ಹಾಸನ: ‘ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಅಧಿಕಾರಿಗಳು ಜಿಲ್ಲೆಯಲ್ಲಿ ಪಡಿತರ ವಿತರಕರಿಂದ ಲಂಚ ಪಡೆಯುತ್ತಿದ್ದಾರೆ ಎಂಬ ಆರೋಪಗಳು ಸತ್ಯಕ್ಕೆ ದೂರವಾಗಿವೆ’ ಎಂದು ಸರ್ಕಾರಿ ನ್ಯಾಯಬೆಲೆ ಅಂಗಡಿ ಮಾಲೀಕರ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಚನ್ನಕೇಶವ ಸ್ಪಷ್ಟಪಡಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಇತ್ತೀಚೆಗೆ ಪಡಿತರ ವಿತರಕರ ಕ್ಷೇಮಾಭಿವೃದ್ಧಿ ಸಂಘದ ರಾಜ್ಯ ಘಟಕದ ಅಧ್ಯಕ್ಷರೆಂದು ಹೇಳಿಕೊಂಡು ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ಆಹಾರ ಇಲಾಖೆ ಅಧಿಕಾರಿಗಳ ವಿರುದ್ಧ ಮಾಡಿರುವ ಆರೋಪಗಳಲ್ಲಿ ಯಾವುದೇ ಸತ್ಯಾಂಶವಿಲ್ಲ’ ಎಂದರು.
‘ಜಿಲ್ಲೆಯಲ್ಲಿ ಒಟ್ಟು 860 ಸರ್ಕಾರಿ ನ್ಯಾಯಬೆಲೆ ಅಂಗಡಿಗಳಿದ್ದು, ಇದುವರೆಗೆ ಯಾವುದೇ ಅಂಗಡಿ ಮಾಲೀಕರೂ ಆಹಾರ ಇಲಾಖೆ ಅಧಿಕಾರಿಗಳು ಲಂಚ ಪಡೆದಿದ್ದಾರೆ ಎಂದು ದೂರು ನೀಡಿಲ್ಲ. ಆದರೆ ಜಿಲ್ಲೆಯವರೇ ಅಲ್ಲದ ವ್ಯಕ್ತಿಯೊಬ್ಬರು ಇಂತಹ ಆರೋಪ ಮಾಡಿರುವುದು ಸರಿಯಲ್ಲ’ ಎಂದು ಅಸಮಾಧಾನ ವ್ಯಕ್ತಪಡಿಸಿದರು.
‘ನ್ಯಾಯಬೆಲೆ ಅಂಗಡಿಗಳಲ್ಲಿ ಅಳತೆ ಅಥವಾ ತೂಕದಲ್ಲಿ ವ್ಯತ್ಯಾಸ ಕಂಡುಬಂದರೆ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಬೇಕು. ತಪ್ಪು ಮಾಡಿದವರಿಗೆ ಶಿಕ್ಷೆಯಾಗಬೇಕು. ಈ ವಿಷಯದಲ್ಲಿ ನಮ್ಮ ಸಂಘವು ಯಾರನ್ನೂ ರಕ್ಷಿಸುವ ಪ್ರಶ್ನೆಯೇ ಇಲ್ಲ. ಆದರೆ ಯಾವುದೇ ಆಧಾರವಿಲ್ಲದೆ ಅಧಿಕಾರಿಗಳ ವಿರುದ್ಧ ಲಂಚ ಆರೋಪ ಹೊರಿಸುವುದು ಖಂಡನೀಯ’ ಎಂದು ಚನ್ನಕೇಶವ ಹೇಳಿದರು.
ಪಡಿತರ ವಿತರಕರ ಸಂಘದ ನಾಗರಾಜ್, ಮಂಜೇಗೌಡ, ರವಿ, ಸಿದ್ದೇಶ್ ಕೆಲವತ್ತಿ, ಜೈಕುಮಾರ್ ಉಡುವಾರೆ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.