ನುಗ್ಗೇಹಳ್ಳಿ: ವರ್ಷದಿಂದ ವರ್ಷಕ್ಕೆ ಪರಿಸರ ನಾಶವಾಗುತ್ತಿದ್ದು, ಇದರಿಂದ ಹವಾಮಾನದಲ್ಲಿ ವೈಪರಿತ್ಯ ಉಂಟಾಗಿ ಅತಿವೃಷ್ಟಿ, ಅನಾವೃಷ್ಟಿ ಹೆಚ್ಚಾಗುತ್ತಿದೆ. ಭವಿಷ್ಯದಲ್ಲಿ ಹೀಗೆಯೇ ಮುಂದುವರಿದರೆ ಮನುಷ್ಯ ತುಂಬಾ ಕಷ್ಟದ ದಿನಗಳನ್ನು ಎದುರಿಸಬೇಕಾಗುತ್ತದೆ ಎಂದು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಶ್ರವಣಬೆಳಗೊಳ ಯೋಜನಾ ಕಚೇರಿಯ ಯೋಜನಾಧಿಕಾರಿ ಕೆ. ಪುರಂದರ ಅಭಿಪ್ರಾಯಪಟ್ಟರು.
ಹೋಬಳಿಯ ಅಯ್ಯಾರಹಳ್ಳಿಯಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಕಲ್ಕೆರೆ ವಲಯದ ವತಿಯಿಂದ ಏರ್ಪಡಿಸಿದ್ದ ಕೃಷಿ ವಿಸ್ತರಣಾ ಕಾರ್ಯಕ್ರಮದಡಿಯಲ್ಲಿ ಕೃಷಿ ತರಬೇತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
‘ಕೃಷಿ ವಿಸ್ತರಣಾ ಕಾರ್ಯಕ್ರಮದಡಿ ಈಗಾಗಲೇ ಸಂಪನ್ಮೂಲ ವ್ಯಕ್ತಿಗಳಿಂದ ರೈತರಿಗೆ ಕೃಷಿಯ ಮಾಹಿತಿ ನೀಡಲಾಗುತ್ತಿದೆ. ಇದರಿಂದ ರೈತರು ಕೃಷಿಯಲ್ಲಿ ಪ್ರಗತಿ ಸಾಧಿಸುವುದರ ಜೊತೆಗೆ ಹೆಚ್ಚು ಲಾಭಗಳಿಸಬಹುದಾಗಿದೆ’ ಎಂದರು.
‘ಕೃಷಿ ಯಂತ್ರಧಾರೆ ಮೂಲಕ ರೈತರಿಗೆ ರಿಯಾಯಿತಿ ದರದಲ್ಲಿ ಕೃಷಿ ಉಪಕರಣಗಳನ್ನು ಬಾಡಿಗೆ ನೀಡಲಾಗುತ್ತಿದೆ’ ರೈತರು ಇದರ ಸದ್ಬಳಕೆ ಮಾಡಿಕೊಳ್ಳಬೇಕು’ ಎಂದು ಮನವಿ ಮಾಡಿದರು.
ಸಂಪನ್ಮೂಲ ವ್ಯಕ್ತಿ ಗಣೇಶ್ ಮಾತನಾಡಿ, ‘ಮಣ್ಣು ಪರೀಕ್ಷೆ ಮತ್ತು ಸಸ್ಯ ಪೋಷಕಾಂಶಗಳ ನಿರ್ವಹಣೆ ವಿಧಾನದ ಬಗ್ಗೆ ಮಾಹಿತಿ ನೀಡಿದ ಅವರು, ರೈತರು ಸಮಗ್ರ ಕೃಷಿಯ ಬಗ್ಗೆ ಹೆಚ್ಚಿನ ಒತ್ತು ನೀಡಬೇಕು. ಜಮೀನಿನಲ್ಲಿ ಕನಿಷ್ಠ 10 ಗುಂಟೆಯಲ್ಲಾದರೂ ಸಾವಯವ ಕೃಷಿ ಮಾಡಿದರೆ ಹೆಚ್ಚು ಲಾಭ ಗಳಿಸಬಹುದು, ಈ ಬಗ್ಗೆ ರೈತರು ಚಿಂತಿಸಬೇಕು’ ಎಂದು ಹೇಳಿದರು.
ಶ್ರವಣಬೆಳಗೊಳ ಯೋಜನಾ ಕಚೇರಿ ಕೃಷಿ ಮೇಲ್ವಿಚಾರಕ ಮಹಾದೇವ ಪ್ರಸಾದ್ ಟಿ.ಎಂ., ಕಲ್ಕೆರೆ ವಲಯದ ಮೇಲ್ವಿಚಾರಕ ರಮೇಶ್, ಗ್ರಾಮ ಪಂಚಾಯಿತಿ ಮಾಜಿ ಸದಸ್ಯೆ ತಿಮ್ಮಮ್ಮ, ಒಕ್ಕೂಟದ ಪದಾಧಿಕಾರಿಗಳಾದ ಪ್ರೇಮ್ ಕುಮಾರ್, ಮಂಜಮ್ಮ, ಸೇವಾ ಪ್ರತಿನಿಧಿ ಮಂಜೇಗೌಡ ಹಾಗೂ ಸ್ವಸಹಾಯ ಸಂಘದ ಸದಸ್ಯರು ರೈತರು ಭಾಗವಹಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.