ADVERTISEMENT

ದೌರ್ಜನ್ಯ ಖಂಡಿಸಿ ದಲಿತ ಸಂಘಟನೆಗಳ ಒಕ್ಕೂಟ ಪ್ರತಿಭಟನೆ

ವರ್ಷದಲ್ಲಿ ಏಳು ಯುವಕರ ಕೊಲೆ: ಮುಖಂಡರ ಆರೋಪ

​ಪ್ರಜಾವಾಣಿ ವಾರ್ತೆ
Published 11 ಆಗಸ್ಟ್ 2020, 12:41 IST
Last Updated 11 ಆಗಸ್ಟ್ 2020, 12:41 IST
ಹಾಸನ ಜಿಲ್ಲಾಧಿಕಾರಿ ಕಚೇರಿ ಎದುರು ದಲಿತ ಸಂಘಟನೆಗಳ ಒಕ್ಕೂಟದ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು. 
ಹಾಸನ ಜಿಲ್ಲಾಧಿಕಾರಿ ಕಚೇರಿ ಎದುರು ದಲಿತ ಸಂಘಟನೆಗಳ ಒಕ್ಕೂಟದ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು.    

ಹಾಸನ:'ಜಿಲ್ಲೆಯಲ್ಲಿ ಪರಿಶಿಷ್ಟ ಜಾತಿ ಮತ್ತು ವರ್ಗದ ಜನರ ಮೇಲೆ ನಡೆಯುತ್ತಿರುವ ದೌರ್ಜನ್ಯ ತಡೆಯುವಲ್ಲಿ ಜಿಲ್ಲಾಡಳಿತ ವಿಫಲವಾಗಿದೆ’ ಎಂದು ಆರೋಪಿಸಿ ದಲಿತ ಸಂಘಟನೆಗಳ ಒಕ್ಕೂಟದ ನೇತೃತ್ವದಲ್ಲಿ ಮಂಗಳವಾರ ಪ್ರತಿಭಟನೆ ನಡೆಸಲಾಯಿತು

ನಗರದ ಹೇಮಾವತಿ ಪ್ರತಿಮೆ ಬಳಿಯಿಂದ ಬಿ.ಆರ್‌. ಅಂಬೇಡ್ಕರ್ ಅವರ ಭಾವಚಿತ್ರದೊಂದಿಗೆ ಜಿಲ್ಲಾಧಿಕಾರಿ ಕಚೇರಿವೆರೆಗೆ ಮೆರವಣಿಗೆ ನಡೆಸಿದರು. ಎನ್.ಆರ್. ವೃತ್ತದಲ್ಲಿ ಮಾನವ ಸರಪಳಿ ನಿರ್ಮಿಸಿ, ಕೆಲ ಕಾಲ ರಸ್ತೆ ತಡೆ ನಡೆಸಿದರು.

‘ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಎಸ್‌ಸಿ, ಎಸ್‌ಟಿ ಜನರ ಮೇಲೆ ದೌರ್ಜನ್ಯ ಪ್ರಕರಣಗಳು ಹೆಚ್ಚಾಗಿವೆ. 2019ರ ಏ.1 ರಿಂದ 2020ರ ಜುಲೈ 17ರ ವರೆಗೆ ಜಿಲ್ಲೆಯಲ್ಲಿ 7 ಜನ ಪರಿಶಿಷ್ಟ ಜಾತಿಯ ಯುವಕರ ಹತ್ಯೆ ಮಾಡಲಾಗಿದೆ. ದೈಹಿಕ ಹಲ್ಲೆ, ಜಾತಿ ನಿಂದನೆ ಪ್ರಕರಣಗಳು ನಿತ್ಯ ವರದಿಯಾಗುತ್ತಲೇ ಇದ್ದು, ಈವರೆಗೆ ಜಿಲ್ಲೆಯಲ್ಲಿ 106 ಪ್ರಕರಣಗಳು ದಾಖಲಾಗಿವೆ. ಆದರೆ, ತಪ್ಪಿತಸ್ಥರ ವಿರುದ್ಧ ಕ್ರಮ ಜರುಗಿಸುತ್ತಿಲ್ಲ’ ಎಂದು ಪ್ರತಿಭಟನಾಕಾರರು ಆರೋಪಿಸಿದರು.

ADVERTISEMENT

‘ಮೊದಲ ಎರಡು ಕೊಲೆ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಿದ ಜಿಲ್ಲಾಧಿಕಾರಿ, ಪೊಲೀಸ್‌ ವರಿಷ್ಠಾಧಿಕಾರಿ ಹಾಗೂ ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳು, ಮೃತ ವ್ಯಕ್ತಿಯ ಮನೆಗಳಿಗೆ ಭೇಟಿ ನೀಡಿ ಸಾಂತ್ವನ ಹೇಳಿದರು. ಆದರೆ, ನಂತರದ ದಿನಗಳಲ್ಲಿ ಅವರು ಈ ವಿಚಾರವನ್ನು ನಿರ್ಲಕ್ಷ್ಯ ಮಾಡಿದರು. ಆರೋಪಿಗಳನ್ನು ಬಂಧಿಸಿ, ಶಿಕ್ಷೆ ಕೊಡಿಸುವಲ್ಲಿ ವಿಫಲರಾದರು’ ಎಂದು ಕಿಡಿ ಕಾರಿದರು.

