ADVERTISEMENT

ಆರೋಗ್ಯದ ಬಗ್ಗೆ ಮುನ್ನೆಚ್ಚರಿಕೆ ವಹಿಸಿ

ಜಂತುಹುಳು ನಿವಾರಣಾ ಕಾರ್ಯಕ್ರಮದಲ್ಲಿ ಜಿ.ಪಂ. ಸಿಇಒ ಕಾಂತರಾಜು

​ಪ್ರಜಾವಾಣಿ ವಾರ್ತೆ
Published 10 ಆಗಸ್ಟ್ 2022, 16:16 IST
Last Updated 10 ಆಗಸ್ಟ್ 2022, 16:16 IST
ಹಾಸನದ ಕುವೆಂಪು ನಗರದ ಸರ್ಕಾರಿ ಪ್ರೌಢಶಾಲೆಯಲ್ಲಿ ಬುಧವಾರ ಏರ್ಪಡಿಸಿದ್ದ ರಾಷ್ಟ್ರೀಯ ಜಂತುಹುಳು ನಿವಾರಣಾ ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯಿತಿ ಸಿಇಒ ಕಾಂತರಾಜು ಮಾತನಾಡಿದರು.
ಹಾಸನದ ಕುವೆಂಪು ನಗರದ ಸರ್ಕಾರಿ ಪ್ರೌಢಶಾಲೆಯಲ್ಲಿ ಬುಧವಾರ ಏರ್ಪಡಿಸಿದ್ದ ರಾಷ್ಟ್ರೀಯ ಜಂತುಹುಳು ನಿವಾರಣಾ ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯಿತಿ ಸಿಇಒ ಕಾಂತರಾಜು ಮಾತನಾಡಿದರು.   

ಹಾಸನ: ರೋಗ ಬಂದ ಮೇಲೆ ಚಿಕಿತ್ಸೆ ಪಡೆಯುವುದಕ್ಕಿಂತ, ಅದು ಬರದಂತೆ ತಡೆಯುವ ನಿಟ್ಟಿನಲ್ಲಿ ಆರೋಗ್ಯದ ಬಗ್ಗೆ ಮುನ್ನೆಚ್ಚರಿಕೆ ವಹಿಸುವುದು ಸೂಕ್ತ ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕಾಂತರಾಜು ತಿಳಿಸಿದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಗಳ ಆಶ್ರಯದಲ್ಲಿ ಬುಧವಾರ ಇಲ್ಲಿನ ಕುವೆಂಪು ನಗರದ ಸರ್ಕಾರಿ ಪ್ರೌಢಶಾಲೆಯಲ್ಲಿ ಏರ್ಪಡಿಸಿದ್ದ ರಾಷ್ಟ್ರೀಯ ಜಂತುಹುಳು ನಿವಾರಣಾ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಆರೋಗ್ಯ ಎಂಬುದು ಸಕಲ ಜೀವಿಗಳಿಗೂ ಮುಖ್ಯ ಅಂಶವಾಗಿದೆ, ಶಿಕ್ಷಕರು ಹೆಚ್ಚಿನ ಜವಾಬ್ದಾರಿಯಿಂದ ಮಕ್ಕಳಿಗೆ ಈ ಬಗ್ಗೆ ಅರಿವು ಮೂಡಿಸಬೇಕು ಎಂದರು.

ADVERTISEMENT

1–19 ವರ್ಷದ ಮಕ್ಕಳಲ್ಲಿ ಹೆಚ್ಚಾಗಿ ಜಂತುಹುಳು ಕಾಣಿಸಿಕೊಳ್ಳುತ್ತಿದ್ದು, ಮಕ್ಕಳು ಈ ಕಾರ್ಯಕ್ರಮವನ್ನು ಸದ್ಬಳಕೆ ಮಾಡಿಕೊಳ್ಳಬೇಕು. ಜಂತುಹುಳು ನಿವಾರಣಾ ಮಾತ್ರೆಗಳನ್ನು ಕಡ್ಡಾಯವಾಗಿ ಎಲ್ಲ ಮಕ್ಕಳು ತೆಗೆದುಕೊಳ್ಳಬೇಕು. ಕೋವಿಡ್–19 ಇನ್ನೂ ದೂರವಾಗಿಲ್ಲ. ಪ್ರತಿಯೊಬ್ಬರೂ ಮಾಸ್ಕ್ ಬಳಸಬೇಕು. ಸ್ವಚ್ಛತೆಗೆ ಹೆಚ್ಚು ಆದ್ಯತೆ ನೀಡಬೇಕು ಎಂದರು.

ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ನಿರ್ದೇಶನದಂತೆ ಸ್ವಾತಂತ್ರ್ಯದ ಅಮೃತಮಹೋತ್ಸವದ ಅಂಗವಾಗಿ ಹಮ್ಮಿಕೊಂಡಿರುವ ಹರ್ ಘರ್ ಮೇ ತಿರಂಗಾ ಅಭಿಯಾನದಲ್ಲಿ ಎಲ್ಲರೂ ಸಕ್ರಿಯವಾಗಿ ಪಾಲ್ಗೊಂಡು, ತ್ರಿವರ್ಣ ಧ್ವಜಕ್ಕೆ ಚ್ಯುತಿ ಬರದಂತೆ ಗೌರವ ಸಲ್ಲಿಸಬೇಕು ಎಂದು ತಿಳಿಸಿದರು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಶಿವಸ್ವಾಮಿ ಮಾತನಾಡಿ, ಮಕ್ಕಳು ವಿದ್ಯಾಭ್ಯಾಸದ ಜೊತೆಗೆ ಆರೋಗ್ಯ ಕಡೆಗೂ ಹೆಚ್ಚಿನ ಆದ್ಯತೆ ನೀಡಬೇಕು ಎಂದು ಹೇಳಿದರು.

ತಾಲ್ಲೂಕು ಆರೋಗ್ಯ ಅಧಿಕಾರಿ ಡಾ.ವಿಜಯ್ ಪ್ರಾಸ್ತಾವಿಕವಾಗಿ ಮಾತನಾಡಿ, ಜಂತುಹುಳು ಬಾಧೆಯನ್ನು ನಿವಾರಿಸುವ ಬಗ್ಗೆ ಹಾಗೂ ಕೈತೊಳೆಯುವ ವಿಧಾನಗಳ ಕುರಿತು ಮಾಹಿತಿಯನ್ನು ವಿದ್ಯಾರ್ಥಿಗಳಿಗೆ ತಿಳಿಸಿಕೊಟ್ಟರು.

ಇದೇ ವೇಳೆ ಮಕ್ಕಳಿಗೆ ಜಂತುಹುಳು ನಿವಾರಣಾ ಮಾತ್ರೆಗಳನ್ನು ವಿತರಿಸಲಾಯಿತು. ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಪ್ರಕಾಶ್ ಕೆ.ಎಸ್, ಜಿಲ್ಲಾ ಆರ್‌ಸಿಎಚ್ ಅಧಿಕಾರಿ ಡಾ.ಚೇತನ್ ಎಚ್.ಸಿ,, ಕ್ಷೇತ್ರ ಶಿಕ್ಷಣಾಧಿಕಾರಿ ಬಲರಾಮೇಗೌಡ, ಸರ್ಕಾರಿ ಪ್ರೌಢಶಾಲೆಯ ಮುಖ್ಯ ಶಿಕ್ಷಕಿ ರಾಧಾ ಎನ್.ಎಸ್., ಮುಖ್ಯ ಶಿಕ್ಷಕಿ ಟಿ.ಎಂ ಶಾಂತಮ್ಮ, ನಗರಸಭೆ ಸದಸ್ಯ ದಯಾನಂದ ಹಾಜರಿದ್ದರು.

