ADVERTISEMENT

ಎಸ್ಸೆಸ್ಸೆಲ್ಸಿ ಪರೀಕ್ಷೆ ಬರೆಯಲಿರುವ 20,840 ವಿದ್ಯಾರ್ಥಿಗಳು

127 ಪರೀಕ್ಷಾ ಕೇಂದ್ರ ತೆರೆಯಲು ಸಿದ್ಧತೆ: ಡಿ.ಸಿ ಗಿರೀಶ್‌

​ಪ್ರಜಾವಾಣಿ ವಾರ್ತೆ
Published 28 ಜೂನ್ 2021, 15:36 IST
Last Updated 28 ಜೂನ್ 2021, 15:36 IST
ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಕೆ.ಎಸ್.ಸುರೇಶ್‌ ಕುಮಾರ್ ನಡೆಸಿದ ವಿಡಿಯೋ ಸಂವಾದಲ್ಲಿ ಹಾಸನ ಜಿಲ್ಲಾಧಿಕಾರಿ ಆರ್‌.ಗಿರೀಶ್‌ ಮತ್ತು ಅಧಿಕಾರಿಗಳು ಪಾಲ್ಗೊಂಡಿದ್ದರು.
ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಕೆ.ಎಸ್.ಸುರೇಶ್‌ ಕುಮಾರ್ ನಡೆಸಿದ ವಿಡಿಯೋ ಸಂವಾದಲ್ಲಿ ಹಾಸನ ಜಿಲ್ಲಾಧಿಕಾರಿ ಆರ್‌.ಗಿರೀಶ್‌ ಮತ್ತು ಅಧಿಕಾರಿಗಳು ಪಾಲ್ಗೊಂಡಿದ್ದರು.   

ಹಾಸನ: ಸರ್ಕಾರದ ಆದೇಶದನ್ವಯ ಜುಲೈ 19, 22 ರಂದು ಎಸ್ಸೆಸ್ಸೆಲ್ಸಿ ಪರೀಕ್ಷೆ ನಡೆಸಲು ಅಗತ್ಯ ಸಿದ್ಧತೆ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿಆರ್‌.ಗಿರೀಶ್‌ ತಿಳಿಸಿದರು.

ನಗರದಲ್ಲಿ ಸೋಮವಾರ ಸುದ್ದಿಗಾರರ ಜತೆ ಮಾತನಾಡಿದ ಅವರು, ಜಿಲ್ಲೆಯಲ್ಲಿ 19,612 ಹೊಸ ವಿದ್ಯಾರ್ಥಿಗಳು ಹಾಗೂ 1228 ಪುನರಾವರ್ತಿತ ವಿದ್ಯಾರ್ಥಿಗಳು ಸೇರಿದಂತೆ ಒಟ್ಟು 20,840 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದು, 127 ಪರೀಕ್ಷಾಕೇಂದ್ರಗಳನ್ನು ತೆರೆಯಲಾಗುವುದು ಎಂದರು.

ಪರೀಕ್ಷಾ ಕಟ್ಟಡದಲ್ಲಿ ಭಾಗವಹಿಸುವ ಎಲ್ಲಾ ಸಿಬ್ಬಂದಿ, ಶಿಕ್ಷಕರುಗಳನ್ನು ಕಡ್ಡಾಯವಾಗಿ ಪರೀಕ್ಷೆಗೆ ಒಳಪಡಿಸಿ, ಲಸಿಕೆ ಹಾಕಿರುವುದನ್ನು ಖಾತರಿ ಪಡಿಸಿಕೊಳ್ಳಲಾಗುವುದು ಎಂದು ಹೇಳಿದರು.