‘ಪರಿಶಿಷ್ಟರ ಮೇಲೆ ದೌರ್ಜನ್ಯ ಪ್ರಕರಣ ದಾಖಲಾದರೇ, ಆರೋಪಿಗಳಿಂದ ಪ್ರತಿದೂರು ದಾಖಲಿಸಲಾಗುತ್ತಿದೆ. ಇದರಿಂದ
ದೌರ್ಜನ್ಯಕ್ಕೆ ಒಳಗಾದವರಿಗೆ ನ್ಯಾಯ ಸಿಗುತ್ತಿಲ್ಲ. ಮುಂದಿನ ದಿನಗಳಲ್ಲಿ ಇಂತಹ ಅವಾಂತರ ನಡೆಯದಂತೆ ಎಚ್ಚರ ವಹಿಸಬೇಕು. ಮೃತರ ಕುಟುಂಬದ ಸದಸ್ಯರಿಗೆ ಸೂಕ್ತ ಪರಿಹಾರ ನೀಡಬೇಕು ಮತ್ತು ಒಬ್ಬರಿಗೆ ಸರ್ಕಾರಿ ಕೆಲಸ ನೀಡಬೇಕು’ಎಂದು ಆಗ್ರಹಿಸಿದರು.

ಮುಖಂಡರಾದ ಎಚ್‌.ಕೆ.ಸಂದೇಶ್‌, ಆರ್‌ಪಿಐ ಸತೀಶ್‌, ಮಾದಿಗ ದಂಡೋರ ಮುಖಂಡ ವಿಜಯ್‍ಕುಮಾರ್, ದಲಿತ ಸಂಘರ್ಷ ಸಮಿತಿ ಮುಖಂಡ ಕೆ. ಈರಪ್ಪ, ಮರಿಜೋಸೆಫ್‌, ಛಲವಾದಿ ಮಹಾಸಭಾದ ಪುಟ್ಟರಾಜು ಭಾಗವಹಿಸಿದ್ದರು.

‘ಕೊಲೆ ಮತ್ತು ದೌರ್ಜನ್ಯ ಪ್ರಕಣಗಳು ಭೂ ವ್ಯಾಜ್ಯ ಮತ್ತು ವೈಯಕ್ತಿಕ ಕಾರಣಗಳಿಂದ ನಡೆದಿವೆ. ಪರಿಶಿಷ್ಟ ಜಾತಿ ಮತ್ತು
ವರ್ಗದವರ ಮೇಲೆ ನಡೆದಿರುವ ದೌರ್ಜನ್ಯ ಪ್ರಕರಣಗಳಿಗೆ ಸಂಬಂಧಿಸಿದಂತೆ ಆರೋಪಿಗಳನ್ನು ಬಂಧಿಸಲಾಗಿದೆ. ಕೊರೊನಾ ಸೋಂಕು ಹರಡುತ್ತಿರುವ ಕಾರಣ ಪರಿಶಿಷ್ಟ ಜಾತಿ ಮತ್ತು ವರ್ಗದ ಕುಂದು ಕೊರತೆ ಸಭೆ ಕರೆಯಲು ಆಗಿರಲಿಲ್ಲ’ ಎಂದು ಪೊಲೀಸ್‌ ವರಿಷ್ಠಾಧಿಕಾರಿ ಆರ್‌.ಶ್ರೀನಿವಾಸ್‌ ಗೌಡ ತಿಳಿಸಿದರು.

‘ವಾರದೊಳಗೆ ಜಿಲ್ಲಾ ಮಟ್ಟದ ಎಸ್‌ಸಿ, ಎಸ್‌ಟಿ ಕುಂದು ಕೊರತೆ ಸಭೆ ಕರೆಯಲಾಗುವುದು. ಪರಿಶಿಷ್ಟರ ಸಮಸ್ಯೆಗಳಿಗೆ ಶೀಘ್ರ ಸ್ಪಂದಿಸಲಾಗುವುದು. ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುವಂತೆ ಪೊಲೀಸ್‌ ವರಿಷ್ಠಾಧಿಕಾರಿಗೆ ಸೂಚನೆ ನೀಡಲಾಗುವುದು’ ಎಂದುಜಿಲ್ಲಾಧಿಕಾರಿಆರ್‌. ಗಿರಿಶ್‌ ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.