
ಹಾಸನ: ರೈತರ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಬಿಜೆಪಿ ರೈತ ಮೋರ್ಚಾದಿಂದ ಮಂಗಳವಾರ ನಗರದಲ್ಲಿ ಪ್ರತಿಭಟನೆ ನಡೆಸಲಾಯಿತು.
ನಗರದ ಆರ್.ಸಿ. ರಸ್ತೆಯ ಬಿಜೆಪಿ ಕಚೇರಿಯಿಂದ ಎತ್ತಿನ ಗಾಡಿಯೊಂದಿಗೆ ಮೆರವಣಿಗೆಯಲ್ಲಿ ಸಾಗಿದ ಬಿಜೆಪಿ ಮುಖಂಡರು ಹಾಗೂ ನೂರಾರು ಕಾರ್ಯಕರ್ತರು, ಜಿಲ್ಲಾ ಪಂಚಾಯಿತಿ ವೃತ್ತದಲ್ಲಿ ಕೆಲಕಾಲ ಮಾನವ ಸರಪಳಿ ನಿರ್ಮಿಸಿ ರಸ್ತೆ ತಡೆ ನಡೆಸಿದರು. ರಾಜ್ಯ ಸರ್ಕಾರದ ರೈತ ವಿರೋಧಿ ನೀತಿ ವಿರುದ್ಧ ಧಿಕ್ಕಾರ ಕೂಗಿದರು.
ಶಾಸಕ ಎಚ್.ಕೆ. ಸುರೇಶ್ ಮಾತನಾಡಿ, ‘ರಾಜ್ಯದಲ್ಲಿ ಆಡಳಿತ ಯಂತ್ರ ಸಂಪೂರ್ಣ ಕುಸಿದಿದೆ. ಮುಖ್ಯಮಂತ್ರಿ ಹಾಗೂ ಉಪ ಮುಖ್ಯಮಂತ್ರಿ ಕುರ್ಚಿ ಕಿತ್ತಾಟದಲ್ಲಿ ಕಾಲಹರಣ ಮಾಡುತ್ತಿದ್ದಾರೆ. ರೈತರ ಸಮಸ್ಯೆಗಳನ್ನು ಕೇಳುವವರೇ ಇಲ್ಲವಾಗಿದೆ ’ ಎಂದು ಆರೋಪಿಸಿದರು.
‘ಕಾಂಗ್ರೆಸ್ ಸರ್ಕಾರ 5 ಗ್ಯಾರಂಟಿ ನೀಡಿದ್ದೇವೆ ಎಂದು ಜನರನ್ನು ನಂಬಿಸಿ, ಖಜಾನೆ ಲೂಟಿ ಮಾಡುತ್ತಿದ್ದಾರೆ. ಯೋಜನೆಗಳಾಗಲಿ, ಕಾಮಗಾರಿಗಳಾಗಲಿ ನಡೆಯುತ್ತಿಲ್ಲ, ರಸ್ತೆಗೆ ಗುಂಡಿ ಮುಚ್ಚುವ ಕೆಲಸವೂ ಆಗುತ್ತಿಲ್ಲ’ ಎಂದು ಆರೋಪಿಸಿದರು.
‘ಕಬ್ಬಿಗೆ ಬೆಂಬಲ ಬೆಲೆ ನೀಡುವಂತೆ ರೈತರು ಹೋರಾಟ ನಡೆಸಿದರೂ, ಕನಿಷ್ಠ ಬೆಂಬಲ ಬೆಲೆ ನೀಡುವಲ್ಲಿಯೂ ವಿಫಲರಾಗಿದ್ದಾರೆ. ಜಿಲ್ಲೆಯಲ್ಲಿ ಮೆಕ್ಕೆಜೋಳ ಬೆಳೆದ ರೈತರಿಗೆ ಬೆಂಬಲ ಬೆಲೆ ಸಿಗುತ್ತಿಲ್ಲ. ಕೇಂದ್ರ ಸರ್ಕಾರ ಕ್ವಿಂಟಲ್‌ಗೆ ₹ 2,400 ನಿಗದಿ ಮಾಡಿದ್ದರೂ ಮಾರುಕಟ್ಟೆಯಲ್ಲಿ ₹ 1,700 ರಿಂದ ₹ 1,800 ದರದಲ್ಲಿ ಖರೀದಿ ನಡೆಯುತ್ತಿದೆ ’ ಎಂದು ದೂರಿದರು.‘ಸರ್ಕಾರ ಮೆಕ್ಕೆಜೋಳವನ್ನು ಬೆಂಬಲ ಬೆಲೆ ಯೋಜನೆ ಅಡಿ ಕೂಡಲೇ ಖರೀದಿ ಮಾಡಬೇಕು. ಜಿಲ್ಲೆ, ತಾಲ್ಲೂಕು ಮತ್ತು ಹೋಬಳಿ ಕೇಂದ್ರದಲ್ಲೂ ಮೆಕ್ಕೆಜೋಳ ಖರೀದಿ ಕೇಂದ್ರ ತೆರೆಯಬೇಕು’ ಎಂದು ಆಗ್ರಹಿಸಿದರು.
