ADVERTISEMENT

‌ಕರ್ತವ್ಯದ ವೇಳೆ ವೈದ್ಯರು ಹೊರಗೆ ಕೆಲಸ ಮಾಡುವಂತಿಲ್ಲ: ಸಚಿವ ಡಾ.ಶರಣಪ್ರಕಾಶ ಪಾಟೀಲ

​ಪ್ರಜಾವಾಣಿ ವಾರ್ತೆ
Published 26 ಅಕ್ಟೋಬರ್ 2025, 2:15 IST
Last Updated 26 ಅಕ್ಟೋಬರ್ 2025, 2:15 IST
   

ಹಾಸನ: ‘ವೈದ್ಯರು ಬೆಳಿಗ್ಗೆಯಿಂದ ಸಂಜೆ 4 ಗಂಟೆಯವರೆಗೆ ಆಸ್ಪತ್ರೆಯಲ್ಲಿದ್ದು ಕರ್ತವ್ಯ ನಿರ್ವಹಿಸಬೇಕು. ಕರ್ತವ್ಯದ ವೇಳೆಯಲ್ಲಿ ಹೊರಗಡೆ ಕೆಲಸ ಮಾಡುತ್ತಿರುವ ಬಗ್ಗೆ ದೂರುಗಳು ಬಂದರೆ, ಕಟ್ಟುನಿಟ್ಟಿನ ಕ್ರಮಕೈಗೊಳ್ಳಬೇಕು’ ಎಂದು ವೈದ್ಯಕೀಯ ಶಿಕ್ಷಣ ಹಾಗೂ ಕೌಶಲಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಸಚಿವ ಡಾ. ಶರಣಪ್ರಕಾಶ ಪಾಟೀಲ, ಹಿಮ್ಸ್‌ ನಿರ್ದೇಶಕರಿಗೆ ಸೂಚಿಸಿದರು.

ಹಿಮ್ಸ್ ಸಭಾಂಗಣದಲ್ಲಿ ಶನಿವಾರ ಹಾಸನ ವೈದ್ಯಕಿಯ ವಿಜ್ಞಾನಗಳ ಸಂಸ್ಥೆಗೆ ಸಂಬಂಧಿಸಿದ ಪ್ರಗತಿ ಪರಿಶೀಲನೆ ಸಭೆಯಲ್ಲಿ ಮಾತನಾಡಿದ ಅವರು, ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಕಾಮಗಾರಿ ಶೀಘ್ರ ಪೂರ್ಣಗೊಳಿಸಿ, ಸಾರ್ವಜನಿಕರ ಬಳಕೆಗೆ ನೀಡಬೇಕು. ಆಸ್ಪತ್ರೆಗೆ ಅವಶ್ಯವಿರುವ ಹುದ್ದೆಗಳ ಭರ್ತಿಗೆ ಸರ್ಕಾರಕ್ಕೆ ಪ್ರಸ್ತಾವ ಸಲ್ಲಿಸಬೇಕು ಎಂದು ತಿಳಿಸಿದರು.

ಕಾಮಗಾರಿ ಪೂರ್ಣಗೊಂಡಿರುವ ಕಟ್ಟಡಗಳನ್ನು ಬಳಕೆ ಮಾಡಿಕೊಳ್ಳಬೇಕು ಎಂದ ಅವರು, ಬ್ಯಾಕ್ ಲಾಗ್ ಹಾಗೂ 371 ಜೆ ಅಡಿ ಅನುಮೋದನೆಗೊಂಡು ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಕ್ರಮ ಕೈಗೊಳ್ಳುವಂತೆ ತಿಳಿಸಿದರು.

