
ಹಾಸನ: ಮುಖ್ಯಮಂತ್ರಿ ಸಿದ್ದರಾಮಯ್ಯ ಡಿ.6 ರಂದು ಜಿಲ್ಲೆಗೆ ಭೇಟಿ ನೀಡಲಿದ್ದು, ತಮ್ಮ ಇಲಾಖೆಯಲ್ಲಿ ಪೂರ್ಣಗೊಂಡು ಉದ್ಘಾಟನೆಗೆ ಸಿದ್ಧವಿರುವ ಕಾಮಗಾರಿ, ಶಂಕುಸ್ಥಾಪನೆ ಕಾಮಗಾರಿಗಳು ಹಾಗೂ ವಿವಿಧ ಯೋಜನೆಗಳಡಿ ಫಲಾನುಭವಿಗಳಿಗೆ ಸವಲತ್ತು ವಿತರಣೆಯ ಸಂಪೂರ್ಣ ಮಾಹಿತಿ ನೀಡುವಂತೆ ಜಿಲ್ಲಾಧಿಕಾರಿ ಕೆ.ಎಸ್.ಲತಾಕುಮಾರಿ ಸೂಚಿಸಿದರು.
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶನಿವಾರ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಅವರು, ತಮಗೆ ವಹಿಸಿರುವ ಜವಾಬ್ದಾರಿಯನ್ನು ಎಚ್ಚರ ವಹಿಸಿ ನಿರ್ವಹಿಸುವಂತೆ ನಿರ್ದೇಶನ ನೀಡಿದರು.
ಇಲಾಖಾವಾರು ಮಾಹಿತಿ ಸಿದ್ಧಪಡಿಸಿ ನೀಡಬೇಕು. ಜಿಲ್ಲಾ ಪಂಚಾಯಿತಿ ಅಡಿಯಲ್ಲಿ ಬರುವ ಇಲಾಖೆಗಳ ಪಟ್ಟಿ ಸಿದ್ಧಪಡಿಸಿ ನೀಡಬೇಕು. ಆಯಾ ತಾಲ್ಲೂಕು ತಹಶೀಲ್ದಾರರೂ ಮಾಹಿತಿ ನೀಡಬೇಕು. ಮುಂದುವರಿದ ಕಾಮಗಾರಿಗಳಲ್ಲಿ ಶೇ 80 ರಷ್ಟು ಪೂರ್ಣಗೊಂಡಿರುವ ಕಾಮಗಾರಿಗಳ ಬಗ್ಗೆಯೂ ಪಟ್ಟಿ ತಯಾರಿಸಿ ನೀಡುವಂತೆ ತಿಳಿಸಿದರು.
ಸಕಾಲ ಮತ್ತು ಐಪಿಜಿಆರ್‌ಎಸ್‌ನಲ್ಲಿ ಸಲ್ಲಿಕೆಯಾಗಿರುವ ಅರ್ಜಿಗಳನ್ನು ನಿಗದಿತ ಅವಧಿಯಲ್ಲಿ ವಿಲೇವಾರಿ ಮಾಡಬೇಕು ಎಂದರು.
ಹೆಚ್ಚುವರಿ ಜಿಲ್ಲಾಧಿಕಾರಿ ಮಂಜುನಾಥ್, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ವೆಂಕಟೇಶ್ ನಾಯ್ಡು, ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿಗಳಾದ ಕೃಷ್ಣಮೂರ್ತಿ, ಬಾಬು, ಉಪ ವಿಭಾಗಾಧಿಕಾರಿಗಳಾದ ಜಗದೀಶ್ ಗಂಗಣ್ಣನವರ್, ರಾಜೇಶ್, ಮತ್ತಿತರ ಅಧಿಕಾರಿಗಳು ಹಾಜರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.