮಿತಿ ಕಾರ್ಯದರ್ಶಿ ಈಶ್ವರಪ್ಪ ಅವರಿಗೆ ಮನವಿ ನೀಡಿದರು.

ಸ್ಥಳಕ್ಕೆ ಭೇಟಿ ನೀಡಿದ ಎಪಿಎಂಸಿ ಅಧ್ಯಕ್ಷ ಮುರುಂಡಿ ಶಿವಯ್ಯ ಮಾತನಾಡಿ, ಶಾಸಕ ಶಿವಲಿಂಗೇಗೌಡ ಅವರು ರೈತರಿಂದ ಹಣ ತೆಗೆದುಕೊಳ್ಳಬಾರದು ಎಂದು ಸೂಚನೆ ನೀಡಿದ್ದಾರೆ. ಆದರೆ, ಹಣ ಪಡೆಯುತ್ತಿರುವ ವಿಷಯ ನನ್ನ ಗಮನಕ್ಕೆ ಬಂದಿಲ್ಲ. ಈಗ ಯಾವ ಹಮಾಲಿ ಹಣ ತೆಗೆದುಕೊಂಡಿದ್ದಾರೆ ಎಂಬುದನ್ನು ಲಿಖಿತವಾಗಿ ನೀಡಿದರೆ ಅವರ ಮೇಲೆ ನಿರ್ದಾಕ್ಷಿಣ್ಯವಾಗಿ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಭರವಸೆ ನೀಡಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.