ADVERTISEMENT

‘ಮನೆಗಳ ಫಲಾನುಭವಿಗಳ ಪಟ್ಟಿ ಬೋಗಸ್’

ಪತ್ರಿಕಾಗೋಷ್ಠಿಯಲ್ಲಿ ಎಂಎಲ್‌ಸಿ ಗೋಪಾಲಸ್ವಾಮಿ ಆರೋಪ

​ಪ್ರಜಾವಾಣಿ ವಾರ್ತೆ
Published 3 ಜನವರಿ 2021, 2:35 IST
Last Updated 3 ಜನವರಿ 2021, 2:35 IST
ಗೋಪಾಲಸ್ವಾಮಿ
ಗೋಪಾಲಸ್ವಾಮಿ   

ಚನ್ನರಾಯಪಟ್ಟಣ: ‘ಗ್ರಾಮ ಪಂಚಾಯಿತಿ ಚುನಾವಣೆಯ ಸಂದರ್ಭದಲ್ಲಿ ಪ್ರಧಾನಮಂತ್ರಿ ಆವಾಸ್ ಯೋಜನೆಯಡಿ ಮನೆ ಮಂಜೂರಾಗಿದೆ ಎಂದು ಬೋಗಸ್ ಪಟ್ಟಿಯನ್ನು ಜೆಡಿಎಸ್ ಬೆಂಬಲಿತರು ತೋರಿಸುವ ಮೂಲಕ ಮತದಾರರಿಗೆ ಆಮಿಷವೊಡ್ಡಿದ್ದಾರೆ’ ಎಂದು ವಿಧಾನ ಪರಿಷತ್ ಸದಸ್ಯ ಎಂ.ಎ. ಗೋಪಾಲಸ್ವಾಮಿ ದೂರಿದರು.

‘ನಿಯಮದ ಪ್ರಕಾರ ಗ್ರಾಮ ಸಭೆಯಲ್ಲಿ ಅನುಮೋದನೆ ಪಡೆದು ಫಲಾನುಭವಿಗಳನ್ನು ಆಯ್ಕೆ ಮಾಡಬೇಕು ಹಾಗೂ ಫಲಾನುಭವಿಗಳ ಆಯ್ಕೆ ಮಾಡುವಾಗ ರೋಸ್ಟರ್‌ ಪದ್ಧತಿ ಅನುಸರಿಸಬೇಕು. ಇದಾವುದನ್ನು ಸಮರ್ಪಕವಾಗಿ ಮಾಡದೇ ಪಟ್ಟಿ ತಯಾರಿಸಿ ಜನರಿಗೆ ತೋರಿಸಿ ಮತಪಡೆದಿದ್ದಾರೆ. ಸ್ಥಳೀಯ ಜೆಡಿಎಸ್ ಶಾಸಕರು ತಮ್ಮ ಬೆಂಬಲಿತರ ಮೂಲಕ ಈ ಕೆಲಸ ಮಾಡಿದ್ದಾರೆ’ ಎಂದು ಪಟ್ಟಣದಲ್ಲಿ ಶನಿವಾರ ಪತ್ರಿಕಾ ಗೋಷ್ಠಿಯಲ್ಲಿ ಆಪಾದಿಸಿದರು.

ಫಲಾನುಭವಿಗಳ ಪಟ್ಟಿ ಪ್ರದರ್ಶನ:‘ಯಾವ ಮಾರ್ಗಸೂಚಿ ಅನುಸರಿಸಿ ಫಲಾನುಭವಿಗಳ ಪಟ್ಟಿ ತಯಾರಿಸಲಾಗಿದೆ ಎಂದು ಸ್ಪಷ್ಟನೆ ನೀಡುವಂತೆ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿಗೆ ಪತ್ರ ಬರೆಯಲಾಗಿದ್ದು, ಇದುವರೆಗೆ ಅವರಿಂದ ಉತ್ತರ ಬಂದಿಲ್ಲ. ತಪ್ಪು ಎಸಗಿದ ಅಧಿಕಾರಿಗಳ ವಿರುದ್ದ ಕ್ರಮ ತೆಗೆದುಕೊಳ್ಳಬೇಕು’ ಎಂದು ಆಗ್ರಹಿಸಿದರು.

