ADVERTISEMENT

ಎರಡನೇ ಡೋಸ್ ಪಡೆಯದ 90 ಸಾವಿರ ಜನರು

ಶಾಲಾ, ಕಾಲೇಜು ವಿದ್ಯಾರ್ಥಿಗಳಿಗೆ ಆರ್‌ಟಿ–ಪಿಸಿಆರ್‌ ಪರೀಕ್ಷೆ

​ಪ್ರಜಾವಾಣಿ ವಾರ್ತೆ
Published 29 ನವೆಂಬರ್ 2021, 15:51 IST
Last Updated 29 ನವೆಂಬರ್ 2021, 15:51 IST
ಚನ್ನರಾಯಪಟ್ಟಣ ತಾಲ್ಲೂಕಿನ ವಸತಿ ಶಾಲೆಗೆ ಜಿಲ್ಲಾ ಆರೋಗ್ಯಾಧಿಕಾರಿ ಕೆ.ಎಂ.ಸತೀಶ್‌ ಕುಮಾರ್ ಭೇಟಿ ನೀಡಿ, ಸಿಬ್ಬಂದಿ ಜತೆ ಸಮಾಲೋಚನೆ ನಡೆಸಿದರು
ಚನ್ನರಾಯಪಟ್ಟಣ ತಾಲ್ಲೂಕಿನ ವಸತಿ ಶಾಲೆಗೆ ಜಿಲ್ಲಾ ಆರೋಗ್ಯಾಧಿಕಾರಿ ಕೆ.ಎಂ.ಸತೀಶ್‌ ಕುಮಾರ್ ಭೇಟಿ ನೀಡಿ, ಸಿಬ್ಬಂದಿ ಜತೆ ಸಮಾಲೋಚನೆ ನಡೆಸಿದರು   

ಹಾಸನ: ಚನ್ನರಾಯಪಟ್ಟಣ ತಾಲ್ಲೂಕಿನ ವಸತಿ ಶಾಲೆ ವಿದ್ಯಾರ್ಥಿಗಳಿಗೆ ಕೋವಿಡ್‌ 19 ದೃಢಪಟ್ಟಿರುವುದರಿಂದ ಜಿಲ್ಲೆಯಾದ್ಯಂತ ಕಟ್ಟೆಚ್ಚರ ವಹಿಸಲಾಗಿದ್ದು, ಆರೋಗ್ಯ ಇಲಾಖೆ ಸಿಬ್ಬಂದಿ ಮಕ್ಕಳ ಆರೋಗ್ಯ ತಪಾಸಣೆ ನಡೆಸಿದೆ.

ಸರ್ಕಾರದ ಸೂಚನೆ ಹಿನ್ನೆಲೆಯಲ್ಲಿ ವಸತಿ ಶಾಲೆ ಸೇರಿದಂತೆ ಎಲ್ಲಾ ಶಾಲಾ ಕಾಲೇಜು ಹಾಗೂ ಹೊರ ರಾಜ್ಯಗಳಿಂದ ಬರುವವಿದ್ಯಾರ್ಥಿಗಳನ್ನು ರ್‍ಯಾಂಡಮ್ ಪರೀಕ್ಷೆಗೆ ಒಳಪಡಿಸಲಾಗುತ್ತಿದೆ. ವಸತಿ ಶಾಲೆಯ 190 ಮಕ್ಕಳನ್ನು ಪರೀಕ್ಷೆಗೆ ಒಳಪಡಿಸಿದ ವೇಳೆ 13 ಮಕ್ಕಳಲ್ಲಿ ಪಾಸಿಟಿವ್ಇರುವುದು ದೃಢಪಟ್ಟಿದೆ.

