ADVERTISEMENT

ಕಾಡಾನೆ ಹಾವಳಿ ತಪ್ಪಿಸಿ, ಪರಿಹಾರ ನೀಡಿ

ಜಿಲ್ಲಾಧಿಕಾರಿ ಕಚೇರಿ ಎದುರು ರೈತ ಸಂಘ, ಹಸಿರು ಸೇನೆ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 25 ಜನವರಿ 2021, 13:27 IST
Last Updated 25 ಜನವರಿ 2021, 13:27 IST
ಹಾಸನ ಜಿಲ್ಲಾಧಿಕಾರಿ ಕಚೇರಿ ಎದುರು ರೈತ ಸಂಘ ಹಾಗೂ ಹಸಿರು ಸೇನೆ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು.
ಹಾಸನ ಜಿಲ್ಲಾಧಿಕಾರಿ ಕಚೇರಿ ಎದುರು ರೈತ ಸಂಘ ಹಾಗೂ ಹಸಿರು ಸೇನೆ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು.   

ಹಾಸನ: ಮಲೆನಾಡು ಭಾಗದಲ್ಲಿ ಕಾಡಾನೆ ಹಾವಳಿ ತಪ್ಪಿಸಬೇಕು ಹಾಗೂ ಆನೆ ತುಳಿತಕ್ಕೆ ತುತ್ತಾದವರಿಗೆಪರಿಹಾರ ನೀಡುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ನೇತೃತ್ವದಲ್ಲಿರೈತರು ಜಿಲ್ಲಾಧಿಕಾರಿ ಕಚೇರಿ ಎದುರು ಸೋಮವಾರ ಪ್ರತಿಭಟನೆ ನಡೆಸಿದರು.

ನಗರದ ಹೇಮಾವತಿ ಪ್ರತಿಮೆಯಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಅರೆಬೆತ್ತೆಲೆ ಮೆರವಣಿಗೆ ನಡೆಸಿದ ರೈತರು,ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು.

ಸಕಲೇಶಪುರ, ಆಲೂರು, ಅರಕಲಗೂಡು ಭಾಗದಲ್ಲಿ ಆನೆಗಳ ಉಪಟಳ ಹೆಚ್ಚಾಗಿದ್ದು, ಬೆಳೆ ಹಾನಿ ಮಾಡುತ್ತಿವೆ.ಹಗಲಿನಲ್ಲಿಯೂ ಜಮೀನುಗಳ ಬಳಿ ಹೋಗಲು ರೈತರು ಭಯ ಪಡುವಂತಹ ಸ್ಥಿತಿ ನಿರ್ಮಾಣವಾಗಿದೆ. ವರ್ಷದಲ್ಲಿಕಾಡಾನೆ ದಾಳಿಯಿಂದ 60 ರೈತರು ಪ್ರಾಣ ಕಳೆದಕೊಂಡಿದ್ದಾರೆ. ಕೆಲವರು ಭೂಮಿಯಲ್ಲಿ ಬೆಳೆ ಬೆಳೆಯುವುದನ್ನೇಕೈ ಬಿಟ್ಟಿದ್ದಾರೆ ಎಂದು ಅಳಲು ತೋಡಿಕೊಂಡರು.

ADVERTISEMENT

ಕಾಡು ಪ್ರಾಣಿಗಳ ಹಾವಳಿಯನ್ನು ಶಾಶ್ವತವಾಗಿ ತಡೆಯಲು ಕ್ರಮ ಕೈಗೊಳ್ಳಬೇಕು. ಪ್ರಾಣ ಹಾನಿಗೆಕಾರಣವಾಗಿರುವ ಆನೆಗಳನ್ನು ಸೆರೆ ಹಿಡಿಯಬೇಕು. ಮಲೆನಾಡು ಭಾಗದಲ್ಲಿ ಆನೆ ಕಾರಿಡಾರ್ ನಿರ್ಮಿಸುವಮೂಲಕ ಶಾಶ್ವತ ಪರಿಹಾರ ಒದಗಿಸಬೇಕು ಎಂದು ಆಗ್ರಹಿಸಿದರು.

