ADVERTISEMENT

ಹೆದ್ದಾರಿಗಳಲ್ಲಿ ತುರ್ತು ಚಿಕಿತ್ಸಾ ಕೇಂದ್ರ

ಕ್ರಿಯಾ ಯೋಜನೆ ರೂಪಿಸಲು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸೂಚನೆ

​ಪ್ರಜಾವಾಣಿ ವಾರ್ತೆ
Published 18 ಸೆಪ್ಟೆಂಬರ್ 2019, 12:35 IST
Last Updated 18 ಸೆಪ್ಟೆಂಬರ್ 2019, 12:35 IST
ಹಾಸನದಲ್ಲಿ ನಡೆದ ರಸ್ತೆ ಸುರಕ್ಷತಾ ಸಭೆಯಲ್ಲಿ ಜಿಲ್ಲಾಧಿಕಾರಿ ಆರ್‌.ಗಿರೀಶ್‌ ಮಾತನಾಡಿದರು.
ಹಾಸನದಲ್ಲಿ ನಡೆದ ರಸ್ತೆ ಸುರಕ್ಷತಾ ಸಭೆಯಲ್ಲಿ ಜಿಲ್ಲಾಧಿಕಾರಿ ಆರ್‌.ಗಿರೀಶ್‌ ಮಾತನಾಡಿದರು.   

ಹಾಸನ: ರಾಜ್ಯ ಹಾಗೂ ರಾಷ್ಟ್ರೀಯ ಹೆದ್ದಾರಿಗಳಲ್ಲಿ ರಸ್ತೆ ಅಪಘಾತದ ಮುನ್ನೆಚ್ಚರಿಕೆ ಕ್ರಮಗಳ ಬಗ್ಗೆ ಸೂಚನಾ ಫಲಕ ಪ್ರದರ್ಶಿಸಬೇಕು ಎಂದು ಜಿಲ್ಲಾಧಿಕಾರಿ ಆರ್.ಗಿರೀಶ್‌ ಅಧಿಕಾರಿಗಳಿಗೆ ಸೂಚಿಸಿದರು.

ರಸ್ತೆ ಸುರಕ್ಷತಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಸಾರ್ವಜನಿಕರ ಅನುಕೂಲಕ್ಕಾಗಿ ಹೆದ್ದಾರಿಗಳಲ್ಲಿ ತುರ್ತು ಚಿಕಿತ್ಸಾ ಕೇಂದ್ರಗಳನ್ನು ಸ್ಥಾಪನೆ ಮಾಡಲು ಕ್ರಿಯಾ ಯೋಜನೆ ತಯಾರಿಸುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ರಸ್ತೆ ಅಪಘಾತ ತಗ್ಗಿಸಲು ಮುಂಜಾಗ್ರತಾ ಕ್ರಮ ಕೈಗೊಳ್ಳಬೇಕು. ಸುರಕ್ಷತೆ ದೃಷ್ಟಿಯಿಂದ ಶಾಲಾ ವಾಹನಗಳಲ್ಲಿ ನಿಗದಿತ ಸಂಖ್ಯೆಗಿಂತ ಹೆಚ್ಚು ಮಕ್ಕಳನ್ನು ಸಾಗಿಸದಂತೆ ಕ್ರಮ ವಹಿಸಬೇಕು. ಶಾಲೆಗಳಲ್ಲಿ ನಡೆಯುವ ಪೋಷಕರ ಸಭೆಯಲ್ಲಿ ಅರಿವು ಮೂಡಿಸುವಂತೆ ಶಿಕ್ಷಣ ಇಲಾಖೆ ಹಾಗೂ ಸಾರಿಗೆ ಇಲಾಖೆ ಅಧಿಕಾರಿಗಳಿಗೆ ತಿಳಿಸಿದರು.

ADVERTISEMENT

ಕಾರ್ಮಿಕರನ್ನು ಕರೆದೊಯ್ಯುವ ವಾಹನಗಳಲ್ಲಿ ಹೆಚ್ಚು ಜನರನ್ನು ಸಾಗಿಸುವ ವಾಹನ ಮಾಲೀಕರಿಗೆ ನೋಟಿಸ್‌ ನೀಡಬೇಕು. ಪದೇ ಪದೇ ಅಪಘಾತ ಸಂಭವಿಸುವ ಸ್ಥಳಗಳನ್ನು ಗುರುತಿಸಿದ್ದು, ಅದಕ್ಕೆ ಕಾರಣ ತಿಳಿದು ಆರು ತಿಂಗಳಲ್ಲಿ ವರದಿ ಸಲ್ಲಿಸಬೇಕು ಎಂದು ನಿರ್ದೇಶನ ನೀಡಿದರು.

ಪೊಲೀಸ್ ವರಿಷ್ಠಾಧಿಕಾರಿ ರಾಮ್ ನಿವಾಸ್ ಸೆಪಟ್ ಮಾತನಾಡಿ, ಹೆಲ್ಮೆಟ್‌ ಧರಿಸದೆ ವಾಹನ ಚಲಾಯಿಸುವುದು, ಮದ್ಯ ಸೇವಿಸಿ ವಾಹನ ಓಡಿಸುವುದು, ನಿರ್ಲಕ್ಷ್ಯದ ಚಾಲನೆಯಿಂದ ಅಪಘಾತ ಸಂಭವಿಸುತ್ತದೆ. ಅಪಘಾತ ಸಂಭವಿಸುವ ಪ್ರದೇಶಗಳನ್ನು ಪ್ರಾದೇಶಿಕ ಸಾರಿಗೆ ಹಾಗೂ ಪೊಲೀಸ್ ಇಲಾಖೆ ಜಂಟಿ ಸಮೀಕ್ಷೆ ಮಾಡಲಾಗಿದ್ದು, ಸಾರ್ವಜನಿಕರಿಗೆ ಹೆಚ್ಚಿನ ಅರಿವು ಮೂಡಿಸಲಾಗುವುದು ಎಂದರು.
ಸಾರಿಗೆ ಅಧಿಕಾರಿ ಆರ್.ಅಶೋಕ್ ಕುಮಾರ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.