
ಹಾಸನ: ಅರಸೀಕೆರೆ ತಾಲ್ಲೂಕಿನ ಗವಿಮಠದ ಬಳಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿ ಹೊಡೆದಿದ್ದು, ಸ್ಥಳದಲ್ಲಿಯೇ ಯುವಕ ಮೃತಪಟ್ಟು, ಇನ್ನಿಬ್ಬರು ಗಾಯಗೊಂಡಿದ್ದಾರೆ.
ವಿದ್ಯುತ್ ಇಲಾಖೆ ನೌಕರ ಮಂಜುನಾಥ್ (25) ಮೃತಪಟ್ಟವರು. ಹಾರನಹಳ್ಳಿ ಗ್ರಾಮದ ಮಂಜುನಾಥ್, ಪವನ್ ಹಾಗೂ ನವೀನ್, ಕಾರಿನಲ್ಲಿ ಅರಸೀಕೆರೆಯಿಂದ ಬಾಣಾವರದ ಕಡೆಗೆ ತೆರಳುತ್ತಿದ್ದರು. ಈ ವೇಳೆ ಚಾಲಕನ ನಿಯಂತ್ರಣ ತಪ್ಪಿದ ಕಾರು, ಡಿವೈಡರ್ ದಾಟಿ ಮತ್ತೊಂದು ಬದಿಯ ರಸ್ತೆ ಪಕ್ಕದಲ್ಲಿದ್ದ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿದೆ. ನಂತರ ಕಾರಿಗೆ ಬೆಂಕಿ ಹೊತ್ತಿಕೊಂಡಿದೆ. ಸ್ಥಳದಲ್ಲಿದ್ದವರು ಕಾರಿನೊಳಗಿದ್ದ ಮೂವರನ್ನು ಹೊರಗೆ ತಂದಿದ್ದಾರೆ. ಅಷ್ಟರಲ್ಲಿ ಮಂಜುನಾಥ್ ಮೃತಪಟ್ಟಿದ್ದರು.
ಸ್ಥಳಕ್ಕೆ ಅಗ್ನಿಶಾಮಕದಳದ ಸಿಬ್ಬಂದಿ ಬಂದು ಬೆಂಕಿ ನಂದಿಸಿದರು. ಅಷ್ಟರಲ್ಲಿ ಕಾರು ಸಂಪೂರ್ಣ ಸುಟ್ಟು ಹೋಗಿತ್ತು. ಗಾಯಾಳುಗಳು ನಗರದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸ್ಥಳಕ್ಕೆ ಭೇಟಿ ನೀಡಿದ ಪೊಲೀಸರು ಪರಿಶೀಲನೆ ನಡೆಸಿದರು. ಬಾಣಾವರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.