‘ಗ್ರಂಥಾಲಯಗಳ ಡಿಜಿಟಲೀಕರಣ’

ಪ್ರತಿ ಗ್ರಂಥಾಲಯಗಳಿಗೆ ಮೂಲಸೌಕರ್ಯ ಕಲ್ಪಿಸಲು ಮತ್ತು ಅವುಗಳ ಡಿಜಿಟಲೀಕರಣಕ್ಕೆ ₹2 ಲಕ್ಷದಿಂದ ₹3 ಲಕ್ಷ ಅನುದಾನವನ್ನು ನೀಡಲು ಸೂಚನೆ ನೀಡಲಾಗಿದ್ದು, ಮುಂದಿನ ದಿನಗಳಲ್ಲಿ ಎಲ್ಲ ಗ್ರಂಥಾಲಯಗಳ ಬೆಳವಣಿಗೆಗೆ ಶ್ರಮಿಸಲಾಗುವುದು ಎಂದು ಕಾಂತರಾಜು ಭರವಸೆ ನೀಡಿದರು.

ಗ್ರಾಮೀಣ ಭಾಗದ ಜನರಲ್ಲಿ ಅಕ್ಷರ ಜ್ಞಾನ ಹೆಚ್ಚಿಸುವ ಸಲುವಾಗಿ ಹಾಗೂ ಗ್ರಂಥಾಲಯಗಳ ಉನ್ನತೀಕರಣಕ್ಕೆ ಪೂರಕವಾಗುವಂತೆ ಜಿಲ್ಲೆಯಾದ್ಯಂತ ಆ.11 ರಂದು ‘ಗ್ರಂಥ ಸಂಸ್ಕೃತಿ ಏಳಿಗೆ– ನಮ್ಮ ಪುಸ್ತಕ ದೇಣಿಗೆ’ ನೂತನ ಅಭಿಯಾನವನ್ನು ಆಯೋಜಿಸಿದ್ದು, ವಿದ್ಯಾರ್ಥಿಗಳು ಮತ್ತು ಸಾರ್ವಜನಿಕರು ತಾವು ಓದಿ ಮುಗಿಸಿದ ಮತ್ತು ತಮ್ಮ ಬಳಿ ಇರುವ ಹಳೆಯ ಪುಸ್ತಕಗಳನ್ನೂ ಗ್ರಂಥಾಲಯಕ್ಕೆ ನೀಡುವ ಮೂಲಕ ಗ್ರಾಮೀಣ ಭಾಗದ ಮಕ್ಕಳ ವಿದ್ಯಾಭ್ಯಾಸಕ್ಕೆ ಸಹಕಾರ ನೀಡಬೇಕು ಎಂದು ತಿಳಿಸಿದರು.

Lok Sabha Elections Results 2024 |ನರೇಂದ್ರ ಮೋದಿ ಅವರ 'ವಿಕಸಿತ ಭಾರತ' ಅಥವಾ ರಾಹುಲ್ ಗಾಂಧಿ ಅವರ ಇಂಡಿಯಾ ಐಕ್ಯ ಭಾರತ? ಜಗತ್ತಿನ ಅತಿದೊಡ್ಡ ಪ್ರಜಾಪ್ರಭುತ್ವದ 18ನೇ ಲೋಕಸಭೆಗೆ ನಡೆದ ಚುನಾವಣೆ ಫಲಿತಾಂಶದ ಕ್ಷಣ ಕ್ಷಣದ ಮಾಹಿತಿ, ವಿಶ್ವಾಸಾರ್ಹ ವಿಶ್ಲೇಷಣೆ, ಅಂಕಿ ಅಂಶಗಳಿಗಾಗಿ ಪ್ರಜಾವಾಣಿ ನೋಡಿ. ಇದರ ಜೊತಗೆ, ಆಂಧ್ರಪ್ರದೇಶ ಮತ್ತು ಒಡಿಶಾ ವಿಧಾನಸಭೆ ಚುನಾವಣೆಯ ಫಲಿತಾಂಶವೂ ಇಲ್ಲೇ ಲಭ್ಯ. ಪ್ರಜಾವಾಣಿಯನ್ನು ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಫಾಲೋ ಮಾಡಲು ಮರೆಯದಿರಿ.