ADVERTISEMENT

ವಿದ್ಯಾರ್ಥಿಗಳಲ್ಲಿ ಕೋವಿಡ್ 19 ಲಕ್ಷಣಗಳಾದ ಜ್ವರ, ನೆಗಡಿ, ಕೆಮ್ಮು ಕಂಡು ಬಂದಲ್ಲಿ ಅಂತಹ ವಿದ್ಯಾರ್ಥಿಗಳನ್ನು ಪ್ರತ್ಯೇಕ ಕೊಠಡಿಯಲ್ಲಿ ಪರೀಕ್ಷೆ ಬರೆಯಲು ಅನುಮತಿ ನೀಡಲಾಗುವುದು. ಕೊರೊನಾ ಸೋಂಕಿತ ವಿದ್ಯಾರ್ಥಿಗಳು, ಹೋಂ ಐಸೋಲೇಷನ್‍ನಲ್ಲಿ ಇರುವವರು ಕೋವಿಡ್ ಕೇರ್ ಸೆಂಟರ್ ಗಳಲ್ಲಿ ಪರೀಕ್ಷೆ ಬರೆಯಬಹುದು ಎಂದು ಮಾಹಿತಿ ನೀಡಿದರು.

ಪ್ರಶ್ನೆಪತ್ರಿಕೆ ವಿತರಣೆಯಲ್ಲಿ ಯಾವುದೇ ಲೋಪದೋಷ ಆಗದಂತೆ ಕಾರ್ಯ ನಿರ್ವಹಿಸಲಾಗುವುದು. ಪರೀಕ್ಷೆ ಬರೆಯಲು ಆಗದ ವಿದ್ಯಾರ್ಥಿಗಳಿಗೆ ಮತ್ತೊಂದು ಅವಕಾಶ ನೀಡಲಾಗುವುದು.ಎಲ್ಲಾ ಪರೀಕ್ಷಾ ಕೇಂದ್ರಗಳಲ್ಲಿ ಕಡ್ಡಾಯವಾಗಿ ಸ್ಯಾನಿಟೈಸ್ ಮಾಡಲಾಗುವುದು.‌ ಒಂದು ಡೆಸ್ಕ್‌ನಲ್ಲಿ ಒಬ್ಬ ವಿದ್ಯಾರ್ಥಿ ಪರೀಕ್ಷೆ ಬರೆಯಲು ವ್ಯವಸ್ಥೆ ಮಾಡಲಾಗುವುದು. ವಿದ್ಯಾರ್ಥಿಗಳು ಎನ್‌95 ಮಾಸ್ಕ್‌, ಬಟ್ಟೆ ಮಾಸ್ಕ್‌ಗಳನ್ನುಕಡ್ಡಾಯವಾಗಿ ಬಳಸಬೇಕು ಎಂದರು.

ಜಿಲ್ಲಾಧಿಕಾರಿ ಜತೆ ಸಚಿವರ ವಿಡಿಯೋ ಸಂವಾದ: ಇದಕ್ಕೂ ಮುನ್ನ ಜಿಲ್ಲಾಧಿಕಾರಿಗಳೊಂದಿಗೆ ಎಸ್ಸೆಸ್ಸೆಲ್ಸಿ ಪರೀಕ್ಷೆ
ಸಂಬಂಧ ವಿಡಿಯೋ ಸಂವಾದ ನಡೆಸಿದ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್‌.ಸುರೇಶ್‌ ಕುಮಾರ್,ಮಕ್ಕಳ ಕಲಿಕೆಗೆ ಉತ್ತೇಜನ ನೀಡುವ ನಿಟ್ಟಿನಲ್ಲಿ ಜುಲೈ ಮೂರನೇ ವಾರದಲ್ಲಿಎಸ್ಸೆಸ್ಸೆಲ್ಸಿ ಪರೀಕ್ಷೆ ನಡೆಸುತ್ತಿದ್ದು, ಮಕ್ಕಳು ಧೈರ್ಯದಿಂದ ಒತ್ತಡ ಮತ್ತು ತೊಂದರೆ ಇಲ್ಲದಂತೆ ಪರೀಕ್ಷೆ ಬರೆಯಲು ಸುರಕ್ಷತಾ ಕ್ರಮ ತೆಗೆದುಕೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಪರೀಕ್ಷೆಯನ್ನು ಸರಳ ರೀತಿಯಲ್ಲಿ ಎರಡು ದಿನ ನಡೆಸಲಾಗುತ್ತಿದೆ. ಪರೀಕ್ಷೆಯಆತಂಕ ನಿವಾರಿಸಲು ಹಬ್ಬದ ವಾತಾವರಣ ಸೃಷ್ಟಿಸಿ, ಮಕ್ಕಳ ಆರೋಗ್ಯಕ್ಕೆ ಹೆಚ್ಚಿನಪ್ರಾಧಾನ್ಯತೆ ನೀಡಬೇಕು ಎಂದರು.

