ADVERTISEMENT

ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ 17ಕ್ಕೆ ಆಶಾ ಕಾರ್ಯಕರ್ತೆಯರ ಪ್ರತಿಭಟನೆ

ವಿವಿಧ ಬೇಡಿಕೆ ‌ಈಡೇರಿಕೆಗೆ ಒತ್ತಾಯ

​ಪ್ರಜಾವಾಣಿ ವಾರ್ತೆ
Published 9 ಮೇ 2022, 15:54 IST
Last Updated 9 ಮೇ 2022, 15:54 IST
ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘದ ಕಾರ್ಯದರ್ಶಿ ನಾಗಲಕ್ಷ್ಮೀ ಅವರು ಪ್ರತಿಭಟನೆಯ ಭಿತ್ತಿಪತ್ರ ಬಿಡುಗಡೆ ಮಾಡಿದರು. ಹನುಮೇಶ್‌, ಗೌರಮ್ಮ, ಲಕ್ಷ್ಮೀ ಇದ್ದಾರೆ
ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘದ ಕಾರ್ಯದರ್ಶಿ ನಾಗಲಕ್ಷ್ಮೀ ಅವರು ಪ್ರತಿಭಟನೆಯ ಭಿತ್ತಿಪತ್ರ ಬಿಡುಗಡೆ ಮಾಡಿದರು. ಹನುಮೇಶ್‌, ಗೌರಮ್ಮ, ಲಕ್ಷ್ಮೀ ಇದ್ದಾರೆ   

ಹಾಸನ: ‘ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಮೇ 17ರಂದು ಬೆಂಗಳೂರಿನ ಫ್ರೀಡಂ ಪಾರ್ಕ್‌ ನಲ್ಲಿ ಪ್ರತಿಭಟನೆ ಹಮ್ಮಿಕೊಂಡಿದೆ’ ಎಂದು ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘದ ಕಾರ್ಯದರ್ಶಿ ಡಿ.ನಾಗಲಕ್ಷ್ಮೀ ಹೇಳಿದರು.

‘ಆಶಾ ಕಾರ್ಯಕರ್ತೆಯರನ್ನು ಸರ್ಕಾರಿ ನೌಕರರೆಂದು ಪರಿಗಣಿಸಿ, ಸಮಾನ ವೇತನ, ಮುಂಬಡ್ತಿ, ರಜೆ, ನಿವೃತ್ತಿ ಸೌಲಭ್ಯ ಕಲ್ಪಿಸಬೇಕು. ಹದಿನೈದು ವರ್ಷಗಳಿಂದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಸೇವೆ ಸಲ್ಲಿಸುತ್ತಿರುವ ಕಾರ್ಯಕರ್ತೆಯರು ತಾಯಿ ಮತ್ತು ಆರೋಗ್ಯ ಸೇವೆ ಸೇರಿದಂತೆ ಯೋಜನೆಗಳ ಅನುಷ್ಠಾನದಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳುತ್ತಿದ್ದಾರೆ. ಸರ್ಕಾರ ಅಗತ್ಯ ಸೌಲಭ್ಯ ಹಾಗೂ ಗೌರವಧನ ನೀಡುವಲ್ಲಿ ತಾರತಮ್ಯ ಎಸಗುತ್ತಿದೆ’ ಎಂದು ಸೋಮವಾರ ಇಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಆರೋಪಿಸಿದರು.

‘ನಿತ್ಯದ ಚಟುವಟಿಕೆ ನಮೂದಿಸಲು ಆಶಾ ಡೈರಿ ಯನ್ನು ಪ್ರತಿ ವರ್ಷ ನೀಡಬೇಕು. ಸ್ವಯಂ ನಿವೃತ್ತಿ ಪಡೆಯುವ ಕಾರ್ಯಕರ್ತೆಯರಿಗೆ ಜೀವನ ಯೋಗ್ಯ ನಿವೃತ್ತಿ ವೇತನ ನಿಗದಿ ಮಾಡಬೇಕು. ಈಗಿರುವ ₹ 20 ಸಾವಿರ ಇಡುಗಂಟನ್ನು ₹ 2 ಲಕ್ಷಕ್ಕೆ ಹೆಚ್ಚಿಸಬೇಕು. ಇಲಾಖೆ ವಹಿಸಿದ ವಿವಿಧ ಕೆಲಸಗಳನ್ನು ಮಾಡುತ್ತಿದ್ದರೂ ಸಮಾನ ವೇತನ ನೀಡುತ್ತಿಲ್ಲ. ಆರ್‌ಸಿಎಚ್‌ ಪೋರ್ಟಲ್ ಮೂಲಕ ನೀಡುವ ಪ್ರೋತ್ಸಾಹ ಧನ ಕೇಂದ್ರ ಸರ್ಕಾರದಿಂದ ಸಮರ್ಪವಾಗಿ ದೊರೆಯದ ಕಾರಣ ಕಾರ್ಯಕರ್ತೆಯರಿಗೆ ಅನ್ಯಾಯವಾಗಿದೆ’ ಎಂದು ಬೇಸರ ವ್ಯಕ್ತಪಡಿಸಿದರು.

ADVERTISEMENT

‘ರಾಜ್ಯ ಸರ್ಕಾರ ಬಜೆಟ್‌ ನಲ್ಲಿ ಗೌರವಧನವನ್ನು ₹ 4,000 ದಿಂದ ₹ 5,000ಕ್ಕೆ ಹೆಚ್ಚಿಸಿದೆ. ಆದರೆ, ಎರಡು ತಿಂಗಳಿನಿಂದ ವೇತನ ಬಿಡುಗಡೆ ಆಗಿಲ್ಲ. ಇದರಿಂದ ಕುಟುಂಬ ನಿರ್ವಹಣೆ ಮಾಡಲು ತೊಂದರೆ ಆಗಿದೆ.ಈ ಬಗ್ಗೆ ಆರೋಗ್ಯ ಸಚಿವರೊಂದಿಗೆ ಎರಡು, ಮೂರು ಬಾರಿ ಸಮಾಲೋಚನೆ ನಡೆಸಿದರು ಸಹ ಪ್ರಯೋಜನವಾಗಿಲ್ಲ. ಆದ್ದರಿಂದ ಬೆಂಗಳೂರಿನಲ್ಲಿ ಪ್ರತಿಭಟನೆ ಆಯೋಜಿಸಲಾಗಿದೆ’ ಎಂದರು.

ಇದೇ ವೇಳೆ ಪ್ರತಿಭಟನೆ ಭಿತ್ತಿಪತ್ರ ವನ್ನು ಬಿಡುಗಡೆ ಮಾಡಲಾಯಿತು.

ಗೋಷ್ಠಿಯಲ್ಲಿ ಸಂಘದ ಪದಾಧಿಕಾರಿಗಳಾದ ಹನುಮೇಶ್, ಗೌರಮ್ಮ, ಲಕ್ಷ್ಮೀ, ಪುಷ್ಪಲತಾ, ಚೈತ್ರಾ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.