ADVERTISEMENT

ಹಾಸನದಲ್ಲಿ ಎಸ್‌ಡಿಪಿಐ ಪ್ರತಿಭಟನೆ

ಇವಿಎಂ ದುರುಪಯೋಗ ಆರೋಪ: ತನಿಖೆಗೆ ಆಗ್ರಹ

​ಪ್ರಜಾವಾಣಿ ವಾರ್ತೆ
Published 19 ಮೇ 2018, 11:18 IST
Last Updated 19 ಮೇ 2018, 11:18 IST

ಹಾಸನ: ಇವಿಎಂ ದುರುಪಯೋಗ ಆಗುತ್ತಿದೆ ಎಂದು ಆರೋಪಿಸಿ ಸೋಷಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್‍ಡಿಪಿಐ) ವತಿಯಿಂದ ನಗರದ ಹೇಮಾವತಿ ಪ್ರತಿಮೆ ಬಳಿ ಪ್ರತಿಭಟನೆ ನಡೆಸಲಾಯಿತು.

ಹಲವು ವರ್ಷಗಳಿಂದ ವಿದ್ಯುನ್ಮಾನ ಮತಯಂತ್ರ (ಇವಿಎಂ) ಗಳ ಬಗ್ಗೆ ಆಕ್ಷೇಪ ಕೇಳಿ ಬರುತ್ತಿದೆ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಪಾರದರ್ಶಕ ಮತದಾನ ವ್ಯವಸ್ಥೆ ಅಗತ್ಯವಾಗಿದೆ. ಹಿಂದಿನ ದಿನಗಳಲ್ಲಿ ದೇಶದಾದ್ಯಂತ ಮತಪತ್ರ ಮೂಲಕ ಮತದಾನ ಮಾಡಲಾಗುತ್ತಿತ್ತು. ಇಂದು ಬೆರಳಣಿಕೆ ರಾಷ್ಟ್ರಗಳು ಇವಿಎಂ ಬಳಸುತ್ತಿವೆ. ಬಹುತೇಕ ರಾಷ್ಟ್ರಗಳಲ್ಲಿ ಬ್ಯಾಲೆಟ್‌ ಪೇಪರ್‌ ಮೂಲಕವೇ ಮತ ದಾನ ನಡೆಸಲಾಗುತ್ತಿದೆ. ಆದ್ದರಿಂದ ದೇಶದಲ್ಲೂ ಇವಿಎಂ ನಿಷೇಧಿಸಿ, ಬ್ಯಾಲೆಟ್ ಪೇಪರ್ ಮೂಲಕ ಮತದಾನಕ್ಕೆ ಅವಕಾಶ ನೀಡಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.

ದೇಶದ ಪ್ರಮುಖ ರಾಜಕಾರಣಿಗಳು, ರಾಜಕೀಯ ಪಕ್ಷಗಳು ಸಾಮಾಜಿಕ ಹೋರಾಟಗಾರರು, ಸ್ವಯಂ ಸೇವಾ ಸಂಸ್ಥೆಗಳು ಇವಿಎಂ ಮತಯಂತ್ರ ನಿಷೇಧಿಸಲು ಆಗ್ರಹಿಸುತ್ತಿದ್ದಾರೆ. ಮೇ 12ರಂದು ನಡೆದ ರಾಜ್ಯ ವಿಧಾನಸಭಾ ಚುನಾವಣೆಯಲ್ಲೂ ಬೆಂಗಳೂರು, ಮೈಸೂರು, ಮಂಗಳೂರು, ಧಾರವಾಡ ಮೊದಲಾದ ಕಡೆ ಇವಿಎಂ ದೋಷಗಳ ಬಗ್ಗೆ ದೂರು ಬಂದಿರುವುದರಿಂಂದ ನಿಷೇಧಿಸುವುದೇ ಸೂಕ್ತ. ಇವಿಎಂ ದುರ್ಬಳಕೆ ಬಗ್ಗೆ ಬಂದ ದೂರುಗಳ ಸಮಗ್ರ ತನಿಖೆ ನಡೆಸಿ ತಪ್ಪಿತಸ್ಥರಿಗೆ ಶಿಕ್ಷೆ ನೀಡುವಂತೆ ಚುನಾವಣಾ ಆಯೋಗಕ್ಕೆ ಕೇಂದ್ರ ಸರ್ಕಾರ ನಿರ್ದೇಶಿಸಬೇಕು ಎಂದು ಒತ್ತಾಯಿಸಿದರು.

ADVERTISEMENT

ದೇಶದ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಭದ್ರಗೊಳಿಸಲು ಬಹುಸಂಸ್ಕೃತಿ ಮತ್ತು ಜಾತ್ಯತೀತ ವ್ಯವಸ್ಥೆಯನ್ನು ಉಳಿಸಿ, ಬೆಳೆಸಲು ದೇಶದ ಎಲ್ಲಾ ಹಿಂದೂ, ಮುಸ್ಲಿಂ, ಕ್ರೈಸ್ತ ಬಾಂಧವರೊಂದಿಗೆ ಕೈಜೋಡಿಸಬೇಕು ಎಂದು ಮನವಿ ಮಾಡಿದರು.

ಪ್ರತಿಭಟನೆಯಲ್ಲಿ ಎಸ್‌ಡಿಪಿಐ ಜಿಲ್ಲಾ ಘಟಕದ ಅಧ್ಯಕ್ಷ ಫೈರೋಜ್ ಪಾಷಾ, ಜಿಲ್ಲಾ ಕಾರ್ಯದರ್ಶಿ ಸೈಯದ್ ಫರೀದ್, ಉಪಾಧ್ಯಕ್ಷ ಅಮೀರ್ ಜಾನ್, ಗ್ರಾಮ ಪಂಚಾಯಿತಿ ಸದಸ್ಯ ನೂರುಲ್ಲಾ ಪಾಲ್ಗೊಂಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.