ADVERTISEMENT

‘ಶೇ 80ರಷ್ಟು ಜೆಡಿಎಸ್ ಬೆಂಬಲಿತರು ಗ್ರಾಮ ಪಂಚಾಯಿತಿಗೆ ಆಯ್ಕೆಯಾಗಿದ್ದಾರೆ ಎಂದು ಶಾಸಕರು ಹೇಳಿದ್ದಾರೆ. ಇದನ್ನು ಸಾಬೀತು ಮಾಡಿದರೆ ತಾವು ವಿಧಾನ ಪರಿಷತ್ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಸವಾಲು ಹಾಕಿದರು. ಶಾಸಕರು ಸುಳ್ಳು ಹೇಳುವುದನ್ನು ನಿಲ್ಲಿಸಬೇಕು. 95 ಸದಸ್ಯರು ಹರಾಜು ಮೂಲಕ ಆಯ್ಕೆಯಾಗಿದ್ದಾರೆ. ಇದರಲ್ಲಿ ಬಹುತೇಕ ಮಂದಿ ಜೆಡಿಎಸ್ ಬೆಂಬಲಿತರಿದ್ದಾರೆ. ಹರಾಜು ಕೂಗಲು ಅಭ್ಯರ್ಥಿಗಳಿಗೆ ಲಕ್ಷಾಂತರ ಹಣ ಎಲ್ಲಿಂದ ಬಂತು ಎಂಬುದನ್ನು ಶಾಸಕರು ಹೇಳಬೇಕು’ ಎಂದು ಶಾಸಕ ಸಿ.ಎನ್. ಬಾಲಕೃಷ್ಣ ವಿರುದ್ದ ಪರೋಕ್ಷವಾಗಿ ವಾಗ್ದಾಳಿ ನಡೆಸಿದರು.

‘ಶ್ರವಣಬೆಳಗೊಳ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಗೆ ಬರುವ 34 ಗ್ರಾಮ ಪಂಚಾಯಿತಿಯ 425 ಸದಸ್ಯರ ಪೈಕಿ 160-180 ಕಾಂಗ್ರೆಸ್ ಬೆಂಬಲಿತರು ಆಯ್ಕೆಯಾಗಿದ್ದಾರೆ. ಅಧ್ಯಕ್ಷ, ಉಪಾಧ್ಯಕ್ಷ ಆಯ್ಕೆ ಬಳಿಕ ಯಾವ ರಾಜಕೀಯ ಪಕ್ಷದ ಬೆಂಬಲಿತರು ಎಷ್ಟು ಪಂಚಾಯಿತಿಗಳ ಅಧಿಕಾರ ಹಿಡಿದರು ಎಂಬುದು ಸ್ಪಷ್ಟವಾಗಿ ತಿಳಿಯಲಿದೆ’ ಎಂದರು.

ಮಾಜಿ ಶಾಸಕ ಸಿ.ಎಸ್. ಪುಟ್ಟೇಗೌಡ ಮಾತನಾಡಿ, ‘ಮುಂಬರುವ ತಾಲ್ಲೂಕು, ಜಿಲ್ಲಾ ಪಂಚಾಯಿತಿ ಚುನಾವಣೆ ರಾಜಕೀಯ ಪಕ್ಷಗಳ ಆಧಾರದ ಮೇಲೆ ಚುನಾವಣೆ ನಡೆಯುವುದರಿಂದ ಸ್ಪಷ್ಟ ಚಿತ್ರಣ ದೊರಕಲಿದೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಮತ್ತು ವಿರೋಧ ಪಕ್ಷ ನಾಯಕ ಸಿದ್ದರಾಮಯ್ಯ ಅವರನ್ನು ಶ್ರವಣಬೆಳಗೊಳ ಅಥವಾ ಅರಕಲಗೂಡು ಕ್ಷೇತ್ರದಿಂದ ಸ್ಪರ್ಧಿಸುವಂತೆ ಕೇಳಿಕೊಳ್ಳಲಾಗುವುದು. ಅದೇ ರೀತಿ ಸಕಲೇಶಪುರ ವಿಧಾನಸಭಾ ಕ್ಷೇತ್ರದಿಂದ ಕಣಕ್ಕಿಳಿಯುವಂತೆ ಜಿ.ಪರಮೇಶ್ವರ್ ಅವರಿಗೆ ಮನವಿ ಮಾಡಲಾಗುವುದು’ ಎಂದು ಹೇಳಿದರು.

ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಜೆ.ಎಂ. ರಾಮಚಂದ್ರ, ಎಂ.ಕೆ. ಮಂಜೇಗೌಡ, ತಾಲ್ಲೂಕು ಯುವ ಕಾಂಗ್ರೆಸ್ ಅಧ್ಯಕ್ಷ ಸಿ.ಎಸ್. ಯುವರಾಜು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.