ADVERTISEMENT

ಡಿಎಚ್ಒಗೆ ನಿಂದನೆ: ಕ್ಷಮೆಯಾಚನೆಗೆ ಆಗ್ರಹ

ಶಾಸಕ ಶಿವಲಿಂಗೇಗೌಡ ವಿರುದ್ಧ ವೈದ್ಯರು, ಆರೋಗ್ಯ ಇಲಾಖೆ ನೌಕರರ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 1 ಜೂನ್ 2021, 13:51 IST
Last Updated 1 ಜೂನ್ 2021, 13:51 IST
 ಹಾಸನ ಜಿಲ್ಲಾಧಿಕಾರಿ ಕಚೇರಿ ಎದುರು ವೈದ್ಯರು, ನೌಕರರು ಪ್ರತಿಭಟನೆ ನಡೆಸಿದರು
 ಹಾಸನ ಜಿಲ್ಲಾಧಿಕಾರಿ ಕಚೇರಿ ಎದುರು ವೈದ್ಯರು, ನೌಕರರು ಪ್ರತಿಭಟನೆ ನಡೆಸಿದರು   

ಹಾಸನ: ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಕೆ.ಎಂ.ಸತೀಶ್ ಕುಮಾರ್‌ ಅವರನ್ನು ನಿಂದಿಸಿರುವ ಶಾಸಕ ಕೆ.ಎಂ.ಶಿವಲಿಂಗೇಗೌಡ ಕೂಡಲೇ ಕ್ಷಮೆಯಾಚಿಸಬೇಕುಎಂದು ಆಗ್ರಹಿಸಿ ವೈದ್ಯರು, ಆರೋಗ್ಯ ಇಲಾಖೆ ನೌಕರರು ಮಂಗಳವಾರ ಪ್ರತಿಭಟನೆ ನಡೆಸಿದರು.

ಭಾರತೀಯ ವೈದ್ಯಕೀಯ ಸಂಘ, ಆರೋಗ್ಯ, ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಇಲಾಖೆ, ಕರ್ನಾಟಕ ಸರ್ಕಾರಿ ವೈದ್ಯಾಧಿಕಾರಿಗಳ ಸಂಘದ ನೇತೃತ್ವದಲ್ಲಿ ವೈದ್ಯರು, ನೌಕರರು ಬೆಳಿಗ್ಗೆಡಿಎಚ್‌ಒ ಕಚೇರಿ ಎದುರು ಪ್ರತಿಭಟನೆ ನಡೆಸಿ, ಸಂಜೆ ಜಿಲ್ಲಾಧಿಕಾರಿ ಆರ್.ಗಿರೀಶ್‌ಗೆ ಮನವಿಸಲ್ಲಿಸಿದರು.

ಮೇ 29 ರಂದು ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಕೋವಿಡ್ ಪ್ರಗತಿ ಪರಿಶೀಲನಾ ಸಭೆಯಲ್ಲಿ ಶಾಸಕರು ಅಧಿಕಾರಿಯನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ. ಕೋವಿಡ್ ಸಂದರ್ಭದಲ್ಲಿ ವೈದ್ಯರು ಪ್ರಾಣ ಪಣಕ್ಕಿಟ್ಟು ಕೆಲಸ ಮಾಡುತ್ತಿದ್ದಾರೆ. ತಿಂಗಳುಗಟ್ಟಲೇ ಕುಟುಂಬ ಮರೆತುಸಮಾಜ ಸೇವೆಯಲ್ಲಿ ತೊಡಗಿರುವ ಸಂದರ್ಭದಲ್ಲಿ ಜನಪ್ರತಿನಿಧಿಗಳು ಮನೋಸ್ಥೈರ್ಯ ತುಂಬುವ ಕೆಲಸ ಮಾಡಬೇಕು. ನಮಗೂ ಸ್ವಾಭಿಮಾನ ಇದೆ ಎನ್ನುವುದನ್ನು ಮರೆಯಬಾರದು ಎಂದು ಎಚ್ಚರಿಕೆ ನೀಡಿದರು.

ADVERTISEMENT

‘ಅರಸೀಕೆರೆ ತಾಲ್ಲೂಕಿನ ವೈದ್ಯರು ರಾಜಕಾರಣಿಗಳ ಒತ್ತಡಕ್ಕೆ ಸಿಲುಕಿದ್ದಾರೆ. ರಾಜಕೀಯ ಮುಖಂಡರು ಮಾನಸಿಕ ಹಿಂಸೆ ನೀಡುತ್ತಿದ್ದಾರೆ. ಈಗಾಗಲೇ ಸಾಕಷ್ಟು ವೈದ್ಯರು ಕರೆ ಮಾಡಿರಾಜೀನಾಮೆ ನೀಡುವ, ಸುದೀರ್ಘ ರಜೆ ಹಾಕುವುದಾಗಿ ಅಳಲು ತೋಡಿಕೊಳ್ಳುತ್ತಿದ್ದಾರೆ.ಕೋವಿಡ್ ಕಾಲದಲ್ಲಿ ವೈದ್ಯರ ಅವಶ್ಯಕತೆ ಅರ್ಥ ಮಾಡಿಕೊಳ್ಳದಿರುವುದು ಶೋಚನೀಯ’ ಎಂದುಕರ್ನಾಟಕ ಸರ್ಕಾರಿ ವೈದ್ಯಾಧಿಕಾರಿ ಸಂಘದ ಜಿಲ್ಲಾಧ್ಯಕ್ಷ ಡಾ.ಕಾಂತರಾಜು ಬೇಸರ ವ್ಯಕ್ತಪಡಿಸಿದರು.

ಜಿಲ್ಲಾಡಳಿತ ಸಮಸ್ಯೆಯನ್ನು ಗಂಭೀರವಾಗಿ ಪರಿಗಣಿಸಬೇಕು. ಶಿವಲಿಂಗೇಗೌಡಅವರು ಕೂಡಲೇ ಅಧಿಕಾರಿಯ ಕ್ಷಮೆಯಾಚಿಸಬೇಕು ಎಂದು ಒತ್ತಾಯಿಸಿದರು.

ಪ್ರತಿಭಟನೆಯಲ್ಲಿ ಆರ್.ಸಿ.ಎಚ್. ಅಧಿಕಾರಿ ಕಾಂತರಾಜು, ತಾಲೂಕು ಆರೋಗ್ಯಾಧಿಕಾರಿ ಡಾ. ವಿಜಯ್, ರಾಜ್ಯ ಆರೋಗ್ಯ ಇಲಾಖೆ ಹಾಗೂ ವೈದ್ಯಕೀಯ ಶಿಕ್ಷಣ ಇಲಾಖೆಯ ಗೌರವಾಧ್ಯಕ್ಷೆ ಆರ್. ವಾಣಿ, ಬಿ.ಎಲ್. ನಿರ್ವಾಣಿರಾವ್, ಪ್ರಧಾನ ಕಾರ್ಯದರ್ಶಿ ಜಿ.ಎನ್. ಜಗದೀಶ್, ಖಜಾಂಚಿ ಬಿ.ಎನ್. ಜಗದೀಶ್, ಎಂ.ಎನ್. ವಸಂತಕುಮಾರ್ ಭಾಗವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.