ADVERTISEMENT

‘ಮಾಹಿತಿ ನೀಡುವುದು ಅಧಿಕಾರಿಗಳ ಕರ್ತವ್ಯ’

​ಪ್ರಜಾವಾಣಿ ವಾರ್ತೆ
Published 7 ಜನವರಿ 2014, 7:08 IST
Last Updated 7 ಜನವರಿ 2014, 7:08 IST

ಹಾಸನ:‘ಮಾಹಿತಿ ಹಕ್ಕು ಅಧಿನಿಯಮದಡಿ ಬಂದಿರುವ ಅರ್ಜಿಗಳನ್ನು ಶೀಘ್ರ ಪರಿಶೀಲಿಸಿ ಅರ್ಜಿದಾರರಿಗೆ ನಿಖರ ಮಾಹಿತಿ ಒದಗಿಸುವುದು ಎಲ್ಲ ಅಧಿಕಾರಿಗಳ ಕರ್ತವ್ಯ’ ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಉಪೇಂದ್ರ ಪ್ರತಾಪ್ ಸಿಂಗ್ ತಿಳಿಸಿದರು.

ಮೈಸೂರಿನ ಆಡಳಿತ ತರಬೇತಿ ಸಂಸ್ಥೆಯವರು ಸೋಮವಾರ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಹಾಸನ ಜಿಲ್ಲೆಯ ಮಾಹಿತಿ ಅಧಿಕಾರಿಗಳಿಗಾಗಿ ಏರ್ಪಡಿಸಿದ್ದ ಎರಡು ದಿನಗಳ ‘ಮಾಹಿತಿ ಹಕ್ಕು ತರಬೇತಿ ಕಾರ್ಯಾಗಾರ’ ಉದ್ಘಾಟಿಸಿ ಅವರು ಮಾತನಾಡಿದರು.
‘ಮಾಹಿತಿ ಹಕ್ಕು ಅಧಿನಿಯಮದ 4(ಎ) ಮತ್ತು 4(ಬಿ)ಯಲ್ಲಿನ ಎಲ್ಲಾ ಮಾಹಿತಿಯನ್ನು ಕಚೇರಿಯಲ್ಲಿ ಸಿದ್ಧಗೊಳಿಸಿ ಅಂತರ್ಜಾಲದಲ್ಲಿ ಅಳವಡಿಸುವುದರಿಂದ ಅನಾವಶ್ಯಕ ಅರ್ಜಿಗಳು ಬರುವುದನ್ನು ತಪ್ಪಿಸಬಹುದು. ಇದನ್ನು ಪೂರೈಸಲು ಎಲ್ಲಾ ಇಲಾಖೆಗಳ ಅಧಿಕಾರಿಗಳು ಹೆಚ್ಚು ಒತ್ತು ನೀಡಬೇಕು’ ಎಂದರು.

ಪ್ರಾಸ್ತಾವಿಕ ಮಾತನಾಡಿದ ಹೆಚ್ಚುವರಿ ಜಿಲ್ಲಾಧಿಕಾರಿ ಡಾ.ಎಚ್.ಎನ್.ಗೋಪಾಲಕೃಷ್ಣ, ‘ಹಲವು ವರ್ಷಗಳಿಂದ ಜಾರಿಯಲ್ಲಿರುವ ಈ ನಿಯಮವನ್ನು ಅಧಿಕಾರಿಗಳು ಸರಿಯಾಗಿ ಪಾಲಿಸುತ್ತಿಲ್ಲ. ಇದು ಸಾರ್ವಜನಿಕರು ಮತ್ತು ಅಧಿಕಾರಿಗಳ ನಡುವಿನ ತಿಕ್ಕಾಟಕ್ಕೆ ಕಾರಣವಾಗಿ ಆಡಳಿತದ ಮೇಲೆ ಕೆಟ್ಟ ಪರಿಣಾಮ ಉಂಟಾಗುತ್ತಿದೆ. ಮಾಹಿತಿ ಹಕ್ಕು ಅಧಿನಿಯಮದಡಿ ಬರುವ ಅರ್ಜಿಗಳನ್ನು ಸರಿಯಾಗಿ ಅರ್ಥೈಸಿಕೊಂಡು ನಿಗದಿತ ಅವಧಿ­ಯೊಳಗೆ ಮಾಹಿತಿ ಒದಗಿಸುವುದು ಕರ್ತವ್ಯ­ವಾಗಬೇಕು. 

ಕಾಲಕಾಲಕ್ಕೆ ಮಾಹಿತಿ ಆಯೋಗ ಜಾರಿ ಮಾಡುವ ನಿಯಮಗಳನ್ನು ಅರಿತು­ಕೊಂಡರೆ ಈ ಕೆಲಸವನ್ನು ಸುಗಮವಾಗಿ ನಿರ್ವಹಿಸಬಹುದು’ ಎಂದರು.

ಮೈಸೂರಿನ ಆಡಳಿತ ತರಬೇತಿ ಸಂಸ್ಥೆಯ ಸಂಯೋಜಕ ಯೋಗನಾಥಸಿಂಗ್ ಸ್ವಾಗತಿಸಿದರು. ಹಾಸನ ಜಿಲ್ಲಾ ತರಬೇತಿ ಸಂಸ್ಥೆ ಪ್ರಾಚಾರ್ಯ ಜಾವಗಲ್ ನಾಗರಾಜ್ ವಂದಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.