ಯಾವುದೇ ವಿದ್ಯಾರ್ಥಿಯೂ ಪರೀಕ್ಷೆಯಿಂದ ವಂಚಿತವಾಗಬಾರದು. ಆರೋಗ್ಯಸಮಸ್ಯೆಯಿಂದ ಜುಲೈ ತಿಂಗಳಲ್ಲಿ ನಡೆಯುವ ದಿನಾಂಕದಂದು ಪರೀಕ್ಷೆ ಬರೆಯಲು ಸಾಧ್ಯವಾಗದಿದ್ದಲ್ಲಿ ಮುಂದಿನ ದಿನಗಳಲ್ಲಿ ನಡೆಸುವ ಪರೀಕ್ಷೆ ಬರೆಯಬಹುದು ಎಂದು ತಿಳಿಸಿದರು.

ಒಂದು ಡೆಸ್ಕ್‌ಗೆ ಒಬ್ಬ ವಿದ್ಯಾರ್ಥಿಯಂತೆ ಒಂದು ಕೊಠಡಿಯಲ್ಲಿ 12 ಮಂದಿ ಪರೀಕ್ಷೆ ಬರೆಯಲು ವ್ಯವಸ್ಥೆ ಮಾಡಲಾಗುತ್ತಿದೆ. ರಾಜ್ಯದಲ್ಲಿ 4,884 ಕೇಂದ್ರಗಳಲ್ಲಿಪರೀಕ್ಷೆ ನಡೆಸಲಾಗುತ್ತಿತ್ತು, 73,066 ಕೊಠಡಿ ಬಳಸಿಕೊಳ್ಳಲಾಗುತ್ತಿದೆ, 8.76.792ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ ಎಂದು ವಿವರಿಸಿದರು.

ಪರೀಕ್ಷಾ ಕೇಂದ್ರದಲ್ಲಿ ಅಂತರ ಕಾಯ್ದುಕೊಂಡು ಕಾರ್ಯನಿರ್ವಹಿಸಲು ಸ್ಕೌಟ್ಸ್ ಮತ್ತು ಗೈಡ್ಸ್, ಎನ್ .ಸಿ. ಸಿ ಅಭ್ಯರ್ಥಿಗಳನ್ನು ಬಳಸಿಕೊಳ್ಳಬಹುದು ಎಂದು ಸಲಹೆ ನೀಡಿದರು.

ಪರೀಕ್ಷಾ ಕೇಂದ್ರಗಳಲ್ಲಿ ಥರ್ಮಲ್ ಸ್ಕ್ಯಾನರ್, ಪಲ್ಸ್ ಆಕ್ಸಿಮೀಟರ್ ಇರಬೇಕು.ವಿದ್ಯಾರ್ಥಿ ವಾಸಸ್ಥಳದಿಂದ ಹತ್ತಿರವಿರುವ ಪರೀಕ್ಷಾ ಕೇಂದ್ರದಲ್ಲಿ ಪರೀಕ್ಷೆ ಬರೆಯಲುಅವಕಾಶ ನೀಡಬೇಕು ಎಂದು ಸಚಿವರು ಹೇಳಿದರು.

ಸಭೆಯಲ್ಲಿ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಣಾಧಿಕಾರಿ ಬಿ.ಎ. ಪರಮೇಶ್, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಆರ್‌. ಶ್ರೀನಿವಾಸ್‍ಗೌಡ, ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಕೆ.ಎಸ್.ಪ್ರಕಾಶ್
ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.