ADVERTISEMENT

ಡಿಕೆಶಿ ಬಂಧನ ಖಂಡಿಸಿ ಟೈರ್‌ಗೆ ಬೆಂಕಿ

ನಳಿನ್‌ ಕುಮಾರ್‌ ಕಾರಿಗೆ ಮುತ್ತಿಗೆ ಹಾಕಲು ಕಾದಿದ್ದ ಕಾರ್ಯಕರ್ತರಿಗೆ ತಡೆ

​ಪ್ರಜಾವಾಣಿ ವಾರ್ತೆ
Published 4 ಸೆಪ್ಟೆಂಬರ್ 2019, 11:23 IST
Last Updated 4 ಸೆಪ್ಟೆಂಬರ್ 2019, 11:23 IST

ಹಾಸನ: ಕಾಂಗ್ರೆಸ್‌ ಶಾಸಕ ಡಿ.ಕೆ.ಶಿವಕುಮಾರ್ ಬಂಧನ ಖಂಡಿಸಿ ನಗರ ಹಾಗೂ ಜಿಲ್ಲೆಯ ವಿವಿಧೆಡೆ ಧರಣಿ ನಡೆಸಿದ ಕಾಂಗ್ರೆಸ್‌ ಕಾರ್ಯಕರ್ತರು, ಟೈರ್ ಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದರು.

ಕಾಂಗ್ರೆಸ್‌ ಜಿಲ್ಲಾ ಘಟಕದ ಅಧ್ಯಕ್ಷ ಜಾವಗಲ್‌ ಮಂಜುನಾಥ್‌ ನೇತೃತ್ವದಲ್ಲಿ ನೂರಾರು ಕಾರ್ಯಕರ್ತರು ಎನ್‌.ಆರ್‌.ವೃತ್ತದಲ್ಲಿ ಟೈರ್‌ಗೆ ಬೆಂಕಿ ಹಚ್ಚಿ, ರಸ್ತೆತಡೆ ನಡೆಸಿದರು. ಕೇಂದ್ರ ಮತ್ತು ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು.

‘ರಾಜಕೀಯ ದುರುದ್ದೇಶದಿಂದ ಕಾಂಗ್ರೆಸ್‌ನ ಪ್ರಮುಖ ನಾಯಕರನ್ನು ಬಂಧಿಸುವ ಮೂಲಕ ಬಿಜೆಪಿ ಸೇಡಿನ ರಾಜಕೀಯ ಮಾಡುತ್ತಿದೆ. ಈ ಮೂಲಕ ಕಾಂಗ್ರೆಸ್ ಕಟ್ಟಿಹಾಕಲು ಸಾಧ್ಯವಿಲ್ಲ’ ಎಂದು ಕಿಡಿಕಾರಿದರು.

ADVERTISEMENT

ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್‌ ಕುಮಾರ್‌ ಕಟೀಲ್‌ ಅಧ್ಯಕ್ಷತೆಯಲ್ಲಿ ಬಿಜೆಪಿ ಕಾರ್ಯಕರ್ತರ ಸಭೆ ನಡೆಯುತ್ತಿದ್ದ ಗುರುರಾಜ ಕಲ್ಯಾಣ ಮಂಟಪಕ್ಕೆ ಮುತ್ತಿಗೆ ಹಾಕಲು ಉದ್ದೇಶಿಸಿದ್ದ ಕಾಂಗ್ರೆಸ್‌ ಕಾರ್ಯಕರ್ತರಿಗೆ ಕಾಂಗ್ರೆಸ್‌ ಭವನದ ಬಳಿಯೇ ಪೊಲೀಸರು ತಡೆದರು.
ಬಳಿಕ ಕಾರ್ಯಕರ್ತರು ಡೇರಿ ವೃತ್ತದ ಬಳಿ ನಳಿನ್‌ ಅವರ ಕಾರಿಗೆ ಮುತ್ತಿಗೆ ಹಾಕಲು ಕಾದು ಕುಳಿತರು. ವಿಷಯ ತಿಳಿದು ಪೊಲೀಸರು ಅಲ್ಲಿಗೂ ತೆರಳಿ ಎಲ್ಲರನ್ನೂ ಅಲ್ಲಿಂದ ಕಳುಹಿಸಿದರು. ಬಿಜೆಪಿ ಕಾರ್ಯಕ್ರಮ ನಡೆಯುತ್ತಿದ್ದ ಸ್ಥಳಕ್ಕೆ ಬಿಗಿ ಪೊಲೀಸ್‌ ಬಂದೋಬಸ್ತ್‌ ಮಾಡಲಾಗಿತ್ತು.

ಕಾಂಗ್ರೆಸ್ ಪ್ರತಿಭಟನೆಗೆ ಜೆಡಿಎಸ್ ಸಹ ನೈತಿಕ ಬೆಂಬಲ ವ್ಯಕ್ತಪಡಿಸಿದೆ. ‘ವಿಚಾರಣೆಗೆ ಎಲ್ಲಾ ರೀತಿಯ ಸಹಕಾರ ನೀಡಿದ್ದರೂ, ವಿಳಂಬವಾಗಿ ಶಿವಕುಮಾರ್‌ ಅವರನ್ನು ಬಂಧಿಸಿರುವುದನ್ನು ನೋಡಿದರೆ ಇದರ ಹಿಂದೆ ರಾಜಕೀಯ ದುರುದ್ದೇಶ ಅಡಗಿದೆ’ ಎಂದು ಜೆಡಿಎಸ್ ರಾಜ್ಯ ಘಟಕದ ಅಧ್ಯಕ್ಷ ಎಚ್.ಕೆ.ಕುಮಾರಸ್ವಾಮಿ ಆರೋಪಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.