ADVERTISEMENT

ನೌಕರರ ವಜಾ, ವರ್ಗಾವಣೆಗೆ ವಿರೋಧ

ಕೆಎಸ್‌ಆರ್‌ಟಿಸಿ ಮುಷ್ಕರ ಬೆಂಬಲಿಸಿ ಸಿಐಟಿಯು ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 12 ಏಪ್ರಿಲ್ 2021, 13:16 IST
Last Updated 12 ಏಪ್ರಿಲ್ 2021, 13:16 IST
ಹಾಸನದ ಹೇಮಾವತಿ ಪ್ರತಿಮೆ ಎದುರು ಸಿಐಟಿಯು ವತಿಯಿಂದ ಪ್ರತಿಭಟನೆ ನಡೆಸಲಾಯಿತು
ಹಾಸನದ ಹೇಮಾವತಿ ಪ್ರತಿಮೆ ಎದುರು ಸಿಐಟಿಯು ವತಿಯಿಂದ ಪ್ರತಿಭಟನೆ ನಡೆಸಲಾಯಿತು   

ಹಾಸನ: ಸಾರಿಗೆ ನೌಕರರ ವಜಾ, ವರ್ಗಾವಣೆ ಹಾಗೂ ಮುಖಂಡರ ಬಂಧನ ಖಂಡಿಸಿ ಸಿಐಟಿಯು ವತಿಯಿಂದ ಸೋಮವಾರ ನಗರದ ಹೇಮಾವತಿ ಪ್ರತಿಮೆ ಬಳಿ ಪ್ರತಿಭಟನೆ ನಡೆಸಲಾಯಿತು.

ಸಾರಿಗೆ ಸಂಸ್ಥೆ ನೌಕರರ ನ್ಯಾಯಯುತ ಬೇಡಿಕೆಗಳನ್ನು ಸೌಹಾರ್ದಯುತವಾಗಿ ಮಾತುಕತೆ ಮೂಲಕ ಇತ್ಯರ್ಥ ಮಾಡಬೇಕು. ಆದರೆ ಸರ್ಕಾರ ಬೇಡಿಕೆ ಈಡೇರಿಸುವ ಬದಲು ಅವರು ನಡೆಸುತ್ತಿರುವ ಕಾನೂನು ಬದ್ಧ ಮುಷ್ಕರ ನಿಷೇಧ ಮಾಡಿರುವ ಕ್ರಮ ಖಂಡನೀಯ. ಕೂಡಲೇ ಸರ್ಕಾರ ನೌಕರರ ಜತೆ ಮಾತುಕತೆ ನಡೆಸಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.

ಕಳೆದ ಬಾರಿ ಮುಷ್ಕರ ನಡೆಸಿದಾಗ ಸರ್ಕಾರ ನೀಡಿದ್ದ ಭರವಸೆಗಳನ್ನು ಈಡೇರಿಸಿಲ್ಲ. ನೌಕರರು ಕಾನೂನು ಬದ್ಧವಾಗಿ ಮುಷ್ಕರ ತಿಳುವಳಿ ಪತ್ರ ನೀಡಿದ್ದರು. ಕಾನೂನಲ್ಲಿನ ಅವಕಾಶಗಳನ್ನು ಬಳಸಿಕೊಂಡು ಅವರ ನ್ಯಾಯಯುತ ಮುಷ್ಕರ ನಿಷೇಧ ಮಾಡಿರುವ ಕ್ರಮ ಸರ್ಕಾರ ನಿರ್ಲಕ್ಷ್ಯ ಧೋರಣೆಯಾಗಿದೆ ಎಂದು ದೂರಿದರು.

ADVERTISEMENT

ಮುಖಂಡರೊಂದಿಗೆ ಸೌಹಾರ್ದಯುವ ಮಾತುಕತೆ ನಡೆಸಿ, ಸಮಸ್ಯೆ ಬಗೆಹರಿಸಲು ಮುಂದಾಗಬೇಕು. ಯುಗಾದಿ ಹಬ್ಬದ ಸಂದರ್ಭದಲ್ಲಿ ಸಾರ್ವಜನಿಕರಿಗೆ ತೊಂದರೆ ಉಂಟಾಗದಂತೆ ಸುಗಮ ಸಂಚಾರ ವ್ಯವಸ್ಥೆಯನ್ನು ಖಾತರಿ ಪಡಿಸಬೇಕು ಎಂದು ಒತ್ತಾಯಿಸಿದರು.

ಪ್ರತಿಭಟನೆಯಲ್ಲಿ ಸಿಐಟಿಯು ಜಿಲ್ಲಾಧ್ಯಕ್ಷ ಧರ್ಮೇಶ್‌, ಪ್ರಧಾನ ಕಾರ್ಯದರ್ಶಿ ಎಂ.ಬಿ. ಪುಷ್ಪ, ಕಾರ್ಯದರ್ಶಿ ಅರವಿಂದ್‌, ಕೆಪಿಆರ್‌ಎಸ್‌ ಜಿಲ್ಲಾ ಅಧ್ಯಕ್ಷ ಎಚ್‌.ಆರ್‌. ನವೀನ್‌ ಕುಮಾರ್‌, ದಲಿತ ಹಕ್ಕುಗಳ ಸಮಿತಿ ಜಿಲ್ಲಾಧ್ಯಕ್ಷ ಎಂ.ಜಿ. ಪೃಥ್ವಿ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.