ADVERTISEMENT

ಹಾಸನ: 7 ಖಾಸಗಿ ಆಸ್ಪತ್ರೆಗಳಲ್ಲಿ ಕೋವಿಡ್‌ಗೆ ಚಿಕಿತ್ಸೆ

ನಿಗದಿಗಿಂತ ಹೆಚ್ಚಿನ ಶುಲ್ಕ ಪಡೆದರೆ ಕ್ರಮ: ಸಚಿವ

​ಪ್ರಜಾವಾಣಿ ವಾರ್ತೆ
Published 27 ಜುಲೈ 2020, 16:27 IST
Last Updated 27 ಜುಲೈ 2020, 16:27 IST
ಗೋಪಾಲಯ್ಯ
ಗೋಪಾಲಯ್ಯ   

ಹಾಸನ: ಕೊರೊನಾ ಸೋಂಕಿತರ ಚಿಕಿತ್ಸೆಗಾಗಿ ಜಿಲ್ಲೆಯ ಏಳು ಖಾಸಗಿ ಆಸ್ಪತ್ರೆಗಳು 290 ಹಾಸಿಗೆ ನೀಡಲು ಒಪ್ಪಿಗೆ ಸೂಚಿಸಿವೆ ಎಂದು ಸಚಿವ ಕೆ. ಗೋಪಾಲಯ್ಯ ಹೇಳಿದರು.

ಕೋವಿಡ್‌ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಕೋವಿಡ್ ಆಸ್ಪತ್ರೆಯಲ್ಲಿ 400 ಹಾಸಿಗೆ ಹಾಗೂ ಎಸ್‌ಡಿಎಂ ವೈದ್ಯಕೀಯ ಕಾಲೇಜಿನ ಕೋವಿಡ್ ಕೇರ್ ಕೇಂದ್ರದಲ್ಲಿ 300 ಹಾಸಿಗೆಗಳ ವ್ಯವಸ್ಥೆ ಮಾಡಲಾಗಿದೆ. ಹಾಗೆಯೇ ಸೋಂಕಿತರ ಸಂಖ್ಯೆ ಹೆಚ್ಚಾದರೆ ಕೃಷಿ ಕಾಲೇಜಿನಲ್ಲಿ 400 ಬೆಡ್‍ಗಳ ವ್ಯವಸ್ಥೆ ಮಾಡಲಾಗಿದ್ದು, ತುರ್ತು ಪರಿಸ್ಥಿತಿ ಉಂಟಾದರೆ 48 ಗಂಟೆಗಳಲ್ಲಿ ಪೂರ್ಣ ಸಿದ್ಧತೆ ಮಾಡಲಾಗುತ್ತದೆ ಎಂದು ಸೋಮವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಖಾಸಗಿ ಆಸ್ಪತ್ರೆಗಳು ಸೋಂಕಿತರಿಗೆ ಸರ್ಕಾರ ನಿಗದಿಪಡಿಸಿದ ವೆಚ್ಚದಲ್ಲಿ ಚಿಕಿತ್ಸೆ ನೀಡಬೇಕು ಹಾಗೂ ಚಿಕಿತ್ಸೆಗೆ ನಿರಾಕರಿಸಿದರೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಮತ್ತು ಜಿಲ್ಲಾ ನೋಡಲ್ ಅಧಿಕಾರಿ ಕಾಂತರಾಜ್‌ ಮೊ. 9449843200 ಹಾಗೂ ಜಿಲ್ಲಾ ಸಹಾಯವಾಣಿ ಸಂಖ್ಯೆ: 08172-246575 ಕರೆ ಮಾಡಿ ತಿಳಿಸಬಹುದು. ಅಂತಹ ಆಸ್ಪತ್ರೆ ವಿರುದ್ಧ ಜಿಲ್ಲಾಡಳಿತ ಕ್ರಮ ಕೈಗೊಳ್ಳುತ್ತದೆ ಎಂದು ತಿಳಿಸಿದರು.

