ADVERTISEMENT

ಸರ್ಕಾರಿ ಆಸ್ಪತ್ರೆ ಉನ್ನತೀಕರಿಸಲು ಶಾಸಕ ಆಗ್ರಹ

​ಪ್ರಜಾವಾಣಿ ವಾರ್ತೆ
Published 17 ಮಾರ್ಚ್ 2012, 19:30 IST
Last Updated 17 ಮಾರ್ಚ್ 2012, 19:30 IST

ಬಾಣಾವರ: `ಬಡವರಿಗೆ ಕೈಗೆಟಕುವ ದರದಲ್ಲಿ ಆರೋಗ್ಯ ಸೇವೆ ಲಭಿಸುವಂತೆ ಸರ್ಕಾರಿ ಆಸ್ಪತ್ರೆಗಳನ್ನು ಉನ್ನತೀಕರಿಸಬೇಕಾಗಿದೆ. ಸರ್ಕಾರಿ ಕಾಲೇಜುಗಳಲ್ಲಿ ವೈದ್ಯಕೀಯ ವ್ಯಾಸಂಗ ಮಾಡುವವರು ಕನಿಷ್ಠ ಹತ್ತು ವರ್ಷವಾದರೂ ಗ್ರಾಮಾಂತರ ಪ್ರದೇಶಗಳ ಆಸ್ಪತ್ರೆಗಳಲ್ಲಿ ಸೇವೆ ಸಲ್ಲಿಸಬೇಕು~ ಎಂದು ಶಾಸಕ ಕೆ.ಎಂ.ಶಿವಲಿಂಗೇಗೌಡ ನುಡಿದರು.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಂಘ ಮತ್ತು ಬಾಣಾವರ ಪ್ರಾಥಮಿಕ ಆರೋಗ್ಯ ಕೇಂದ್ರಗಳ ಆಶ್ರಯದಲ್ಲಿ ಶನಿವಾರ ಆಯೋಜಿಸಿದ್ದ ಸಮುದಾಯ ಆರೋಗ್ಯ ದಿನ ಸಮಾರಂಭ ಉದ್ಘಾಟಿಸಿ ಮಾತನಾಡಿದರು.
ಅಧ್ಯಕ್ಷತೆ ವಹಿಸಿದ್ದ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಅಂಬಿಕಾರಮೇಶ್, `ಆರೋಗ್ಯವಂತ ಮನುಷ್ಯ ದೇಶದ ಸಂಪತ್ತು. ಆರೋಗ್ಯ ಇಲಾಖೆ ಯೋಜನೆಗಳು ಫಲಾನುಭವಿಗಳನ್ನು ತಲುಪುವಂತಾಗಬೇಕು~ ಎಂದರು.

ತಾಲ್ಲೂಕು ಪಂಚಾಯಿತಿ ಸದಸ್ಯ ಬಿ.ರವಿಶಂಕರ್ ಮಾತನಾಡಿ, `ಸರ್ಕಾರಿ ಆಸ್ಪತ್ರೆಗಳಲ್ಲಿ ರೋಗಿಗೆ ಹಿತಕರ ವಾತಾವರಣ ನಿರ್ಮಾಣ ಮಾಡಬೇಕು. ಅಗತ್ಯವಿರುವ ಔಷಧ ಮತ್ತು ಇತರ ಸೌಲಭ್ಯಗಳನ್ನು ತ್ವರಿತವಾಗಿ ಒದಗಿಸಿದರೆ ಮಾತ್ರ ಬಡವರ ಬವಣೆ ನೀಗಲು ಸಾಧ್ಯ~ ಎಂದರು.

ಡಾ.ಜಮೀರ್ ಅಹಮ್ಮದ್ ಪ್ರಾಸ್ತಾವಿಕ ಮಾತನಾಡಿದರು. ಎಪಿಎಂಸಿ ಮಾಜಿ ಅಧ್ಯಕ್ಷ ಬಿ.ಸಿ.ಶ್ರೀನಿವಾಸ್ ಸ್ವಾಗತಿಸಿದರು. ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ದೊರೆಯುವ ಸೌಲಭ್ಯದ ಬಗ್ಗೆ ಎಂ.ಜಯಣ್ಣ ವಿವರಿಸಿದರು. ಎಂ.ಪಿ.ಶಿವಣ್ಣ ಉಪಸ್ಥಿತರಿದ್ದರು.

ಎಪಿಎಂಸಿ ಅಧ್ಯಕ್ಷ ಬಿ.ಎಸ್.ಅಶೋಕ್, ತಾ.ಪಂ. ಸದಸ್ಯ ಲಕ್ಷ್ಮಣ್, ಗ್ರಾ.ಪಂ. ಉಪಾಧ್ಯಕ್ಷ ಬಿ.ವಾಸಪ್ಪ, ತಾಲ್ಲೂಕು ಆರೋಗ್ಯಧಿಕಾರಿ ಬಿ.ಎಸ್.ಶಂಕರಪ್ಪ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.