ADVERTISEMENT

ಹಾಸನ: ಕೇಂದ್ರದ ಜನ ವಿರೋಧಿ ನೀತಿಗೆ ಖಂಡನೆ

ಕಾರ್ಮಿಕ ಸಂಘಟನೆಗಳ ಜಂಟಿ ಸಮಿತಿ ವತಿಯಿಂದ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 26 ನವೆಂಬರ್ 2020, 14:20 IST
Last Updated 26 ನವೆಂಬರ್ 2020, 14:20 IST
ಹಾಸನ ನಗರದಲ್ಲಿ ಕಾರ್ಮಿಕ ಸಂಘಟನೆಗಳ ಜಂಟಿ ಸಮಿತಿ ವತಿಯಿಂದ ಪ್ರತಿಭಟನೆ ನಡೆಸಲಾಯಿತು
ಹಾಸನ ನಗರದಲ್ಲಿ ಕಾರ್ಮಿಕ ಸಂಘಟನೆಗಳ ಜಂಟಿ ಸಮಿತಿ ವತಿಯಿಂದ ಪ್ರತಿಭಟನೆ ನಡೆಸಲಾಯಿತು   

ಹಾಸನ: ಕೇಂದ್ರ ಸರ್ಕಾರದ ಕಾರ್ಮಿಕ, ರೈತ ಹಾಗೂ ಜನ ವಿರೋಧಿ ನೀತಿ ವಿರೋಧಿಸಿ ಅಖಿಲ ಭಾರತ ಕಿಸಾನ್‌ ಸಂಘರ್ಷ ಸಮನ್ವಯ ಸಮಿತಿ, ವಿದ್ಯಾರ್ಥಿ, ಯುವಜನ, ದಲಿತ, ಮಹಿಳಾ, ಕನ್ನಡ ಮತ್ತು ಅಲ್ಪಸಂಖ್ಯಾತ ಸಂಘಟನೆಗಳ ವತಿಯಿಂದ ಗುರುವಾರ ನಗರದಲ್ಲಿ ಪ್ರತಿಭಟನೆ ನಡೆಸಲಾಯಿತು.

ನಗರದ ಹೇಮಾವತಿ ಪ್ರತಿಮೆಯಿಂದ ಜಿಲ್ಲಾಧಿಕಾರಿ ಕಚೇರಿವರೆಗೂ ಮರವಣಿಗೆ ನಡೆಸಿ, ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು. ಎನ್‌.ಆರ್‌. ವೃತ್ತದಲ್ಲಿ ಕೆಲ ಕಾಲ ಮಾನವ ಸರಪಳಿ ನಿರ್ಮಿಸಿ ರಸ್ತೆತಡೆ ನಡೆಸಿದರು.

ಕೋವಿಡ್‌ ಸಂಕಷ್ಟದಿಂದ ನಲುಗಿರುವ ಜನರಿಗೆ ಆಸರೆಯಾಗಬೇಕಿದ್ದ ಕೇಂದ್ರ ಮತ್ತು ರಾಜ್ಯ ಸರ್ಕಾರ ಎಪಿಎಂಸಿ, ಕಾರ್ಮಿಕ ಹಾಗೂ ಭೂ ಸುಧಾರಣೆ ಕಾಯ್ದೆ ತಿದ್ದುಪಡಿ ಮೂಲಕ ನಷ್ಟದ ಕೂಪಕ್ಕೆ ತಳ್ಳಿದೆ ಎಂದು ಆರೋಪಿಸಿದರು.