ADVERTISEMENT

ಕೋವಿಡೇತರರಿಗೂ ಚಿಕಿತ್ಸೆ ನೀಡಬೇಕಾಗಿರುವ ಕಾರಣ ಮೊದಲ ಹಂತದಲ್ಲಿ ಏಳು ಖಾಸಗಿ ಆಸ್ಪತ್ರೆಗಳಲ್ಲಿ ಕೊರೊನಾ
ಸೋಂಕಿತರಿಗೆ ರೋಗಿಗಳಿಗೆ ಚಿಕಿತ್ಸೆ ನೀಡಲು ಸೂಚಿಸಲಾಗಿದೆ. ಮುಂದಿನ ದಿನಗಳಲ್ಲಿ ಉಳಿದ ಖಾಸಗಿ ಆಸ್ಪತ್ರೆಗಳಲ್ಲೂ
ಸೋಂಕಿತರಿಗೆ ಚಿಕಿತ್ಸೆ ನೀಡುವ ವ್ಯವಸ್ಥೆ ಕಲ್ಪಿಸಲಾಗುವುದು ಎಂದರು.

ರೋಗ ಲಕ್ಷಣ ಇಲ್ಲದವರಿಗೆ ಬುಧವಾರದಿಂದ ಹೋಂ ಐಸೋಲೆಷನ್‌ನಲ್ಲಿ ಚಿಕಿತ್ಸೆಗೆ ವ್ಯವಸ್ಥೆ ಮಾಡಲಾಗುವುದು. ಹದಿನೈದು ದಿನಕ್ಕೆ ಆಗುವಷ್ಟು ಔಷಧಗಳನ್ನು ಅವರ ಮನೆಗೆ ತಲುಪಿಸಲಾಗುವುದು. ಮಾಸ್ಕ್‌, ಸ್ಯಾನಿಟೈಸರ‍್ ವ್ಯವಸ್ಥೆ ಮಾಡಲಾಗುವುದು. ಅಂತರ ಪಾಲನೆ, ಮಾಸ್ಕ್‌ ಧರಿಸುವುದು ಕಡ್ಡಾಯ. ಅನಗತ್ಯವಾಗಿ ಮನೆಯಿಂದ ಹೊರಗೆ ಓಡಾಡಬೇಡಿ ಎಂದು ಸಲಹೆ ನೀಡಿದರು.

ಶಾಸಕ ಪ್ರೀತಂ ಜೆ. ಗೌಡ ಮಾತನಾಡಿ, ಉಸಿರಾಟದ ತೊಂದರೆ ಹಾಗೂ ರೋಗದ ಗುಣಲಕ್ಷಣಗಳಿರುವ ಸೋಂಕಿತರನ್ನು ಕೋವಿಡ್ ಆಸ್ಪತ್ರೆಯಲ್ಲಿರಿಸಿ ಚಿಕಿತ್ಸೆ ನೀಡಲಾಗುತ್ತಿದೆ. ರೋಗ ಲಕ್ಷಣಗಳಿಲ್ಲದ ಸೋಂಕಿತರನ್ನು ಕೋವಿಡ್ ಕೇರ್ ಕೇಂದ್ರಕ್ಕೆ ವರ್ಗಾಯಿಸಿ ಚಿಕಿತ್ಸೆ ನೀಡಲಾಗುತ್ತದೆ. ಹೋಂ ಐಸೋಲೇಷನ್‌ನಲ್ಲಿರಲು ಇಚ್ಛಿಸಿದವರ ಮನೆಯಲ್ಲಿ ಪ್ರತ್ಯೇಕ ಶೌಚಾಲಯ ಹಾಗೂ ವ್ಯವಸ್ಥಿತ ಕೊಠಡಿ ಹೊಂದಿರಬೇಕು. ರೋಗಲಕ್ಷಣಗಳಿಲ್ಲದ ಸೋಂಕಿತರಿಗಾಗಿ ಜಿಲ್ಲೆ ಹಾಗೂ ತಾಲ್ಲೂಕುಗಳಲ್ಲಿ ಕೋವಿಡ್ ಕೇರ್‌ ಕೇಂದ್ರಗಳನ್ನು ಸ್ಥಾಪಿಸಲಾಗಿದೆ. ಸಾರ್ವಜನಿಕರು ಭಯ ಪಡದೆ ಜಿಲ್ಲಾಡಳಿತಕ್ಕೆ ಸಹಕರಿಸಬೇಕು ಎಂದು ಮನವಿ ಮಾಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.