ಹಾಸನ: ವರ್ಷಕ್ಕೊಮ್ಮೆ ದರ್ಶನ ಭಾಗ್ಯ ಕರುಣಿಸುವ ಅಧಿದೇವತೆ ಹಾಸನಾಂಬೆ ದೇವಸ್ಥಾನದ ಬಾಗಿಲು ವಿಧ್ಯುಕ್ತವಾಗಿ ತೆರೆಯಲಾಯಿತು.
ಅಶ್ವಯುಜ ಮಾಸ ಹುಣ್ಣಿಮೆ ನಂತರ ಬರುವ ಮೊದಲ ಗುರುವಾರ ವಿಧಿ ವಿಧಾನದಂತೆ ಅರ್ಚಕರು ಪೂಜೆ ಸಲ್ಲಿಸಿದ ಬಳಿಕ ಮಧ್ಯಾಹ್ನ 12.40ಕ್ಕೆ ಧರ್ಮಸ್ಥಳದ ಧರ್ಮಧಿಕಾರಿ ವೀರೇಂದ್ರ ಹೆಗ್ಗಡೆ, ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ, ಆಡಳಿತಾಧಿಕಾರಿ ಎಚ್.ಎಲ್.ನಾಗರಾಜ್, ತಹಶೀಲ್ದಾರ್ ಶಿವಶಂಕರಪ್ಪ ಸಮ್ಮುಖದಲ್ಲಿ ದೇಗುಲದ ಗರ್ಭಗುಡಿ ಬಾಗಿಲ ಬೀಗ ಮುದ್ರೆ ತೆರೆಯಲಾಯಿತು. ಮೊದಲ ದಿನವೇ ದರ್ಶನ ಪಡೆಯಲು ಭಕ್ತರು ಮುಗಿಬಿದ್ದರು.
ಬೆಳಿಗ್ಗೆ ದೇಗುಲದ ಆವರಣದಲ್ಲಿ ಧಾರ್ಮಿಕ ಕಾರ್ಯಕ್ರಮಗಳು ಆರಂಭಗೊಂಡಿತು. ಸಂಪ್ರದಾಯದಂತೆ ತಳವಾರ ವಂಶದ ನಂಜರಾಜ್ ಅರಸ್ ಅವರು ಬಾಳೆ ಕಂದು ಕಡಿಯುವ ಮೂಲಕ ಬಾಗಿಲು ತೆರೆಯಲು ಅನುವು ಮಾಡಿಕೊಟ್ಟರು. ಹಾಸನಾಂಬ, ಸಿದ್ದೇಶ್ವರ ಜಾತ್ರಾ ಮಹೋತ್ಸವದ ಅಂಗವಾಗಿ ದೇವಾಲಯವನ್ನು ವಿವಿಧ ಪುಷ್ಪ ಮತ್ತು ಹಣ್ಣುಗಳಿಂದ ಅಲಂಕರಿಸಲಾಗಿತ್ತು. ಮೊದಲ ಮತ್ತು ಅಂತಿಮ ದಿನ ಸಾರ್ವಜನಿಕ ದರ್ಶನ ಇರುವುದಿಲ್ಲ. ಉಳಿದ ಏಳು ದಿನ ಅಹೋರಾತ್ರಿ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ.
ಮೊದಲ ದಿನ ಮಧ್ಯಾಹ್ನ ಬಾಗಿಲು ತೆರೆದು ರಾತ್ರಿ 11.30ಕ್ಕೆ ಮುಚ್ಚಲಾಯಿತು. ನ. 2ರಿಂದ ಬೆಳಿಗ್ಗೆ 5 ರಿಂದ ಸಾವರ್ಜನಿಕರ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.