ADVERTISEMENT

ಭೂ ಸುಧಾರಣಾ ಕಾಯ್ದೆ ತಿದ್ದುಪಡಿಗೆ ವಿರೋಧ: ಬೀದಿಗಿಳಿದ ಜೆಡಿಎಸ್‌ ನಾಯಕರು

ಎಪಿಎಂಸಿ, ಕಾರ್ಮಿಕ ಕಾಯ್ದೆ ತಿದ್ದುಪಡಿಗೂ ವಿರೋಧ

​ಪ್ರಜಾವಾಣಿ ವಾರ್ತೆ
Published 14 ಆಗಸ್ಟ್ 2020, 14:19 IST
Last Updated 14 ಆಗಸ್ಟ್ 2020, 14:19 IST
ಹಾಸನ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸುವ ವೇಳೆ ಮಳೆ ಸುರಿದಾಗ ರಾಜ್ಯಸಭಾ ಸದಸ್ಯ ಎಚ್.ಡಿ.ದೇವೇಗೌಡ ಅವರಿಗೆ ಕೊಡೆ ಹಿಡಿದ ಅಂಗರಕ್ಷಕರು.
ಹಾಸನ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸುವ ವೇಳೆ ಮಳೆ ಸುರಿದಾಗ ರಾಜ್ಯಸಭಾ ಸದಸ್ಯ ಎಚ್.ಡಿ.ದೇವೇಗೌಡ ಅವರಿಗೆ ಕೊಡೆ ಹಿಡಿದ ಅಂಗರಕ್ಷಕರು.   

ಹಾಸನ: ಭೂಸುಧಾರಣಾ ಕಾಯ್ದೆ, ಎಪಿಎಂಸಿ ಕಾಯ್ದೆ ಹಾಗೂ ಕಾರ್ಮಿಕ ಕಾಯ್ದೆಗಳಿಗೆ ತಂದಿರುವ ತಿದ್ದುಪಡಿಸಿ ವಿರೋಧಿಸಿ ಜೆಡಿಎಸ್‌ ಹಮ್ಮಿಕೊಂಡಿರುವ ಹೋರಾಟಕ್ಕೆ ಶುಕ್ರವಾರ ತವರು ಜಿಲ್ಲೆಯಲ್ಲಿ ಸಾಂಕೇತಿಕವಾಗಿ ಚಾಲನೆ ನೀಡಲಾಯಿತು.

ನಗರದ ಹೇಮಾವತಿ ಪ್ರತಿಮೆಯಿಂದ ಶಾಸಕರು, ಮುಖಂಡರು, ಕಾರ್ಯಕರ್ತರು ಜಿಲ್ಲಾಧಿಕಾರಿ ಕಚೇರಿ ವರೆಗೆ ಶಾಂತಿಯುತ ಮೆರವಣಿಗೆ ನಡೆಸಿದರು.

ನಾಯಕರು ಭಾಷಣ ಆರಂಭಿಸುತ್ತಿದ್ದಂತೆ ಮಳೆ ಸುರಿಯತೊಡಗಿತು. ಮಳೆಯನ್ನು ಲೆಕ್ಕಿಸದೇ ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ಎಚ್‌.ಕೆ.ಕುಮಾರಸ್ವಾಮಿ, ಶಾಸಕರಾದ ಎ.ಟಿ.ರಾಮಸ್ವಾಮಿ, ಕೆ.ಎಸ್.ಲಿಂಗೇಶ್‌, ಎಚ್.ಡಿ.ರೇವಣ್ಣ, ಸಿ.ಎನ್.ಬಾಲಕೃಷ್ಣ, ಕೆ.ಎಂ.ಶಿವಲಿಂಗೌಡ, ಸಂಸದ ಪ್ರಜ್ವಲ್‌ ರೇವಣ್ಣ ಅವರ ಭಾಷಣ ಮಾಡಿದರು.