ADVERTISEMENT

ಸಿಐಟಿಯು ಜಿಲ್ಲಾಧ್ಯಕ್ಷ ಧರ್ಮೇಶ್‌ ಮಾತನಾಡಿ, ಎಪಿಎಂಸಿ ಹಾಗೂ ಭೂ ಸುಧಾರಣಾ ಕಾಯ್ದೆಗೆ ತಿದ್ದುಪಡಿ ಮಾಡಿ ಸುಗ್ರಿವಾಜ್ಞೆ ಹೊರಡಿಸಲಾಗಿದೆ. ಕೃಷಿ ಉತ್ಪನ್ನಗಳಿಗೆ ಬೆಂಬಲ ಬೆಲೆ ಸಿಗಬೇಕು. ಕೃಷಿಗೆ ಮೂಲ ಸೌಕರ್ಯ ಒದಗಿಸಿ, ಮಾರುಕಟ್ಟೆ, ಸಂಸ್ಕರಣೆ, ಸಾರಿಗೆ ಇತ್ಯಾದಿ ಸುಧಾರಣೆ ಆಗಬೇಕು. ರೈತ ವಿರೋಧಿ ಕಾನೂನುಗಳನ್ನು ಕೂಡಲೇ ವಾಪಸ್‌ ಪಡೆಯಬೇಕು ಎಂದು ಆಗ್ರಹಿಸಿದರು.

ಶಿಕ್ಷಣ, ಆರೋಗ್ಯ, ರೈಲ್ವೆ, ವಿದ್ಯುತ್‌, ದೂರಸಂಪರ್ಕ, ವಿಮಾ, ಬ್ಯಾಂಕ್‌ ಮತ್ತಿತರ ಸಾರ್ವಜನಿಕ ವಲಯದ ಖಾಸಗೀಕರಣ ನಿಲ್ಲಿಸಬೇಕು. ಆದಾಯ ತೆರಿಗೆ ವ್ಯಾಪ್ತಿಯ ಹೊರಗಿರುವ ಕುಟುಂಬಗಳಿಗೆ ತಿಂಗಳಿಗೆ ₹7,500 ನಗದು ವರ್ಗಾವಣೆ ಮಾಡಬೇಕು. ಆಶಾ, ಅಂಗನವಾಡಿ, ಬಿಸಿಯೂಟ ಕಾರ್ಯಕರ್ತೆಯರಿಗೆ ₹21 ಸಾವಿರ ಕನಿಷ್ಠ ವೇತನ ನಿಗದಿಯಾಗಬೇಕು ಎಂದು ಒತ್ತಾಯಿಸಿದರು.

ಕೋವಿಡ್‌ ಲಾಕ್‌ಡೌನ್‌ನಿಂದಾಗಿ ಸುಮಾರು 14 ಕೋಟಿ ವಲಸೆ ಕಾರ್ಮಿಕರು ತಮ್ಮ ವಾಸ ಸ್ಥಳಗಳಿಗೆ ಮರಳಿದ್ದಾರೆ.
ತಿಂಗಳಿಗೆ 10 ಕೆ.ಜಿ. ಪಡಿತರ ಉಚಿತವಾಗಿ ನೀಡಬೇಕು ಎಂದು ಹೇಳಿದರು.

ಕಾರ್ಮಿಕ ಸಂಘಟನೆಗಳ ಜಂಟಿ ಸಮಿತಿ ಸಂಚಾಲಕ ಎಂ.ಸಿ. ಡೋಂಗ್ರೆ, ಕೆಪಿಆರ್‌ಎಸ್‌ ಜಿಲ್ಲಾಧ್ಯಕ್ಷ ಎಚ್‌.ಆರ್‌. ನವೀನ್ ಕುಮಾರ್‌, ದಲಿತ ಹಕ್ಕುಗಳ ಸಮಿತಿ ಸಂಚಾಲಕ ಎಂ.ಜಿ. ಪೃಥ್ವಿ, ಸಿಐಟಿಯು ಜಿಲ್ಲಾ ಪ್ರಧಾನ ಕಾರ್ಯದರ್ಶಿ ಎಂ.ಬಿ. ಪುಷ್ಪಾ, ಕಾರ್ಯದರ್ಶಿ ಅರವಿಂದ್‌, ಮುಖಂಡರಾದ ಬುಬಾಶಿರ‍್ ಅಹಮ್ಮದ್‌, ಮಧುಸೂದನ್‌ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.