ADVERTISEMENT

ಬರ ಸ್ಥಿತಿ: ಗ್ರಾಮಲೆಕ್ಕಿಗರು ಅನುಮತಿ ಇಲ್ಲದೆ ಕೇಂದ್ರ ಸ್ಥಾನ ಬಿಡುವಂತಿಲ್ಲ– ಡಿಸಿ

'ನಿಯಮ ಉಲ್ಲಂಘಿಸಿದರೆ ಶಿಸ್ತು ಕ್ರಮ'

​ಪ್ರಜಾವಾಣಿ ವಾರ್ತೆ
Published 11 ಮೇ 2019, 12:08 IST
Last Updated 11 ಮೇ 2019, 12:08 IST

ಹಾಸನ: ಗ್ರಾಮಲೆಕ್ಕಿಗರು ಕಡ್ಡಾಯವಾಗಿ ಕೇಂದ್ರ ಸ್ಥಾನದಲ್ಲಿ ವಾಸವಿದ್ದು, ಸಾರ್ವಜನಿಕರು ಮತ್ತು ಸರ್ಕಾರಿ ಕೆಲಸ ಕಾರ್ಯಗಳನ್ನು ನಿಗದಿತ ಅವಧಿಯೊಳಗೆ ನಿರ್ವಹಿಸಬೇಕು ಎಂದು ಜಿಲ್ಲಾಧಿಕಾರಿ ಪ್ರಿಯಾಂಕ ಸೂಚನೆ ನೀಡಿದ್ದಾರೆ.

ಈಗಾಗಲೇ ನಿರ್ದೇಶನ ನೀಡಿದ್ದರೂ ಕೇಂದ್ರ ಸ್ಥಾನದಲ್ಲಿ ವಾಸವಿಲ್ಲದೆ ಇರುವುದು ಕಂಡು ಬಂದಿದೆ. ಹಾಲಿ ಬರ ಪರಿಸ್ಥಿತಿ ಹಿನ್ನಲೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಇದ್ದು, ಸಾರ್ವಜನಿಕರು ತಮ್ಮ ಸಮಸ್ಯೆಗಳನ್ನು ಜಿಲ್ಲಾಧಿಕಾರಿ ಕಚೇರಿಗೆ ತರುತ್ತಿದ್ದಾರೆ. ಸರ್ಕಾರಿ ರಜೆ ದಿನಗಳಲ್ಲಿಯೂ ಗ್ರಾಮಲೆಕ್ಕಿಗರು ಹಾಗೂ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಕಡ್ಡಾಯವಾಗಿ ಕೇಂದ್ರ ಸ್ಥಾನದಲ್ಲಿ ಇರಬೇಕು ಎಂದು ಹೇಳಿದ್ದಾರೆ.

ತಮ್ಮ ವ್ಯಾಪ್ತಿಯ ಗ್ರಾಮಗಳಲ್ಲಿ ಬರಪರಿಸ್ಥಿತಿಯ ಎಲ್ಲಾ ರೀತಿಯ ಸಮಸ್ಯೆಗಳ ಬಗ್ಗೆ ಪರಿಶೀಲಿಸಿ ಅಗತ್ಯ ಕ್ರಮವಹಿಸಿ ಸಂಬಂಧಿಸಿದ ತಹಶೀಲ್ದಾರ್ ಹಾಗೂ ಕಾರ್ಯನಿರ್ವಹಣಾಧಿಕಾರಿಗಳಿಗೆ ವರದಿ ಸಲ್ಲಿಸಬೇಕು ಎಂದು ತಿಳಿಸಿದ್ದಾರೆ.

ಅಧಿಕಾರಿಗಳು ಕೇಂದ್ರ ಸ್ಥಾನದಲ್ಲಿ ವಾಸವಿಲ್ಲದೆ ಇರುವುದು ಕಂಡು ಬಂದಲ್ಲಿ ಯಾವುದೇ ಮುನ್ಸೂಚನೆ ನೀಡದೇ ಸಂಬಂಧಪಟ್ಟವರ ವಿರುದ್ಧ ಕರ್ನಾಟಕ ನಾಗರೀಕ ಸೇವಾ ನಿಯಮಾವಳಿಗಳು 1957ರ ಪ್ರಕಾರ ಶಿಸ್ತು ಕ್ರಮ ಜರುಗಿಸಲಾಗುವುದು ಎಂದು ಎಚ್ಚರಿಸಿದ್ದಾರೆ.

ADVERTISEMENT

ತಾಲ್ಲೂಕು ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು, ನಗರ ಸ್ಥಳೀಯ ಸಂಸ್ಥೆಗಳ ಅಧಿಕಾರಿಗಳು ಸರ್ಕಾರಿ ರಜೆ ದಿನಗಳಲ್ಲಿಯೂ ಸಹ ಕೇಂದ್ರ ಸ್ಥಾನದಲ್ಲಿ ಹಾಜರಿರಬೇಕು. ತುರ್ತು ಪರಿಸ್ಥಿತಿಗಳಲ್ಲಿ ಕಡ್ಡಾಯವಾಗಿ ಅನುಮತಿ ಪಡೆದು ಕೇಂದ್ರ ಸ್ಥಾನ ಬಿಡಲು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.