ADVERTISEMENT

ಹಾಸನ | ಕಾಫಿ ಬೆಳೆಗಾರರ ನೆರವಿಗೆ ಧಾವಿಸಿ: ಸುರೇಂದ್ರ

​ಪ್ರಜಾವಾಣಿ ವಾರ್ತೆ
Published 21 ಆಗಸ್ಟ್ 2025, 4:25 IST
Last Updated 21 ಆಗಸ್ಟ್ 2025, 4:25 IST
<div class="paragraphs"><p> ಕಾಫಿ</p></div>

ಕಾಫಿ

   

ಹಾಸನ: ‘ವಿಪರೀತ ಮಳೆಯಿಂದಾಗಿ ಮಲೆನಾಡಿನ ಪ್ರಮುಖ ಬೆಳೆಗಳಾದ ಕಾಫಿ ಜೊತೆಗೆ ಕಾಳುಮೆಣಸು, ಅಡಿಕೆಗೆ ಕೊಳೆರೋಗ ಉಲ್ಬಣಿಸುತ್ತಿದ್ದು, ಅಪಾರ ಪ್ರಮಾಣದಲ್ಲಿ ಹಾನಿಯಾಗಿದೆ. ಸರ್ಕಾರ ಕೂಡಲೇ ಕಾಫಿ ಬೆಳೆಗಾರರ ನೆರವಿಗೆ ಧಾವಿಸಬೇಕು’ ಎಂದು ಕಾಫಿ ಬೆಳೆಗಾರರ ಒಕ್ಕೂಟದ ಪ್ರಧಾನ ಕಾರ್ಯದರ್ಶಿ ಟಿ.ಪಿ. ಸುರೇಂದ್ರ ಒತ್ತಾಯಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಕಾಫಿ ಬೆಳೆಯುವ ಹಾಸನ, ಚಿಕ್ಕಮಗಳೂರು ಮತ್ತು ಕೊಡಗು ಜಿಲ್ಲೆಗಳಲ್ಲಿ ಈ ವರ್ಷ ಮೇ ಮತ್ತು ಜೂನ್‌ನಲ್ಲಿ ನಿರಂತರವಾಗಿ ಸುರಿದ ಅತಿಯಾದ ಮಳೆಯಿಂದ ಅಪಾರ ಪ್ರಮಾಣದಲ್ಲಿ ಕಾಫಿ ಫಸಲು ನಷ್ಟವಾಗಿದೆ. ಈ ಬಗ್ಗೆ ಕಾಫಿ ಮಂಡಳಿಯ ಅಧಿಕಾರಿಗಳು ಸಮೀಕ್ಷೆ ನಡೆಸಿ ವರದಿ ನೀಡಿದ್ದಾರೆ’ ಎಂದರು.

ADVERTISEMENT

‘ಕಾಫಿ ನಷ್ಟದ ಪ್ರಮಾಣ ಸಮೀಕ್ಷೆ ನಡೆಸಿದ ನಂತರವೂ ನಿರಂತರವಾಗಿ ಮಳೆ ಮುಂದುವರಿದಿದ್ದು, ಇದೀಗ ಇನ್ನೂ ಹೆಚ್ಚಿನ ಪ್ರಮಾಣದಲ್ಲಿ ಕಾಫಿ ನಷ್ಟ ಉಂಟಾಗಿದೆ. ಕಂದಾಯ ಇಲಾಖೆ ಮತ್ತು ಕಾಫಿ ಮಂಡಳಿ ಮತ್ತು ತೋಟಗಾರಿಕಾ ಇಲಾಖೆ ಅಧಿಕಾರಿಗಳು ಶೀಘ್ರದಲ್ಲಿ ಕಾಫಿ ತೋಟಗಳಿಗೆ ಭೇಟಿ ನೀಡಿ, ನಷ್ಟದ ಬಗ್ಗೆ ಮತ್ತೊಮ್ಮೆ ಜಂಟಿ ಸಮೀಕ್ಷೆ ನಡೆಸಿ ಸರ್ಕಾರಕ್ಕೆ ವರದಿ ಸಲ್ಲಿಸಬೇಕು. ಉಂಟಾಗಿರುವ ನಷ್ಟಕ್ಕೆ ಸೂಕ್ತ ಪರಿಹಾರ ದೊರಕಿಸಿ ಕೊಡಬೇಕು’ ಎಂದು ಒತ್ತಾಯಿಸಿದರು.

‘ಸರ್ಕಾರವೂ ಈ ನಿಟ್ಟಿನಲ್ಲಿ ತ್ವರಿತ ಕ್ರಮ ಕೈಗೊಂಡು ಅಧಿಕಾರಿಗಳಿಂದ ವರದಿ ಪಡೆದುಕೊಳ್ಳಬೇಕು. ಬೆಳೆಗಾರರಿಗೆ ಉಂಟಾಗಿರುವ ನಷ್ಟಕ್ಕೆ ಎನ್.ಡಿ.ಆರ್.ಎಫ್. ಮತ್ತು ಎಸ್.ಡಿ.ಆರ್.ಎಫ್.ನಿಂದ ಸೂಕ್ತ ಪರಿಹಾರ ದೊರಕಿಸಿಕೊಡಬೇಕು’ ಎಂದು ಮನವಿ ಮಾಡಿದರು.

ಎ.ಎಸ್. ಪರಮೇಶ್, ಗಂಗಾಧರ್, ಯತೀಶ್ ಹಾಗೂ ಇತರರು ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.