‘ಹದಿಮೂರು ಮಕ್ಕಳು ಹೊರತುಪಡಿಸಿ ಇತರೆ ವಿದ್ಯಾರ್ಥಿಗಳಲ್ಲಿ ಯಾವುದೇ ರೋಗ ಲಕ್ಷಣ ಕಂಡು ಬಂದಿಲ್ಲ. ಸರ್ಕಾರದ ಮಾರ್ಗಸೂಚಿ ಪ್ರಕಾರ ಎಲ್ಲಾ ವಸತಿ ಶಾಲೆ ಮತ್ತು ಹೊರಗಿನಿಂದ ಬರುವ ವಿದ್ಯಾರ್ಥಿಗಳನ್ನು ಆರ್‌ಟಿ–ಪಿಸಿಆರ್‌ ಪರೀಕ್ಷೆಗೆ ಒಳಪಡಿಸಲಾಗುತ್ತಿದೆ. ವಿದ್ಯಾರ್ಥಿಗಳನ್ನೇ ಕೇಂದ್ರೀಕರಿಸಿ ಪರೀಕ್ಷೆ ಮಾಡಲಾಗುತ್ತಿದೆ’ ಎಂದು ಸ್ಥಳಕ್ಕೆ ಭೇಟಿ ನೀಡಿಪರಿಶೀಲಿಸಿದ ನಂತರ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಕೆ.ಎಂ.ಸತೀಶ್
ಕುಮಾರ್ ತಿಳಿಸಿದರು.

ADVERTISEMENT

‘ಜಿಲ್ಲೆಯಲ್ಲಿ ಕೋವಿಡ್ ಲಸಿಕೆ ಪ್ರಗತಿ ಪರಿಶೀಲನೆ ಮಾಡಲಾಗುತ್ತಿದ್ದು, ಈವರೆಗೆ 18 ವರ್ಷಮೇಲ್ಪಟ್ಟ ಶೇ 92ರಷ್ಟು ಮಂದಿಗೆ ಮೊದಲ ಡೋಸ್ ನೀಡಲಾಗಿದೆ. 2ನೇ ಡೋಸ್ ನೀಡಿಕೆಯಲ್ಲಿ ಶೇ 56ರಷ್ಟು ಪ್ರಗತಿ ಸಾಧಿಸಲಾಗಿದೆ. ಇನ್ನೂ 90ಸಾವಿರ ಮಂದಿ ಎರಡನೇ ಡೋಸ್ ಪಡೆಯಬೇಕಿದೆ’ ಎಂದು ಮಾಹಿತಿ ನೀಡಿದರು.

ಗ್ರಾಮ ಪಂಚಾಯಿತಿ ಸದಸ್ಯರು, ಕಾರ್ಯದರ್ಶಿಗಳು, ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿಗಳು, ತಹಶೀಲ್ದಾರ್‌ಗಳು, ಜಿಲ್ಲಾ ಪಂಚಾಯಿತಿ, ಆರೋಗ್ಯ, ಕಂದಾಯ ಇಲಾಖೆ ಸಿಬ್ಬಂದಿ ಸೇರಿ ಪಂಚಾಯಿತಿವಾರು ಮನೆ ಮನೆಗೆ ಭೇಟಿ ನೀಡಿ, ಲಸಿಕೆ ಹಾಕುವ ಕೆಲಸ ಮಾಡಲಾಗುತ್ತಿದೆ ಎಂದು ಹೇಳಿದರು.

ಜಿಲ್ಲೆಯಲ್ಲಿ ಕಳೆದ ಎರಡು ತಿಂಗಳಿಂದ 24 ಮಂದಿ ಕೊರೊನಾ ಸೋಂಕಿನಿಂದ ಮೃತಪಟ್ಟಿದ್ದಾರೆ.ಇವರಲ್ಲಿ ಎರಡೂ ಡೋಸ್ ಲಸಿಕೆ ಪಡೆಯದೇ ಇರುವವರು 22 ಮಂದಿ ಸೇರಿದ್ದಾರೆ. ಲಸಿಕೆಪಡೆದುಕೊಂಡಿದ್ದರೆ ಇಷ್ಟೂ ಮಂದಿ ಸಾಯುತ್ತಿರಲಿಲ್ಲ. ಲಸಿಕೆ ಪಡೆಯದವರು ತಡೆ ಮಾಡದೆ ಪಡೆದುಕೊಳ್ಳಬೇಕು. ಪ್ರತಿಯೊಬ್ಬರು ಮಾಸ್ಕ್‌ ಧರಿಸಬೇಕು, ಅಂತರ ಪಾಲನೆ ಮಾಡಬೇಕು ಎಂದು ಮನವಿ ಮಾಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.