ADVERTISEMENT

ಮಹಿಳಾ ಕಾಲೇಜಿನಲ್ಲಿ ಲಸಿಕಾ ಕಾರ್ಯಕ್ರಮಕ್ಕೆ ಪ್ರೀತಂಗೌಡ ಚಾಲನೆ

​ಪ್ರಜಾವಾಣಿ ವಾರ್ತೆ
Published 23 ಜುಲೈ 2022, 8:06 IST
Last Updated 23 ಜುಲೈ 2022, 8:06 IST
ಹಾಸನದ ಗಂಧದ ಕೋಠಿ ಮಹಿಳಾ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ವಿದ್ಯಾರ್ಥಿನಿಯರಿಗೆ ಬೂಸ್ಟರ್‌ ಡೋಸ್‌ ಲಸಿಕೆ ಹಾಕಲಾಯಿತು.
ಹಾಸನದ ಗಂಧದ ಕೋಠಿ ಮಹಿಳಾ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ವಿದ್ಯಾರ್ಥಿನಿಯರಿಗೆ ಬೂಸ್ಟರ್‌ ಡೋಸ್‌ ಲಸಿಕೆ ಹಾಕಲಾಯಿತು.   

ಹಾಸನ: ಕೋವಿಡ್ ಸಂಬಂಧಿ ಲಸಿಕೆ ಪಡೆದಿದ್ದೇವೆ ಎಂದು ಮೈಮರೆಯದೇ, ಎಚ್ಚರಿಕೆಯಿಂದ ಇರಬೇಕು ಎಂದು ಶಾಸಕ ಹಾಗೂ ಕಾಲೇಜು ಅಭಿವೃದ್ಧಿ ಸಮಿತಿ ಅಧ್ಯಕ್ಷ ಪ್ರೀತಂ ಜೆ.ಗೌಡ ಹೇಳಿದರು.

ನಗರದ ಮಹಿಳಾ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ (ಗಂಧದಕೋಠಿ) ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ತಾಲ್ಲೂಕು ಆರೋಗ್ಯಾಧಿಕಾರಿಗಳ ಕಚೇರಿ ಮತ್ತು ಮಹಿಳಾ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಆಶ್ರಯದಲ್ಲಿ ಶುಕ್ರವಾರ ನಡೆದ ತಾಲ್ಲೂಕು ಮಟ್ಟದ 18 ವರ್ಷ ಮೇಲಿನವರ ಬೂಸ್ಟರ್ ಡೋಸ್ ಲಸಿಕೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ದೇಶದಲ್ಲಿ ವೈದ್ಯರು ತಮ್ಮ ಜೀವದ ಹಂಗು ತೊರೆದು ಕೋವಿಡ್ ನಿಯಂತ್ರಣಕ್ಕೆ ಹಗಲಿರುಳು ಶ್ರಮಿಸುತ್ತಿದ್ದಾರೆ. ಎಲ್ಲರೂ ತಪ್ಪದೆ ಬೂಸ್ಟರ್ ಲಸಿಕೆಯನ್ನು ಪಡೆಯಬೇಕು. ಆತಂಕದಿಂದ ಹೊರ ಬಂದು ಆರೋಗ್ಯವನ್ನು ಕಾಪಾಡಿಕೊಳ್ಳಬೇಕು ಎಂದು ಸಲಹೆ ನೀಡಿದರು.

ADVERTISEMENT

‘ದೇಶವನ್ನು ಪೋಲಿಯೊ ಮುಕ್ತ ದೇಶವನ್ನಾಗಿಸಲು ಸಾಕಷ್ಟು ವರ್ಷಗಳು ಕಳೆದಿದೆ. ಆದರೆ ಕೋವಿಡ್‌ಗೆ ಸಂಬಂಧಿಸಿದಂತೆ ದೇಶದ ವಿಜ್ಞಾನಿಗಳು ಲಸಿಕೆ ಕಂಡು ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ. ಎರಡನೇ ಅಲೆಯ ನಂತರ ಕೋವಿಡ್ ಕೇವಲ ಶೀತಕ್ಕೆ ಸೀಮಿತವಾಗಿದೆ. ಹೀಗಾಗಿ ನಮ್ಮ ವಿಜ್ಞಾನಿಗಳು ಲಸಿಕೆ ಕಂಡು ಹಿಡಿದಿರುವುದು ನಮ್ಮ ಹೆಮ್ಮೆಯಾಗಿದೆ’ ಎಂದರು.

ತಾಲ್ಲೂಕು ಆರೋಗ್ಯಾಧಿಕಾರಿ ಡಾ.ಬಿ.ಎಂ.ವಿಜಯ್ ಮಾತನಾಡಿ, ದೇಶದಲ್ಲಿ ಕೋವಿಡ್ ನಿಯಂತ್ರಣಕ್ಕೆ ವೈದ್ಯಕೀಯ ರಂಗ ಸಾಕಷ್ಟು ಕೆಲಸವನ್ನು ಮಾಡುತ್ತಿದೆ. ಕೋವಿಡ್ ಬೂಸ್ಟರ್ ಡೋಸ್‌ ಲಸಿಕೆ ಪಡೆಯುವ ಮೂಲಕ ತಮ್ಮ ಆರೋಗ್ಯವನ್ನು ಕಾಪಾಡಿಕೊಳ್ಳಬೇಕು. ಈ ಲಸಿಕೆ ಪಡೆದವರು ಇತರರಿಗೂ ಅರಿವು ಮೂಡಿಸಬೇಕು ಎಂದು ತಿಳಿಸಿದರು.

ಕಾಲೇಜಿನ ಪ್ರಾಂಶುಪಾಲೆ ಡಾ.ಕೆ.ಜಿ.ಕವಿತಾ ಅಧ್ಯಕ್ಷತೆ ವಹಿಸಿದ್ದರು. ಇತಿಹಾಸ ವಿಭಾಗದ ಮುಖ್ಯಸ್ಥ ಡಾ.ಸಿ.ಎಲ್.ಶಿವಕುಮಾರ್ ಸ್ವಾಗತಿಸಿದರು, ಪ್ರಾಧ್ಯಾಪಕ ಶಿವಪ್ಪ ನಿರೂಪಿಸಿದರು. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಶಿವಸ್ವಾಮಿ, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಕೆ.ಕೆ.ಮಂಜುಳಾ, ಜಿಲ್ಲಾ ಆರ್‌ಸಿಎಚ್ ಅಧಿಕಾರಿ ಡಾ.ಎಚ್.ಸಿ.ಚೇತನ್, ಆರೋಗ್ಯ ಶಿಕ್ಷಣಾಧಿಕಾರಿ ಆರ್.ಗೀತಾ, ವಾಣಿಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥೆ ಎಚ್.ಇ.ಸಾವಿತ್ರಿ, ಅರ್ಥಶಾಸ್ತ್ರ ವಿಭಾಗದ ಮುಖ್ಯಸ್ಥೆ ಎಂ.ವಿ.ಹೇಮಾವತಿ ಕಾಲೇಜಿನ ಪ್ರಾಧ್ಯಾಪಕರು, ಬೋಧಕೇತರ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.