ADVERTISEMENT

ಸಾಮಾಜಿಕ ನ್ಯಾಯ ದೊರಕಿಸಿಕೊಟ್ಟ ಸಂವಿಧಾನ: ಶಾಸಕ ಎಚ್‌.ಕೆ. ಕುಮಾರಸ್ವಾಮಿ

ಶಾಸಕ ಎಚ್‌.ಕೆ. ಕುಮಾರಸ್ವಾಮಿ ಅಭಿಪ್ರಾಯ

​ಪ್ರಜಾವಾಣಿ ವಾರ್ತೆ
Published 15 ಏಪ್ರಿಲ್ 2021, 4:57 IST
Last Updated 15 ಏಪ್ರಿಲ್ 2021, 4:57 IST
ಹಾಸನದ ಹಾಸನಾಂಬ ಕಲಾ ಕ್ಷೇತ್ರದಲ್ಲಿ ಆಯೋಜಿಸಿದ್ದ ಡಾ.ಬಿ.ಆರ್ ಅಂಬೇಡ್ಕರ್ ಜಯಂತಿಯಲ್ಲಿ ಗಣ್ಯರು ಅಂಬೇಡ್ಕರ್‌ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದರು
ಹಾಸನದ ಹಾಸನಾಂಬ ಕಲಾ ಕ್ಷೇತ್ರದಲ್ಲಿ ಆಯೋಜಿಸಿದ್ದ ಡಾ.ಬಿ.ಆರ್ ಅಂಬೇಡ್ಕರ್ ಜಯಂತಿಯಲ್ಲಿ ಗಣ್ಯರು ಅಂಬೇಡ್ಕರ್‌ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದರು   

ಹಾಸನ: ‘ಅಂಬೇಡ್ಕರ್ ಅವರು ನೀಡಿದ ಸಂವಿಧಾನವು ಆರ್ಥಿಕ, ರಾಜಕೀಯ, ಸಾಮಾಜಿಕ ನ್ಯಾಯವನ್ನು ಸಮಾಜಕ್ಕೆ ದೊರಕಿಸಿ ಕೊಟ್ಟಿದೆ’ ಎಂದು ಶಾಸಕ ಎಚ್.ಕೆ. ಕುಮಾರಸ್ವಾಮಿ ಹೇಳಿದರು.

ನಗರದ ಹಾಸನಾಂಬ ಕಲಾ ಕ್ಷೇತ್ರದಲ್ಲಿ ಬುಧವಾರ ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಆಶ್ರಯದಲ್ಲಿ ಆಯೋಜಿಸಿದ್ದ ಡಾ.ಬಿ.ಆರ್ ಅಂಬೇಡ್ಕರ್ ಅವರ 130ನೇ ಜಯಂತಿ ಉದ್ಘಾಟಿಸಿ ಮಾತನಾಡಿದ ಅವರು, ‘ಶೋಷಿತರಿಗೆ ಧ್ವನಿ ನೀಡುವ ನಿಟ್ಟಿನಲ್ಲಿ ಸಂವಿಧಾನ ದೇಶದ ಆಡಳಿತಕ್ಕೆ ಕನ್ನಡಿಯಾಗಿದೆ’ ಎಂದರು.

‘ಒಂದು ದೇಶ ಆರ್ಥಿಕವಾಗಿ ಅಭಿವೃದ್ಧಿಯಾಗಬೇಕಾದರೆ ಸಾಮಾಜಿಕ ಸಮಾನತೆ ಬಹುಮುಖ್ಯ ಪಾತ್ರ ವಹಿಸುತ್ತದೆ. ದೇಶದಲ್ಲಿ ಮೂಲ ಸಮಸ್ಯೆಗಳಾದ ಅಸ್ಪೃಶ್ಯತೆ, ಜಾತಿ ವ್ಯವಸ್ಥೆ ಹೋಗಲಾಡಿಸಿ ಸಹಬಾಳ್ವೆ, ಸಹೋದರತೆಯಿಂದಿರಲು ಅಂಬೇಡ್ಕರ್ ಪ್ರತಿಪಾದನೆ ಮಾಡಿದ್ದಾರೆ’ ಎಂದರು.

ADVERTISEMENT

‘ದೇಶದಲ್ಲಿ ಸಾಕಷ್ಟು ಕಾನೂನುಗಳು ಜಾರಿಯಲ್ಲಿವೆ. ಅವುಗಳನ್ನು ಉಪಯೋಗಿಸಿಕೊಂಡು ಶೋಷಿತ ವರ್ಗದ ಮೇಲೆ ನಡೆಯುವ ದೌರ್ಜನ್ಯಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ ಕಾರ್ಯಪ್ರವೃತ್ತರಾಗಬೇಕು’ ಎಂದು ತಿಳಿಸಿದರು.

ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಬಿ.ಎಸ್‌. ಶ್ವೇತಾ ದೇವರಾಜ್ ಮಾತನಾಡಿ, ‘ಅಂಬೇಡ್ಕರ್ ನೀಡಿರುವ ಸಂವಿಧಾನ ಕೇವಲ ಒಂದು ಸಮುದಾಯಕ್ಕೆ ಸೀಮಿತವಾಗಿಲ್ಲ. ಎಲ್ಲ ಸಮುದಾಯಗಳ ಹಾಗೂ ಜನ ಸಾಮಾನ್ಯರ ಶಕ್ತಿಯಾಗಿದೆ’ ಎಂದರು.

‘ಅಸ್ಪೃಶ್ಯತೆ ಎಂಬುದು ಸಮಾಜದ ಒಂದು ದೊಡ್ಡ ಪಿಡುಗಾಗಿದ್ದು, ಅದನ್ನು ಹೋಗಲಾಡಿಸುವ ನಿಟ್ಟಿನಲ್ಲಿ ಆಡಳಿತ ವರ್ಗವು ಕಾರ್ಯ ನಿರ್ವಹಿಸಬೇಕು. ಅಂಬೇಡ್ಕರ್ ಅವರು ತಮ್ಮ ಜೀವನದಲ್ಲಿ ಅನುಭವಿಸಿದ ಯಾತನೆಗಳನ್ನು ಮುಂದಿನ ಪೀಳಿಗೆ ಅನುಭವಿಸದಂತೆ ಸಂವಿಧಾನ ರೂಪಿಸುವುದರ ಜೊತೆಗೆ ಹೆಣ್ಣು ಮಕ್ಕಳಿಗೆ ಸಮಾಜದಲ್ಲಿ ಹೆಚ್ಚಿನ ಸ್ಥಾನಮಾನ ದೊರೆಯುವಂತೆ ಅವಕಾಶ ಕಲ್ಪಿಸಿದ್ದಾರೆ’ ಎಂದು ತಿಳಿಸಿದರು.

ಜಿಲ್ಲಾಧಿಕಾರಿ ಆರ್. ಗಿರೀಶ್ ಮಾತನಾಡಿ, ಅಂ‘ಬೇಡ್ಕರ್ ಪ್ರಗತಿಪರ ಚಿಂತನೆಗಳನ್ನು ಅಳವಡಿಸಿಕೊಳ್ಳುವುದರಿಂದ ಸಮಾಜದಲ್ಲಿ ಉನ್ನತ ಮಟ್ಟಕ್ಕೆ ಬೆಳವಣಿಗೆಯಾಗಬಹುದು. ಅಂಬೇಡ್ಕರ ಆಶಯದಂತೆ ವ್ಯಕ್ತಿ ಸಮಾಜದ ಶಕ್ತಿಯಾದರೆ ಒಂದು ಕುಟುಂಬ ಮುಂದುವರೆಯುವ ಜೊತೆಗೆ ಸಮಾಜವು ಮುಂದುವರೆಯುತ್ತದೆ’ ಎಂದರು.

ಸಾಗರದ ಇಂದಿರಾ ಗಾಂಧಿ ಪ್ರಥಮ ದರ್ಜೆ ಕಾಲೇಜಿನ ಪ್ರೊ.ಬಿ.ಎಲ್. ರಾಜು ವಿಶೇಷ ಉಪನ್ಯಾಸ ನೀಡಿದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶ್ರೀನಿವಾಸ್ ಗೌಡ, ಜಿಲ್ಲಾ ಪಂಚಾಯಿತಿ ಸಿಇಒ ಬಿ.ಎ. ಪರಮೇಶ್, ತಾಲ್ಲೂಕು ಪಂಚಾಯಿತಿ ಅಧ್ಯಕ್ಷೆ ರಂಜಿನಿ, ತಹಶೀಲ್ದಾರ್ ಶಿವಶಂಕರಪ್ಪ, ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕ ಮಂಜುನಾಥ್, ಜಿಲ್ಲಾ ಸರ್ಕಾರಿ ನೌಕರರ ಸಂಘದ ಅಧ್ಯಕ್ಷರಾದ ಕೃಷ್ಣೇಗೌಡ, ದಲಿತ ಸಂಘರ್ಷ ಸಮಿತಿ ಮುಖಂಡ ಎಚ್‌.ಕೆ. ಸಂದೇಶ್ ಹಾಗೂ ಇತರರು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.