ADVERTISEMENT

ಸಿಬಿಐ ತನಿಖೆಗೆ ರೇವಣ್ಣ ಒತ್ತಾಯ

ಪಿಎಸ್ಐ ಕಿರಣ್ ಆತ್ಮಹತ್ಯೆ ಪ್ರಕರಣ

​ಪ್ರಜಾವಾಣಿ ವಾರ್ತೆ
Published 1 ಆಗಸ್ಟ್ 2020, 8:04 IST
Last Updated 1 ಆಗಸ್ಟ್ 2020, 8:04 IST

ಹಾಸನ: ಚನ್ನರಾಯಪಟ್ಟದ ಪೊಲೀಸ್‌ ಸಬ್‌ ಇನ್‌ಸ್ಪೆಕ್ಟರ್‌ ಕಿರಣ್ ಕುಮಾರ್‌ ಆತ್ಮಹತ್ಯೆ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಬೇಕು ಎಂದು ಶಾಸಕ ಎಚ್‌.ಡಿ.ರೇವಣ್ಣ ಆಗ್ರಹಿಸಿದರು.

ಮೃತ ಕಿರಣ್ ಮನೆಗೆ ಭೇಟಿ ನೀಡಿ ಬಳಿಕ ಸುದ್ದಿಗಾರರ ಜೊತೆ ಮಾತನಾಡಿ, ‘ಯಾವ ಅಧಿಕಾರಿ ಹೆದರಿಸಿದರು. ಯಾರು ಎಷ್ಟು ಹೊತ್ತಿಗೆ ಕರೆ ಮಾಡಿದ್ದರು ಗೊತ್ತಾಗಬೇಕು. ಆದರೆ ಅವರ ಮೊಬೈಲ್‌ ಫೋನ್ ಅನ್ನು ಏಕೆ ಜಪ್ತಿ ಮಾಡಿಕೊಂಡು ಹೋಗಿದ್ದಾರೆ’ ಎಂದು ಪ್ರಶ್ನಿಸಿದರು.

‘ಐಜಿಪಿ ಅವರು ಕಿರಣ್‌ನನ್ನು ಡಿಸ್‌ಮಿಸ್‌ ಮಾಡುವುದಾಗಿ ಹೇಳಿದ್ದರಂತೆ ಅಂಥ ಜನರು ಮಾತನಾಡಿಕೊಳ್ಳುತ್ತಿದ್ದಾರೆ. ಹಾಗಾಗಿಯೇ ಅವರು ಆತ್ಮಹತ್ಯೆ ಮಾಡಿಕೊಂಡಿರಬಹುದು. ಕರ್ತವ್ಯ ನಿರ್ವಹಿಸಿದ ಕಡೆ ಕಿರಣ್ ಒಳ್ಳೆಯ ಹೆಸರು ಗಳಿಸಿದ್ದರು. ಒಂದು ರೂಪಾಯಿ ಭ್ರಷ್ಟಾಚಾರ ಮಾಡಿರುವ ಬಗ್ಗೆ ಜನರಿಂದ ಆರೋಪ ಬಂದಿರಲಿಲ್ಲ. ಈ ರೀತಿಯ ಘಟನೆಗಳು ನಡೆದರೆ ಜಿಲ್ಲೆಯಲ್ಲಿ ಪ್ರಾಮಾಣಿಕ ಅಧಿಕಾರಿಗಳು ಕೆಲಸ ಮಾಡುವುದು ಹೇಗೆ’ ಎಂದು ಆಕ್ರೋಶ ವ್ಯಕ್ತಪಡಿಸಿದರು.

ADVERTISEMENT

‘ಪ್ರಾಮಾಣಿಕ ಅಧಿಕಾರಿಗಳಿಗೆ ಜಿಲ್ಲೆಯಲ್ಲಿ ಬೆಲೆಯಿಲ್ಲದಂತಾಗಿದೆ. ಜಿಲ್ಲೆಯಲ್ಲಿ ಪೊಲೀಸ್ ಇಲಾಖೆ ಅಧಿಕಾರಿಗಳ ವರ್ಗಾವಣೆಯನ್ನು ಸಿಪಿಐ ಒಬ್ಬರಿಗೆ ವಹಿಸಲಾಗಿದೆ’ ಎಂದು ಆರೋಪಿಸಿದರು.

ಶಾಸಕ ಸಿ.ಎನ್‌.ಬಾಲಕೃಷ್ಣ, ವಿಧಾನಪರಿಷತ್‌ ಸದಸ್ಯ ಎಂ.ಎ.ಗೋಪಾಲಸ್ವಾಮಿ ಅವರು ಸೂಕ್ತ ತನಿಖೆಗೆ ಆಗ್ರಹಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.