ಹಾಸನ: ನಿವೃತ್ತಿ ಹೊಂದಿರುವ ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರಿಗೆ 2011- 12 ರಿಂದ ಗ್ರಾಚ್ಯುಟಿ (ನಿವೃತ್ತಿ ಉಪಧನ) ಜಾರಿಗೊಳಿಸಲು ಒತ್ತಾಯಿಸಿ ಎಐಟಿಯುಸಿ ನೇತೃತ್ವದಲ್ಲಿ ನಿವೃತ್ತ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರು ಶನಿವಾರ ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.
ಈ ವೇಳೆ ಮಾತನಾಡಿದ ಎಐಟಿಯುಸಿ ಜಿಲ್ಲಾ ಘಟಕದ ಅಧ್ಯಕ್ಷೆ ಜಯಲಕ್ಷ್ಮಿ, ಐವತ್ತು ವರ್ಷಗಳಿಂದ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರಾಗಿ ಕೆಲಸ ಮಾಡಿದ್ದು, ಇದೀಗ ನಿವೃತ್ತಿ ಹೊಂದಿದ್ದೇವೆ. ಆದರೆ ಸರ್ಕಾರದಿಂದ ಪಿಂಚಣಿ, ಗ್ರಾಚ್ಯುಟಿ ಬಿಡುಗಡೆ ಮಾಡದೇ ಬಹುತೇಕ ಕಾರ್ಯಕರ್ತೆಯರು ಆರ್ಥಿಕವಾಗಿ ಸಂಕಷ್ಟಕ್ಕೆ ಈಡಾಗಿದ್ದೇವೆ ತಿಳಿಸಿದರು.
ಬಹುತೇಕರು ನಿವೃತ್ತಿ ನಂತರ ಹಣದ ಮುಗ್ಗಟ್ಟಿನಿಂದ ಭಿಕ್ಷೆ ಬೇಡುವ ಪರಿಸ್ಥಿತಿಗೆ ಬಂದಿದ್ದಾರೆ. ರಕ್ತದೊತ್ತಡ, ಮಧುಮೇಹ, ಹೃದಯ ಕಾಯಿಲೆ ಸೇರಿದಂತೆ ನಾನಾ ಸಮಸ್ಯೆ ಎದುರಿಸುತ್ತಿದ್ದು. ಸರ್ಕಾರ ಈಗಲಾದರೂ ನಮ್ಮ ಮನವಿಗೆ ಸ್ಪಂದಿಸಲಿ ಎಂದು ಆಗ್ರಹಿಸಿದರು.
ನಮ್ಮ ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿ ಹಲವು ಬಾರಿ ಪ್ರತಿಭಟನೆ ಮಾಡಿದರೂ ಸರ್ಕಾರ ನಮ್ಮ ಸಮಸ್ಯೆಗೆ ಸ್ಪಂದಿಸಿಲ್ಲ. ಸುಪ್ರೀಂ ಕೋರ್ಟ್ ಸಹ ಐದು ವರ್ಷ ಕರ್ತವ್ಯ ನಿರ್ವಹಿಸಿದವರಿಗೆ ಗ್ರಾಚ್ಯುಟಿ ನೀಡಬೇಕು ಎಂದು ಆದೇಶಿಸಿದೆ. ಈ ಆದೇಶವನ್ನು ಪರಿಗಣಿಸದೇ ಸರ್ಕಾರ ವಿಳಂಬ ಧೋರಣೆ ಅನುಸರಿಸುತ್ತಿದೆ. ನಮ್ಮ ಹೋರಾಟಕ್ಕೆ ಸ್ಪಂದಿಸದಿದ್ದಲ್ಲಿ ಮುಂದಿನ ದಿನಗಳಲ್ಲಿ ರಾಜ್ಯಮಟ್ಟದ ಹೋರಾಟವಾಗಿ ಜೂನ್ 4ರಂದು ಉಗ್ರ ಪ್ರತಿಭಟನೆ ಹಮ್ಮಿಕೊಳ್ಳಲಿದ್ದೇವೆ ಎಂದು ಎಚ್ಚರಿಸಿದರು.
ಎಐಟಿಯುಸಿ ಜಿಲ್ಲಾ ಸಮಿತಿಯ ಗೌರವಾಧ್ಯಕ್ಷ ಎಂ.ಸಿ. ಡೋಂಗ್ರೆ, ಕಾರ್ಯಾಧ್ಯಕ್ಷೆ ಲೀಲಾ ಡಯಾಸ್, ಪ್ರಧಾನ ಕಾರ್ಯದರ್ಶಿ ವೇದಾವತಿ, ಖಜಾಂಚಿ ಪಿ.ಡಿ. ನಾಗರತ್ನಾ, ಪುಷ್ಪಾ, ಮಂಜಮ್ಮ, ಸಾವಿತ್ರಮ್ಮ, ಅನ್ನಪೂರ್ಣ ಸೇರಿದಂತೆ ಹಲವರು ಭಾಗವಹಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.