ADVERTISEMENT

ಗಣಿಗಾರಿಕೆ ನಿಷೇಧಿಸಿ, ಆನೆ ಹಾವಳಿ ನಿಯಂತ್ರಿಸಿ: ಶಾಸಕ ಎಚ್.ಕೆ. ಸುರೇಶ್ ಮನವಿ

​ಪ್ರಜಾವಾಣಿ ವಾರ್ತೆ
Published 23 ಜುಲೈ 2024, 16:20 IST
Last Updated 23 ಜುಲೈ 2024, 16:20 IST
ಆಲೂರು ರಾಧಮ್ಮ ಜನಸ್ಪಂದನ ವೇದಿಕೆ ಅಧ್ಯಕ್ಷ ಹೇಮಂತಕುಮಾರ್ ಅವರು ಬೆಂಗಳೂರಿನ ವಿಧಾನಸೌಧ ಆವರಣದಲ್ಲಿ ಶಾಸಕ ಎಚ್.ಕೆ. ಸುರೇಶ್ ಅವರಿಗೆ ಮನವಿ ಸಲ್ಲಿಸಿದರು
ಆಲೂರು ರಾಧಮ್ಮ ಜನಸ್ಪಂದನ ವೇದಿಕೆ ಅಧ್ಯಕ್ಷ ಹೇಮಂತಕುಮಾರ್ ಅವರು ಬೆಂಗಳೂರಿನ ವಿಧಾನಸೌಧ ಆವರಣದಲ್ಲಿ ಶಾಸಕ ಎಚ್.ಕೆ. ಸುರೇಶ್ ಅವರಿಗೆ ಮನವಿ ಸಲ್ಲಿಸಿದರು   

ಆಲೂರು: ‘ಅಸ್ಸಾಂನಲ್ಲಿ ಕಾಡಾನೆ ಇರುವ ಪ್ರದೇಶಗಳಲ್ಲಿ ಕಲ್ಲು ಗಣಿಗಾರಿಕೆ ನಿಷೇಧಿಸಲಾಗಿದ್ದು, ಅದೇ ಮಾದರಿಯಲ್ಲಿ ಹಾಸನ ಜಿಲ್ಲೆಯ ಬೇಲೂರು, ಸಕಲೇಶಪುರ, ಆಲೂರು ಮತ್ತು ಅರಕಲಗೂಡು ತಾಲ್ಲೂಕುಗಳಲ್ಲಿ ಕಲ್ಲು ಗಣಿಗಾರಿಕೆ ನಿಷೇಧಿಸಲು ವಿಧಾನ ಸಭೆಯಲ್ಲಿ ಸರ್ಕಾರದ ಗಮನ ಸೆಳೆಯಬೇಕು’ ಎಂದು ಇಲ್ಲಿನ ರಾಧಮ್ಮ ಜನಸ್ಪಂದನ ವೇದಿಕೆ ಅಧ್ಯಕ್ಷ ಹೇಮಂತಕುಮಾರ್ ಅವರು ಬೇಲೂರು ಶಾಸಕ ಎಚ್.ಕೆ. ಸುರೇಶ್ ಅವರಿಗೆ ಮನವಿ ಸಲ್ಲಿಸಿದ್ದಾರೆ. 

‘ದೇಶದಲ್ಲಿ ಹೆಚ್ಚು ಆನೆಗಳಿರುವ ಎರಡನೇ ರಾಜ್ಯ ಅಸ್ಸಾಂ. ಅಲ್ಲಿ ಮಾನವ ಮತ್ತು ಕಾಡಾನೆ ಸಂಘರ್ಷ ಹೆಚ್ಚಾಗುತ್ತಿರುವುದನ್ನು ಕಂಡು ಸರ್ಕಾರ ಕಾಡಾನೆ ಇರುವ ಪ್ರದೇಶಗಳಲ್ಲಿ ಕಲ್ಲು ಗಣಿಗಾರಿಕೆಯನ್ನು ಸಂಪೂರ್ಣವಾಗಿ ನಿಷೇಧಿಸಿದೆ. ಇದರಿಂದ ಆನೆಗಳಿಗೆ ಭಯವಾಗುವ ಶಬ್ದಗಳನ್ನು ತಡೆಯುವಲ್ಲಿ ಯಶಸ್ವಿಯಾಗಿದೆ’ ಎಂದು ತಿಳಿಸಿದ್ದಾರೆ.

‘ಹೆಚ್ಚು ಆನೆಗಳಿರುವ ಮೊದಲ ರಾಜ್ಯ ಕರ್ನಾಟಕ. ಹಾಸನ ಜಿಲ್ಲೆಯ ಬೇಲೂರು, ಸಕಲೇಶಪುರ, ಆಲೂರು ಮತ್ತು ಅರಕಲಗೂಡು ತಾಲೂಕುಗಳಲ್ಲಿ ಐದು ದಶಕಗಳಿಂದ ಆನೆಗಳು ಮತ್ತು ಮಾನವನ ನಡುವೆ ಸಂಘರ್ಷ ಏರ್ಪಡುತ್ತಿದೆ. ಅಸ್ಸಾಂ ಮಾದರಿಯಂತೆ ಇಲ್ಲಿಯೂ ಕಲ್ಲು ಗಣಿಗಾರಿಕೆ ನಿಷೇಧಿಸಲು ಸರ್ಕಾರವನ್ನು ಒತ್ತಾಯಿಸಬೇಕು. ಈ ಮೂಲಕ ಮಾನವ–ಕಾಡಾನೆ ಸಂಘರ್ಷ ಕಡಿಮೆ ಮಾಡಲು ಕ್ರಮ ಕೈಗೊಳ್ಳಬೇಕು’ ಎಂದು ಮನವಿ ಮಾಡಿದ್ದಾರೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.