ಅರಸೀಕೆರೆ: ‘ಪ್ರಸ್ತುತ ದಿನಗಳಲ್ಲಿ ಸರ್ಕಾರಿ ಶಾಲೆಗಳಲ್ಲಿ ಗುಣಮಟ್ಟದ ಶಿಕ್ಷಣ ಮತ್ತು ಇಂಗ್ಲಿಷ್ ಪಠ್ಯಕ್ರಮಕ್ಕೆ ಚಾಲನೆ ದೊರಕುತ್ತಿದ್ದಂತೆ ಮಕ್ಕಳ ದಾಖಲಾತಿಗೆ ಬೇಡಿಕೆ ಸೃಷ್ಟಿಯಾಗಿದೆ’ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಮೋಹನ್ ಕುಮಾರ್ ಹೇಳಿದರು.
ನಗರದ ಸರ್ಕಾರಿ ಬಾಲಕಿಯರ ಪ್ರೌಢಶಾಲೆಯಲ್ಲಿ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪುರಸ್ಕಾರ ಹಾಗೂ ಅಭಿನಂದನಾ ಸಮಾರಂಭದಲ್ಲಿ ಮಾತನಾಡಿದರು.
‘ತಾಲ್ಲೂಕಿನ ಎಲ್ಲ ಹೋಬಳಿ ಕೇಂದ್ರಗಳ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗಳು ಸೇರಿದಂತೆ ಕೆಲವು ಶಾಲೆಗಳಲ್ಲಿ ಮಕ್ಕಳ ದಾಖಲಾತಿ ಗಣನೀಯವಾಗಿ ಹೆಚ್ಚಾಗಿದೆ. ಚಿಂದೆನಹಳ್ಳಿ ಗಡಿಯಲ್ಲಿರುವ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರು ಖಾಸಗಿ ಶಾಲೆಗಳಂತೆ ವಾಹನಗಳನ್ನು ಮಾಡಿ ಮಕ್ಕಳನ್ನು ಪ್ರೋತ್ಸಾಹಿಸುತ್ತಿದ್ದಾರೆ. ಇದರಿಂದ ನೆರೆಯ ತಾಲ್ಲೂಕಿನಿಂದಲೂ ಮಕ್ಕಳು ಬರುತ್ತಿದ್ದಾರೆ. ಶಾಲಾ ಶಿಕ್ಷಣ ಬಲವರ್ಧನೆಗೆ ಹಲವು ಯೋಜನೆಗಳನ್ನು ರೂಪಿಸಿಕೊಂಡಿದ್ದೇವೆ’ ಎಂದರು.
ಸರ್ಕಾರಿ ನೌಕರ ಸಂಘದ ನಿರ್ದೇಶಕಿ, ಹಳೇ ವಿದ್ಯಾರ್ಥಿ ಸಂಘದ ಅಧ್ಯಕ್ಷೆ ಕಮಲಾ ಮಾತನಾಡಿ, ‘ನಿವೃತ ಶಿಕ್ಷಕ ಕೃಷ್ಣ ನಾಯಕ್ ಸೌಮ್ಯ ಸ್ವಭಾವದವರು, ಮಕ್ಕಳನ್ನು ಬಹಳ ಪ್ರೀತಿಸುತ್ತಿದ್ದರು. ಅವರ ನಿವೃತ್ತಿ ಜೀವನ ಸಂತಸಮಯವಾಗಿ ಇರಲಿ. ಇಲ್ಲಿನ ವಿದ್ಯಾರ್ಥಿಗಳು ಶಾಲೆಯಿಂದ ನಿರ್ಗಮಿಸಿದಾಗ ಹಳೇ ವಿದ್ಯಾರ್ಥಿಗಳ ಸಂಘಕ್ಕೆ ಸೇರಿಕೊಳ್ಳುವ ಮೂಲಕ ಶಾಲೆಗೆ ಬೆಂಬಲವಾಗಿ ನಿಲ್ಲಬೇಕು’ ಎಂದರು.
ಉಪ ಪ್ರಾಂಶುಪಾಲ ಜಗದೀಶ್ ಹಿರೇಮಠ ಮಾತನಾಡಿ, ‘ಪ್ರತಿ ವರ್ಷ ಪ್ರತಿಭಾ ಪುರಸ್ಕಾರ ಪಡೆಯುವವರ ಸಂಖ್ಯೆ ಹೆಚ್ಚಾಗಬೇಕು. ವಿದ್ಯಾರ್ಥಿಗಳು ಓದಿನಲ್ಲಿ ಆಸಕ್ತಿ ವಹಿಸಿ ಪೋಷಕರ ಶ್ರಮ ಸಾರ್ಥಕಪಡಿಸಬೇಕು’ ಎಂದರು.
ವೇದಿಕೆಯಲ್ಲಿ ನಿವೃತ ಶಿಕ್ಷಕ ಕೃಷ್ಣನಾಯಕ್ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು.
ಪ್ರೌಢಶಾಲೆಗಳ ವಿಷಯವಾರು ಶಿಕ್ಷಕರ ಸಂಘದ ಅಧ್ಯಕ್ಷರು, ಸರ್ಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಗೋವಿಂದರಾಜ್ ಹಾಗೂ ಉಪನ್ಯಾಸಕರು, ಬಾಲಕಿಯರ ಪ್ರೌಢಶಾಲಾ ಶಿಕ್ಷಕ ವೃಂದ ಮತ್ತು ಸಿಬ್ಬಂದಿ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.