
ದೇವರಾಜೇಗೌಡ
ಹಾಸನ: ಇತ್ತೀಚೆಗೆ ನಡೆದ ಬೆಳಗಾವಿ ಅಧಿವೇಶನದಲ್ಲಿ ಎನ್‌ಡಿಎ ಮೈತ್ರಿ ವಿರೋಧಿ ಹೇಳಿಕೆ ನೀಡಿರುವ ಶಾಸಕ ಎಚ್.ಡಿ. ರೇವಣ್ಣ ಬಹಿರಂಗವಾಗಿ ಕ್ಷಮೆ ಯಾಚಿಸಬೇಕು ಎಂದು ಬಿಜೆಪಿ ಮುಖಂಡ ದೇವರಾಜೇಗೌಡ ಆಗ್ರಹಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಜೆಡಿಎಸ್ ರಾಷ್ಟ್ರಿಯ ಅಧ್ಯಕ್ಷ ಎಚ್.ಡಿ. ದೇವೇಗೌಡ ಹಾಗೂ ರಾಜ್ಯ ಘಟಕದ ಅಧ್ಯಕ್ಷ ಎಚ್.ಡಿ. ಕುಮಾರಸ್ವಾಮಿ ಅವರು ಬಿಜೆಪಿ ರಾಷ್ಟ್ರಮಟ್ಟದ ನಾಯಕರೊಂದಿಗೆ ಮೈತ್ರಿ ಮಾಡಿಕೊಂಡಿದ್ದು, ಎನ್‌ಡಿಎ ನೇತೃತ್ವದಲ್ಲಿ ಕಳೆದ ಲೋಕಸಭೆ ಚುನಾವಣೆ ಎದುರಿಸಿದ್ದೇವೆ. ಎಚ್.ಡಿ. ಕುಮಾರಸ್ವಾಮಿ ಕೇಂದ್ರದಲ್ಲಿ ಸ್ವೀಕರಿಸಿದ್ದಾರೆ ಎಂದರು.
ಹೀಗಿರುವಾಗ ಇತ್ತೀಚೆಗೆ ಬೆಳಗಾವಿಯಲ್ಲಿ ನಡೆದ ಚಳಿಗಾಲದ ಅಧಿವೇಶನದಲ್ಲಿ ಕಾಂಗ್ರೆಸ್ ಹಾಗೂ ಜೆಡಿಎಸ್ ಮಾತ್ರ ಹಾಸನ ಜಿಲ್ಲೆಯಲ್ಲಿದ್ದು, ಬಿಜೆಪಿ ಪಕ್ಷವೇ ಇಲ್ಲ ಎಂದು ಹೇಳಿಕೆ ನೀಡಿರುವುದು ಖಂಡನೀಯ. ಇದರಿಂದ ಬಿಜೆಪಿಯ ಶಾಸಕರು ಹಾಗೂ ಪರಾಜಿತ ಅಭ್ಯರ್ಥಿಗಳಿಗೆ, ಪ್ರಾಮಾಣಿಕ ಕಾರ್ಯಕರ್ತರಿಗೆ ಅವಮಾನ ಮಾಡಿದಂತಾಗಿದೆ. ಕೂಡಲೇ ಜೆಡಿಎಸ್ ವರಿಷ್ಠರು ಪಕ್ಷ ವಿರೋಧಿ ಮಾತು ಆಡಿರುವ ರೇವಣ್ಣ ಅವರನ್ನು ಪಕ್ಷದಿಂದ ಉಚ್ಚಾಟಿಸಬೇಕು ಎಂದು ಆಗ್ರಹಿಸಿದರು.
ನಮ್ಮ ಮನವಿ ಪುರಸ್ಕರಿಸದೇ ಇದ್ದರೆ, ಎನ್‌ಡಿಎ ಅಂಗ ಪಕ್ಷವಾಗಿ ಉಳಿಯಲು ಜೆಡಿಎಸ್‌ಗೆ ನೈತಿಕತೆ ಇರುವುದಿಲ್ಲ. ರೇವಣ್ಣ ಅವರನ್ನು ಉಚ್ಚಾಟಿಸಬೇಕು. ಇಲ್ಲವಾದರೆ ಬಿಜೆಪಿಯಿಂದ ಉಗ್ರ ಹೋರಾಟ ನಡೆಸಲಾಗುವುದು ಎಂದರು.
ನಾಗರಾಜ್ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.