ಹಾಸನ: ರಾಜ್ಯ ಮತ್ತು ಕೇಂದ್ರ ಸರ್ಕಾರದ ಜನ ವಿರೋಧಿ ನೀತಿ, ಇಂಧನ ದರ ಹಾಗೂ ಸೇರಿದಂತೆ ಅಗತ್ಯ ವಸ್ತುಗಳ ಬೆಲೆ ಏರಿಕೆ ಖಂಡಿಸಿ ಜಿಲ್ಲಾ ಕಾಂಗ್ರೆಸ್ ವತಿಯಿಂದನಗರದಲ್ಲಿ ಬುಧವಾರ ಪ್ರತಿಭಟನೆ ನಡೆಸಲಾಯಿತು.
ಜಿಲ್ಲಾ ಕಾಂಗ್ರೆಸ್ ಕಚೇರಿಯಿಂದ ಮೆರವಣಿಗೆಯಲ್ಲಿ ಬಂದ ನೂರಾರು ಕಾರ್ಯಕರ್ತರು, ಮುಖಂಡರು ಕೇಂದ್ರ ಹಾಗೂ ರಾಜ್ಯ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿದರು. ಬಳಿಕ ಜಿಲ್ಲಾಧಿಕಾರಿಆರ್.ಗಿರೀಶ್‌ಗೆ ಮನವಿ ಸಲ್ಲಿಸಿದರು.
ಬಿಜೆಪಿ ಸರ್ಕಾರದ ಜನವಿರೋಧಿ ನೀತಿಗಳಿಂದ ಅಗತ್ಯ ವಸ್ತುಗಳಾದ ಅಡುಗೆ ಅನಿಲ, ಪೆಟ್ರೋಲ್, ಅಡುಗೆ ಎಣ್ಣೆ ಹಾಗೂ ಇತರೆ ದಿನಸಿ ಪದಾರ್ಥಗಳ ಬೆಲೆ ಏರಿಕೆಯಿಂದ ಜನರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದು, ಕೂಡಲೇ ಅಗತ್ಯ ವಸ್ತುಗಳ ಬೆಲೆ ಇಳಿಸಬೇಕುಎಂದು ಆಗ್ರಹಿಸಿದರು.
ಜಿಲ್ಲೆಯಲ್ಲಿ ರಾಗಿ ಖರೀದಿ ಕೇಂದ್ರಗಳಲ್ಲಿ ನಡೆದಿರುವ ಅಕ್ರಮ ವಿರೋಧಿಸಿ ಪ್ರತಿಭಟನೆ ನಡೆಸಿ ಜಿಲ್ಲಾಡಳಿತಕ್ಕೆ ಮನವಿ ಮಾಡಿದ್ದರೂ ಇದುವರೆಗೂ ಕ್ರಮಕೈಗೊಂಡಿಲ್ಲ. ಈ ಬಗ್ಗೆ ಶೀಘ್ರ ತನಿಖೆ ನಡೆಸಿ ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಕ್ರಮ ಜರುಗಿಸಿ ರೈತರಿಗೆ ಉಂಟಾಗಿರುವ ಅನ್ಯಾಯವನ್ನು ಸರಿಪಡಿಸಬೇಕು ಎಂದು ಒತ್ತಾಯಿಸಿದರು.
ಜಿಲ್ಲೆಯಲ್ಲಿ ಕೆಲ ರಾಜಕೀಯ ವ್ಯಕ್ತಿಗಳ ಒತ್ತಡಕ್ಕೆ ಮಣಿದು ಜಿಲ್ಲಾ ಮತ್ತು ತಾಲ್ಲೂಕು ಪಂಚಾಯಿತಿ ಕ್ಷೇತ್ರ ವಿಂಗಡಣೆಯಲ್ಲಿ ಅನ್ಯಾಯವೆಸಗಲಾಗಿದೆ. ಕೆಲವೊಂದು ರಾಜಕೀಯ ಪಕ್ಷಗಳಿಗೆ ಅನುಕೂಲವಾಗುವ ರೀತಿ ಕ್ಷೇತ್ರ ವಿಂಗಡಣೆ ಮಾಡಲಾಗಿದೆ. ಕೂಡಲೇ ಲೋಪವನ್ನು ಸರಿಪಡಿಸಬೇಕು. ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ಜಿಲ್ಲಾಡಳಿತದ ವಿರುದ್ಧ ಪ್ರತಿಭಟನೆ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದರು.
ಕೆಪಿಸಿಸಿ ಸದಸ್ಯ ಎಚ್.ಕೆ. ಮಹೇಶ್ ಮಾತನಾಡಿ, ಅಧಿಕಾರಕ್ಕೆಬಂದರೆ ಯುವ ಜನರಿಗೆ ಉದ್ಯೋಗ ನೀಡುವುದಾಗಿ ಮೋದಿ ಹೇಳಿದ್ದರು. ಆದರೆ ಇಂದು ಬಡವರ ಸ್ಥಿತಿ ಶೋಚನೀಯವಾಗಿದೆ. ರೈಲ್ವೆ, ವಿಮಾನ ನಿಲ್ದಾಣ ಖಾಸಗೀಕರಣ ಮಾಡಲಾಗುತ್ತಿದೆ. ಕೇಂದ್ರ ಸರ್ಕಾರ ದೇಶವನ್ನು ಮಾರಾಟ ಮಾಡಲು ಹೊರಟಿದೆ ಎಂದು ಆರೋಪಿಸಿದರು.
ಕಾಂಗ್ರೆಸ್ ಜಿಲ್ಲಾ ಘಟಕದ ಅಧ್ಯಕ್ಷ ಜಾವಗಲ್ ಮಂಜುನಾಥ್, ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಬಿ.ಎಸ್. ಶ್ವೇತಾ ದೇವರಾಜು, ಕೆಪಿಸಿಸಿ ಉಪಾಧ್ಯಕ್ಷ ಬಿ. ಶಿವರಾಂ, ಜಿಲ್ಲಾ ಪಂಚಾಯಿತಿ ಸದಸ್ಯ ಪಟೇಲ್ ಶಿವಪ್ಪ, ಕೆಪಿಸಿಸಿ ಸದಸ್ಯ ಎಚ್.ಕೆ. ಮಹೇಶ್, ಮುಖಂಡರಾದ ಬಾಗೂರು ಮಂಜೇಗೌಡ, ಫಿರ್ ಸಾಬ್, ಬಿ.ಕೆ. ರಂಗಸ್ವಾಮಿ, ಡಿ.ಸಿ. ಸಣ್ಣಸ್ವಾಮಿ, ಎಸ್.ಎಂ.ಆನಂದ್, ತಾರಾ ಚಂದನ್, ಎಚ್.ಪಿ. ಪುಟ್ಟರಾಜು, ಕೆಲವತ್ತಿ ಸೋಮಶೇಖರ್, ಶಿವಣ್ಣ,ಶೇಷೇಗೌಡ ಭಾಗವಹಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.