ಆನೆ ಹಾವಳಿಯಿಂದ ಪ್ರಾಣ ಕಳೆದುಕೊಂಡ ರೈತರ ಕುಟುಂಬಗಳಿಗೆ ಇದುವರೆಗೂ ಪರಿಹಾರ ಒದಗಿಸಿಲ್ಲ. ಬೆಳೆಹಾನಿ ಸಂಬಂಧ ಅರಣ್ಯ ಇಲಾಖೆ ಕೋಟ್ಯಂತರ ರೂಪಾಯಿ ಪರಿಹಾರ ಬಾಕಿ ಇದೆ. ಅಗತ್ಯ ದಾಖಲೆಗಳೊಂದಿಗೆ ಪರಿಹಾರಕ್ಕೆ ಅರ್ಜಿ ಸಲ್ಲಿಸಿದರೂ ಇದುವರೆಗೆ ಪರಿಹಾರ ವಿತರಣೆ ಮಾಡಿಲ್ಲ. ಆದ್ದರಿಂದ ಸರ್ಕಾರ ಕೂಡಲೇ ಕ್ರಮವಹಿಸುವಂತೆ ಅರಣ್ಯ ಇಲಾಖೆಗೆ ನಿರ್ದೇಶನ ನೀಡಬೇಕು ಎಂದು ಒತ್ತಾಯಿಸಿದರು.

ಕಾಡಾನೆಗಳು ನಾಡಿಗೆ ಬರಲು ಅರಣ್ಯ ಇಲಾಖೆಯೇ ಕಾರಣ. ರಿಯಲ್‌ ಎಸ್ಟೇಟ್ ಉದ್ಯಮಿಗಳು‌, ಕೈಗಾರಿಕೋದ್ಯಮಿಗಳು ಹಾಗೂ ಪ್ರಭಾವಿಗಳು ಅರಣ್ಯ ಒತ್ತುವರಿ ಮಾಡಿಕೊಂಡಿದ್ದರೂ ಅರಣ್ಯ ಇಲಾಖೆ ಕಣ್ಮುಚ್ಚಿ ಕುಳಿತಿದೆ. ಇದರಿಂದ ಜನರು ಹಾಗೂ ಜಾನುವಾರುಗಳಿಗೆ ತೊಂದರೆ ಆಗುತ್ತಿದೆ ಎಂದು ಆಕ್ರೋಶ ವ್ಯಕ್ತಡಿಸಿದರು.

ಮನವಿ ಸ್ವೀಕರಿಸಿ ಮಾತನಾಡಿ ಜಿಲ್ಲಾಧಿಕಾರಿ ಆರ್‌.ಗಿರೀಶ್, ಕಾಡಾನೆ ಹಾವಳಿ ತಡೆಗೆ ಶಾಶ್ವತ ಪರಿಹಾರ ಕಲ್ಪಿಸುವ ಸಂಬಂಧ ಅರಣ್ಯ ಸಚಿವ ಮತ್ತು ಉಸ್ತುವಾರಿ ಸಚಿವರ ಜತೆ ಚರ್ಚಿಸಲಾಗುವುದು. ಹದಿನೈದು ದಿನ ಕಾಲಾವಕಾಶ ನೀಡಬೇಕು ಎಂದು ಭರವಸೆ ನೀಡಿದರು.

ಪ್ರತಿಭಟನೆಯಲ್ಲಿ ರೈತ ಸಂಘ, ಹಸಿರು ಸೇನೆ ಉಪಾಧ್ಯಕ್ಷ ಆನೆಕರೆ ರವಿ, ಮುಖಂಡರಾದ ಎಸ್.ಸಿ.ತಿಮ್ಮಣ್ಣ, ಮೀಸೆ ಮಂಜಣ್ಣ, ಸುದರ್ಶನ್‌, ದಾಸೇಗೌಡ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.