ADVERTISEMENT

ದಲಿತ ಸಮುದಾಯ ಒಡೆಯಲು ಹುನ್ನಾರ: ಕೆ.ಎಂ.ಶಿವಲಿಂಗೇಗೌಡ ಆರೋಪ

​ಪ್ರಜಾವಾಣಿ ವಾರ್ತೆ
Published 15 ಏಪ್ರಿಲ್ 2022, 4:51 IST
Last Updated 15 ಏಪ್ರಿಲ್ 2022, 4:51 IST
ಅರಸೀಕೆರೆ ನಗರದಲ್ಲಿ ನಡೆದ ಮೆರವಣಿಗೆಯಲ್ಲಿ ವಿವಿಧ ದಲಿತ ಸಂಘಟನೆಗಳ ಕಾರ್ಯಕರ್ತರು ಭಾಗವಹಿಸಿದ್ದರು
ಅರಸೀಕೆರೆ ನಗರದಲ್ಲಿ ನಡೆದ ಮೆರವಣಿಗೆಯಲ್ಲಿ ವಿವಿಧ ದಲಿತ ಸಂಘಟನೆಗಳ ಕಾರ್ಯಕರ್ತರು ಭಾಗವಹಿಸಿದ್ದರು   

ಅರಸೀಕೆರೆ: ‘ತಾಲ್ಲೂಕಿನಲ್ಲಿ ಕೆಲವರು ತಮ್ಮ ಸ್ವಾರ್ಥಕ್ಕಾಗಿ ದಲಿತ ಸಮುದಾಯವನ್ನು ಇಬ್ಭಾಗ ಮಾಡಲು ಹುನ್ನಾರ ನಡೆಸುತ್ತಿದ್ದಾರೆ’ ಎಂದು ಶಾಸಕ ಕೆ. ಎಂ. ಶಿವಲಿಂಗೇಗೌಡ ತಿಳಿಸಿದರು.

ನಗರದಲ್ಲಿ ತಾಲ್ಲೂಕಿನ ವಿವಿಧ ದಲಿತ ಪರ ಸಂಘಟನೆಗಳ ಒಕ್ಕೂಟದಿಂದ ಆಯೋಜಿಸಿದ್ದ ಸಂವಿಧಾನ ಶಿಲ್ಪಿ ಡಾ.ಬಿ.ಆರ್. ಅಂಬೇಡ್ಕರ್ ಹಾಗೂ ಬಾಬು ಜಗಜೀವನರಾಂ ಜಯಂತ್ಯುತ್ಸವದಲ್ಲಿ ಮಾತನಾಡಿದರು.

‘ಡಾ.ಬಿ.ಆರ್. ಅಂಬೇಡ್ಕರ್ ನೀಡಿದ ಸಂವಿಧಾನವನ್ನು ಬದಲಾವಣೆ ಮಾಡಲೆಂದೇ ಬಿಜೆಪಿ ಅಧಿಕಾರಕ್ಕೆ ಬಂದಿದೆ ಎಂದು ಅನಂತಕುಮಾರ್ ಹೆಗಡೆ ಹೇಳಿದ್ದರು. ಸಂವಿಧಾನವನ್ನು ಟೀಕೆ ಮಾಡುವ ಅಧಿಕಾರ ಯಾರಿಗೂ ಇಲ್ಲ’ ಎಂದರು.

ADVERTISEMENT

‘ದೇಶದಲ್ಲಿ ಪರಿಶಿಷ್ಟರು ಸಂಪೂರ್ಣವಾಗಿ ವಿದ್ಯಾವಂತರಾಗಿಲ್ಲ. ಆರ್ಥಿಕ, ಸಾಮಾಜಿಕ ಮತ್ತು ರಾಜಕೀಯವಾಗಿ ಮುನ್ನೆಲೆಗೆ ಬಂದಿಲ್ಲ. ಹೀಗಾಗಿ, ಮೀಸಲಾತಿ ಸೌಲಭ್ಯ ಮುಂದುವರಿಯಬೇಕು. ಈಗಿರುವ ಸಂವಿಧಾನ ಶಾಶ್ವತವಾಗಿ ಉಳಿಯಬೇಕು’ ಎಂದು ಒತ್ತಾಯಿಸಿದರು.

‘ಬಿಜೆಪಿ ಸರ್ಕಾರ ದಲಿತರಿಗೆ ಅನ್ಯಾಯ ಮಾಡುತ್ತಿದೆ. ಪರಿಶಿಷ್ಟರ ಆರ್ಥಿಕ ಸಬಲೀಕರಣಕ್ಕೆ ಸರ್ಕಾರ ವಿಶೇಷ ಆರ್ಥಿಕ ಯೋಜನೆಗಳನ್ನು ಜಾರಿಗೆ ತರಬೇಕು. ನಿಗಮಗಳಿಗೆ ಹೆಚ್ಚಿನ ಅನುದಾನ ನೀಡಬೇಕು’ ಎಂದು ಆಗ್ರಹಿಸಿದರು.

ದಲಿತ ಮುಖಂಡ ಹರಪನಹಳ್ಳಿ ಜಯಣ್ಣ ಮಾತನಾಡಿ, ‘ತಾಲ್ಲೂಕು ಆಡಳಿತ ಯಾರದೋ ರಾಜಕೀಯ ಒತ್ತಡಕ್ಕೆ ಮಣಿದು, ದಲಿತ ಪರ ಸಂಘಟನೆಗಳು ಹಮ್ಮಿಕೊಂಡಿದ್ದ ಅಂಬೇಡ್ಕರ್ ಜಯಂತಿಯನ್ನು ದಿಢೀರ್ ರದ್ದುಪಡಿಸಿದೆ. ಇದು ತಾಲ್ಲೂಕಿನ ದಲಿತರಿಗೆ ಮಾಡಿದ ಅನ್ಯಾಯ’ ಎಂದು ಆಕ್ರೋಶ ವ್ಯಕ್ತಪಡಿಸಿದರು.

ನಗರದ ಪ್ರವಾಸಿ ಮಂದಿರದಿಂದ ಹೊರಟ ಮೆರವಣಿಗೆ ಬಿ.ಎಚ್. ರಸ್ತೆ ಮೂಲಕ ಸಾಗಿ ಕೆ.ಪಿ.ಎಸ್ ಪಿಯು ಕಾಲೇಜು ಬಳಿ ಮೈದಾನ ತಲುಪಿತು.

ತಾಲ್ಲೂಕಿನ ವಿವಿಧ ದಲಿತ ಪರ ಸಂಘಟನೆಗಳ ಮುಖಂಡರು, ಮಾದಿಗ, ಛಲವಾದಿ, ಲಂಬಾಣಿ, ಭೋವಿ, ಕೊರಚ, ಸುಡುಗಾಡು ಸಿದ್ಧರು, ವಾಲ್ಮೀಕಿ ಸಮುದಾಯದ ಮುಖಂಡರು ಭಾಗವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.