ADVERTISEMENT

ಹಾಸನ: 40 ಯುನಿಟ್‌ ರಕ್ತ ಸಂಗ್ರಹ

ಅಂತರರಾಷ್ಟ್ರೀಯ ಸ್ವಯಂ ಪ್ರೇರಿತ ರಕ್ತದಾನ ದಿನಾಚರಣೆ

​ಪ್ರಜಾವಾಣಿ ವಾರ್ತೆ
Published 28 ಅಕ್ಟೋಬರ್ 2020, 14:39 IST
Last Updated 28 ಅಕ್ಟೋಬರ್ 2020, 14:39 IST
ಹಾಸನ ನಗರದ ಹೇಮಾವತಿ ಪ್ರತಿಮೆ ಬಳಿ ಬುಧವಾರ ಆಯೋಜಿಸಿದ್ದ ಶಿಬಿರದಲ್ಲಿ ಸಾರ್ವಜನಿಕರು ಸ್ವಯಂ ಪ್ರೇರಿತವಾಗಿ ರಕ್ತದಾನ ಮಾಡಿದರು.
ಹಾಸನ ನಗರದ ಹೇಮಾವತಿ ಪ್ರತಿಮೆ ಬಳಿ ಬುಧವಾರ ಆಯೋಜಿಸಿದ್ದ ಶಿಬಿರದಲ್ಲಿ ಸಾರ್ವಜನಿಕರು ಸ್ವಯಂ ಪ್ರೇರಿತವಾಗಿ ರಕ್ತದಾನ ಮಾಡಿದರು.   

ಹಾಸನ: ನಗರದ ಹೇಮಾವತಿ ಪ್ರತಿಮೆ ಬಳಿ ಅಂತರರಾಷ್ಟ್ರೀಯ ಸ್ವಯಂ ಪ್ರೇರಿತ ರಕ್ತದಾನ ದಿನಾಚರಣೆ ಅಂಗವಾಗಿ ಬುಧವಾರ ಆಯೋಜಿಸಿದ್ದ ಶಿಬಿರದಲ್ಲಿ ಒಟ್ಟು 40 ಯುನಿಟ್‌ ರಕ್ತ ಸಂಗ್ರಹಿಸಲಾಯಿತು.

ಭಾರತೀಯ ರೆಡ್ ಕ್ರಾಸ್ ಸಂಸ್ಥೆ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಹಿಮ್ಸ್‌ ಆಸ್ಪತ್ರೆ, ಜಿಲ್ಲಾ ಏಡ್ಸ್ ನಿಯಂತ್ರಣ ಮತ್ತು ಪ್ರತಿಬಂಧಕ ಘಟಕ, ಜಿಲ್ಲಾ ಆಸ್ಪತ್ರೆ ರಕ್ತನಿಧಿ ಹಾಗೂ ವಿವಿಧ ಸಂಘಟನೆಗಳ ಆಶ್ರಯದಲ್ಲಿ ಹಮ್ಮಿಕೊಂಡಿದ್ದ ರಕ್ತದಾನ ಶಿಬಿರವನ್ನು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಧಿಕಾರಿ ಡಾ. ಸತೀಶ್‌ ಕುಮಾರ್‌ ಉದ್ಘಾಟಿಸಿದರು.

ಕೆಎಸ್‌ಆರ್‌ಟಿಸಿ ಚಾಲಕರು ಮತ್ತು ನಿರ್ವಾಹಕರು, ಆಟೊ ಚಾಲಕರು, ಭಾರತ್‌ ಸ್ಕೌಟ್ಸ್‌ ಮತ್ತು ಗೌಡ್ಸ್‌ನ ವಿದ್ಯಾರ್ಥಿಗಳು, ರೆಡ್ ಕ್ರಾಸ್‌ ಸಂಸ್ಥೆಯ ಪದಾಧಿಕಾರಿಗಳು, ಮಹಿಳೆಯರು ಹಾಗೂ ಸಾರ್ವಜನಿಕರು ಸ್ವಯಂ ಪ್ರೇರಿತರಾಗಿ ರಕ್ತದಾನ ಮಾಡಿದರು.

ADVERTISEMENT

ಡಾ.ಸತೀಶ್‌ ಮಾತನಾಡಿ, ರಕ್ತದಾನ ಶ್ರೇಷ್ಠವಾದುದ್ದು, ಜೀವ ಉಳಿಸುವ ಕೆಲಸ ಮಾಡುವವರು ದೇವರಿಗೆ ಸಮಾನರು. ಕೋವಿಡ್‌-19 ಲಾಕ್‌ಡೌನ್ ಸಂದರ್ಭದಲ್ಲಿ ಸಾರ್ವಜನಿಕರು ಹೊರಗೆ ಬಾರದ ಕಾರಣ ರಕ್ತದ ಕೊರತೆ ಉಂಟಾಗಿತ್ತು. ಕೋವಿಡ್‌ಗೆ ಭಯಪಟ್ಟು ಯಾರು ರಕ್ತದಾನ ಮಾಡದೇ ಇರಬಾರದು. ಸುರಕ್ಷತಾ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದರು.

ರಕ್ತದಾನ ಮಾಡುವುದರಿಂದ ಆರೋಗ್ಯದ ಮೇಲೆ ಯಾವುದೇ ಕೆಟ್ಟ ಪರಿಣಾಮ ಬೀರುವುದಿಲ್ಲ. ಈ ಬಗ್ಗೆ ಜನರಿಗೆ ಮಾಹಿತಿ ನೀಡಬೇಕು. ನಿಯಮಿತವಾಗಿ ರಕ್ತದಾನ ಮಾಡುವುದರಿಂದ ಹೆಚ್ಚು ಆರೋಗ್ಯವಾಗಿ ಇರಬಹುದು ಎಂದು ಸಲಹೆ ನೀಡಿದರು.

ಸ್ವಾತಂತ್ರ್ಯ ಹೋರಾಟಗಾರ ಎಚ್.ಎಂ. ಶಿವಣ್ಣ, ಸಾಮಾಜಿಕ ಕಾರ್ಯಕರ್ತ ಅಮ್ಜಾದ್ ಖಾನ್, ಕ್ಷಯರೋಗ ನಿಯಂತ್ರಣಾಧಿಕಾರಿ ನಾಗೇಶ್ ಪಿ.ಆರಾಧ್ಯ, ಭಾರತೀಯ ರೆಡ್ ಕ್ರಾಸ್ ಸಂಸ್ಥೆಯ ಜಿಲ್ಲಾ ಸಭಾಪತಿ ಎಚ್.ಪಿ. ಮೋಹನ್, ಪದಾಧಿಕಾರಿಗಳಾದ ಕೆ.ಟಿ. ಜಯಶ್ರೀ, ಮಹಾವೀರ್ ಬನ್ಸಾಲಿ, ಮಜ್ದೂರ್ ಆಟೊ ಚಾಲಕರ ಸಂಘದ ಉಪಾಧ್ಯಕ್ಷ ದಿಲೀಪ್, ರಕ್ತನಿಧಿ ವಿಭಾಗದ ನಾಗಲಕ್ಷ್ಮಿ, ರವಿಕುಮಾರ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.