ADVERTISEMENT

ಬಳಕೆಗೆ ಬಾರದ ಆಂಬುಲೆನ್ಸ್‌ ನಿಷ್ಕ್ರಿಯಗೊಳಿಸಿ, ಸಿ.ಎಸ್‌.ಆರ್. ಅಡಿಯಲ್ಲಿ ಅಗತ್ಯವಿರುವ ಆಂಬುಲೆನ್ಸ್‌ ಪಡೆದುಕೊಳ್ಳಬೇಕು. ಖಾಲಿ ಇರುವ ಹುದ್ದೆಗಳಿಗೆ ಹೊರಗುತ್ತಿಗೆ ಆಧಾರದ ಮೇಲೆ ನೇಮಕ ಮಾಡಿಕೊಳ್ಳುವಂತೆ ನಿರ್ದೇಶನ ನೀಡಿದರು.

ಸಂಸದ ಶ್ರೇಯಸ್ ಪಟೇಲ್ ಅವರು ಮಾತನಾಡಿ, ಎಬಿಆರ್‌ಕೆ ಯೋಜನೆಯಡಿ ಸೌಲಭ್ಯ ಪಡೆಯಲು ರೋಗಿಗಳ ಆಧಾರ್ ಕಾರ್ಡ್‌ನೊಂದಿಗೆ ಜೋಡಣೆ ಆಗಿರುವ ಮೊಬೈಲ್ ಇರುವುದಿಲ್ಲ. ಒಟಿಪಿ ಪಡೆಯಬೇಕಾಗಿದ್ದು, ಇದರಿಂದ ತೊಂದರೆಯಾಗುತ್ತಿದೆ. ಈ ಸಮಸ್ಯೆಯನ್ನು ಬಗೆಹರಿಸುವಂತೆ ಮನವಿ ಮಾಡಿದರು.

ಬೋಧನೆ ವಿಭಾಗಕ್ಕೆ 98 ಹೆಚ್ಚುವರಿ ಹುದ್ದೆಗಳ ಭರ್ತಿಗಾಗಿ ಸರ್ಕಾರಕ್ಕೆ ಪ್ರಸ್ತಾವ ಸಲ್ಲಿಸಲಾಗಿದೆ. ಸಿ.ಎಸ್.ಆರ್. ಅನುದಾನದಲ್ಲಿ ಸಿಟಿ ಸ್ಕ್ಯಾನಿಂಗ್ ನೀಡಲಾಗಿದೆ ಎಂದು ಹಿಮ್ಸ್‌ ನಿರ್ದೇಶಕ ಡಾ.ರಾಜಣ್ಣ ಮಾಹಿತಿ ನೀಡಿದರು.

ಹಾಸನ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಪಟೇಲ್ ಶಿವಪ್ಪ, ಜಿಲ್ಲಾಧಿಕಾರಿ ಕೆ.ಎಸ್. ಲತಾಕುಮಾರಿ, ಹಿಮ್ಸ್ ಆಡಳಿತ ಪರಿಷತ್ ಸದಸ್ಯ ರವೀಶ್, ವೈದ್ಯಕೀಯ ಅಧಿಕ್ಷಕ ಡಾ.ರಾಘವೇಂದ್ರ ಪ್ರಸಾದ್, ಡಾ.ರವಿಕುಮಾರ್, ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ನಾಗಪ್ಪ, ಮುಖ್ಯ ಆಡಳಿತಾಧಿಕಾರಿ ರೇಖಾ ಹಾಗೂ ಮತ್ತಿತರರು ಉಪಸ್ಥಿತರಿದ್ದರು.

ನಂತರ ಸಚಿವರು ಉದ್ಘಾಟನೆಗೆ ಸಿದ್ಧವಾಗಿರುವ ಗ್ರಂಥಾಲಯ ಕಟ್ಟಡ ಹಾಗೂ ನಗರದ ಡೈರಿ ವೃತ್ತದಲ್ಲಿರುವ ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರಕ್ಕೆ ಸಚಿವ ಪಾಟೀಲ ಭೇಟಿ ನೀಡಿ ಪರಿಶೀಲಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.