ADVERTISEMENT

ರೈತ, ಕಾರ್ಮಿಕರ ಹಿತಕ್ಕೆ ಧಕ್ಕೆ ತರುವ ತಿದ್ದುಪಡಿಗಳನ್ನು ಹಿಂತಗೆದುಕೊಳ್ಳಬೇಕೆಂದು ಆಗ್ರಹಿಸಿ ಜೆಡಿಎಸ್‌ ರಾಷ್ಟ್ರೀಯ ಅಧ್ಯಕ್ಷ ಎಚ್‌.ಡಿ.ದೇವೇಗೌಡ ಅವರ ನೇತೃತ್ವದ ನಿಯೋಗ ಜಿಲ್ಲಾಧಿಕಾರಿ ಆರ್‌.ಗಿರೀಶ್‌ ಮೂಲಕ ಮುಖ್ಯಮಂತ್ರಿ ಹಾಗೂ ರಾಜ್ಯಪಾಲರಿಗೆ ಮನವಿ ಸಲ್ಲಿಸಿತು.

ಎಚ್.ಡಿ.ದೇವೇಗೌಡ ಮಾತನಾಡಿ, ‘ಈ ಮೂರು ಕಾಯಿದೆಗಳು ಜನ ವಿರೋಧಿಯಾಗಿವೆ. ಈ ಬಗ್ಗೆ ರಾಜ್ಯಸಭೆಯಲ್ಲಿ ನಾನು ಹಾಗೂ ಲೋಕಸಭೆಯಲ್ಲಿ ಮೊಮ್ಮಗ, ಸಂಸದ ಪ್ರಜ್ವಲ್ ರೇವಣ್ಣ ಮಾತನಾಡುವರು. ಎರಡು ದಿನ ಮಾತನಾಡಿ
ಸುಮ್ಮನಾಗುವುದಲ್ಲ. ರಾಜ್ಯದ 30 ಜಿಲ್ಲೆಗಳಲ್ಲೂ ಪ್ರವಾಸ ಮಾಡಿ ಜನರಿಗೆ ಜಾಗೃತಿ ಮೂಡಿಸಲಾಗುವುದು. ಇದನ್ನು ಸೇಡಿನ ರಾಜಕಾರಣ ಅಂದುಕೊಳ್ಳಬಾರದು. ರೈತ ಸಂಕಷ್ಟಕ್ಕೆ ಸ್ಪಂದಿಸುವ ಕೆಲಸ ಮಾಡುತ್ತಿದ್ದೇವೆ’ಎಂದು ಹೇಳಿದರು.

‘ ರಾಜ್ಯಾದಾದ್ಯಂತ ಹೋರಾಟ ಹಮ್ಮಿಕೊಳ್ಳಲಾಗಿದ್ದು, ಹಾಸನದಿಂದ ಆರಂಭಿಸಲಾಗಿದೆ. ಇನ್ನುಂದೆ ಸುಮ್ಮನೆ
ಕುಳಿತುಕೊಳ್ಳುವುದಿಲ್ಲ. ಕೊರೊನಾ ಸೋಂಕು ಹರಡುತ್ತಿದೆ ಹೊರಗೆ ಓಡಾಡಬೇಡಿ ಅಂತ ಸಲಹೆ ನೀಡುತ್ತಾರೆ. ಸಾವು ಯಾವಾಗ ಬರೊತ್ತೊ ಯಾರಿಗೆ ಗೊತ್ತು. ರೈತರ ಭೂಮಿ ಲೂಟಿ ಮಾಡಲು ಅವಕಾಶ ನೀಡುವುದಿಲ್ಲ. ವಿಧಾನಸೌಧ ಎದುರೇ ಹೋರಾಟ ಮಾಡುತ್ತೇನೆ. ಬೇಕಾದರೆ ಬಂಧಿಸಲಿ’ ಎಂದು ಗುಡುಗಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.