‘ಬೆಳೆ ಪರಿಹಾರ ಹಣ ಬಿಡುಗಡೆ ಮಾಡಲಾಗಿದೆ ಎಂದು ರಾಜ್ಯ ಸರ್ಕಾರ ಘೋಷಣೆ ಮಾಡಿತ್ತು. ಆದರೆ ಇದು ಕೇವಲ ಮಾಧ್ಯಮದಲ್ಲಿ ಮಾತ್ರ ಕಾಣಬಹುದಾಗಿದೆ. ಆದರೆ ರೈತರ ಖಾತೆಗೆ ಹಣ ಬಂದಿಲ್ಲ’ ಎಂದು ದೂರಿದರು.
ರಾಜ್ಯ ಸರ್ಕಾರ ರೈತರ ಬದುಕನ್ನು ಸಂಕಷ್ಟಕ್ಕೆ ದೂಡುತ್ತಿದೆ. ಈಗಲಾದರೂ ಸರ್ಕಾರ ಎಚ್ಚೆತ್ತುಕೊಳ್ಳಬೇಕು. ರಾಜ್ಯದಲ್ಲಿ ಸುಮಾರು ₹ 5 ಕೋಟಿ ಮಂದಿ ಕೃಷಿಯನ್ನು ನಂಬಿ ಬದುಕುತ್ತಿದ್ದಾರೆ. ಇವರ ನೆರವಾಗಲು ಕೂಡಲೇ ಖರೀದಿ ಕೇಂದ್ರ ಸ್ಥಾಪಿಸಿ ರೈತರ ನೆರವಿಗೆ ಬರಬೇಕು ಎಂದು ಆಗ್ರಹಿಸಿದರು.
ಡಿಸೆಂಬರ್ 8 ರಿಂದ ವಿಧಾನ ಮಂಡಲದ ಚಳಿಗಾಲದ ಅಧಿವೇಶನ ಆರಂಭವಾಗಲಿದ್ದು. ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ವಿಜಯೇಂದ್ರ, ವಿಧಾನ ಪರಿಷತ್ ಪ್ರತಿಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ನೇತೃತ್ವದಲ್ಲಿ ಹೋರಾಟ ತೀವ್ರಗೊಳಿಸಲಾಗುವುದು. ಅಧಿವೇಶನಕ್ಕೂ ಮುನ್ನ ರೈತರಿಗೆ ಪರಿಹಾರ ವಿತರಿಸಬೇಕು. ಮೆಕ್ಕೆಜೋಳ, ಕಬ್ಬು ಸೇರಿದಂತೆ ಇತರೆ ಬೆಳೆಗಳಿಗೆ ಬೆಂಬಲ ಬೆಲೆ ಘೋಷಣೆ ಮಾಡಬೇಕು ಎಂದು ಆಗ್ರಹಿಸಿದರು.
ಜಿಲ್ಲಾಧಿಕಾರಿ ಕಚೇರಿ ಆವರಣದ ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ ಮಾಡಿದ ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು, ಹೆಚ್ಚುವರಿ ಜಿಲ್ಲಾಧಿಕಾರಿ ಜಗದೀಶ್ ಅವರಿಗೆ ಮನವಿ ಸಲ್ಲಿಸಿದರು.
ವಿಧಾನ ಪರಿಷತ್ ಸದಸ್ಯ ಡಿ.ಎಸ್ ಅರುಣ್, ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಸಿದ್ದೇಶ್ ನಾಗೇಂದ್ರ, ಪ್ರಧಾನ ಕಾರ್ಯದರ್ಶಿ ಅಮಿತ್ ಶೆಟ್ಟಿ, ಪ್ರಸನ್ನ ಕುಮಾರ್, ರೈತ ಮೋರ್ಚಾ ಅಧ್ಯಕ್ಷ ನಾರಾಯಣಗೌಡ, ಗಿರೀಶ್, ಚನ್ನರಾಯಪಟ್ಟಣ ತಾಲ್ಲೂಕು ಘಟಕದ ಅಧ್ಯಕ್ಷ ಗಂಗಾಧರ್, ಮಂಜು, ಸಂತೋಷ್, ವೇದಾವತಿ, ಛಾಯಾ, ಕುಸುಮಾ, ಶೋಭಾ, ತೂಬಿನಕೆರೆ ಗಿರೀಶ್, ಶೋಭನ್ ಬಾಬು, ನಟರಾಜ್ ಭಾಗವಹಿಸಿದ್ದರು.
ನೆಮ್ಮದಿ ಕಸಿದ ಸರ್ಕಾರ: ಮಂಜು
ಎರಡೂವರೆ ವರ್ಷದಿಂದ ರಾಜ್ಯದಲ್ಲಿ ಸರ್ಕಾರ ಬದುಕಿದೆಯೋ ಇಲ್ಲವೋ ಎಂಬ ಸ್ಥಿತಿಯಲ್ಲಿದೆ. ನೆಮ್ಮದಿಯ ಬದುಕೇ ಇಲ್ಲವಾಗಿದೆ. ಜಿಲ್ಲೆಯ ಪ್ರಮುಖ ವಾಣಿಜ್ಯ ಬೆಳೆಯಲ್ಲಿ ಒಂದಾದ ಮೆಕ್ಕೆಜೋಳಕ್ಕೆ ಬೆಂಬಲ ಬೆಲೆ ಘೋಷಣೆ ಮಾಡಿಲ್ಲ. ಶಾಸಕರು ಅಧಿವೇಶನದಲ್ಲಿ ಮನವಿ ಮಾಡಿದರೂ ಸಹಕಾರ ನೀಡುತ್ತಿಲ್ಲ. ಕೇವಲ ಗೋಡೆಯ ಮೇಲೆ ದೀಪ ಇಟ್ಟಂತೆ ಪರಿಹಾರ ಘೋಷಣೆ ಮಾಡಿದ್ದು ರೈತರ ಖಾತೆಗೆ ಒಂದು ರೂಪಾಯಿಯೂ ಬಂದಿಲ್ಲ ಎಂದು ಶಾಸಕ ಸಿಮೆಂಟ್ ಮಂಜು ಕಿಡಿಕಾರಿದರು.
ರೈತರನ್ನ ಎದುರು ಹಾಕಿಕೊಂಡು ಯಾವುದೇ ಸರ್ಕಾರ ಉಳಿದಿಲ್ಲ. ಸಂಕಷ್ಟದಲ್ಲಿ ರೈತರಿದ್ದು ಜೋಳ ಅಡಿಕೆ ಕಾಫಿ ಅಕಾಲಿಕ ಮಳೆ ಹಾಗೂ ಹವಾಮಾನ ವೈಪರಿತ್ಯದಿಂದ ಉದುರಿ ಹೋಗುತ್ತಿವೆ. ಸಂಬಂಧಪಟ್ಟ ಅಧಿಕಾರಿಗಳು ಸಮೀಕ್ಷೆ ನಡೆಸಿ ಪರಿಹಾರ ಒದಗಿಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳುತ್ತಿಲ್ಲ ಎಂದು ಆರೋಪಿಸಿದರು. ಕೇಂದ್ರ ಸರ್ಕಾರ ಪಿಎಂ ಕಿಸಾನ್ ಯೋಜನೆಯಡಿ ಪ್ರತಿ ವರ್ಷ ರೈತರಿಗೆ ₹ 6ಸಾವಿರ ಸಹಾಯಧನ ನೀಡುತ್ತಿದೆ. ಆದರೆ ಯಡಿಯೂರಪ್ಪ ನೇತೃತ್ವದ ಸರ್ಕಾರ ಘೋಷಣೆ ಮಾಡಿದ್ದ ₹ 4 ಸಾವಿರ ಸಹಾಯಧನವನ್ನು ಕಾಂಗ್ರೆಸ್ ಸರ್ಕಾರ ನಿಲ್ಲಿಸಿದೆ ಎಂದು ದೂರಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.